ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲ ಗ್ರಾ.ಪಂ.ಗಳಲ್ಲೂ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಿಸಿ

ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಖಡಕ್‌ ಸೂಚನೆ
Last Updated 2 ಸೆಪ್ಟೆಂಬರ್ 2021, 4:13 IST
ಅಕ್ಷರ ಗಾತ್ರ

ಶಿವಮೊಗ್ಗ: ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಘನತ್ಯಾಜ ವಿಲೇವಾರಿ ಮಾಡಲು ಈವರೆಗೆ ಸ್ಥಳಾವಕಾಶ ಗುರುತಿಸದಿರುವ ಗ್ರಾಮಗಳಲ್ಲಿ ಘನ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆಗೆ ಸ್ಥಳೀಯ ಸಂಸ್ಥೆಗಳ ಜತೆಗೆ ಚರ್ಚಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಡಳಿತ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತ್ಯಾಜ್ಯ ನಿರ್ವಹಣೆ, ಕೆರೆಗಳ ಒತ್ತುವರಿ, ರಸ್ತೆ ಸುರಕ್ಷತೆ, ಕಾರ್ಮಿಕ ಪದ್ಧತಿ, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಸ್ಥಿತಿಗತಿಗಳ ಕುರಿತು ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ 268 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ಸಮರ್ಪಕವಾಗಿ ಬೇರ್ಪಡಿಸಿ, ನಿಯಮಾನುಸಾರ ವಿಲೇ ಮಾಡಲು ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ತ್ಯಾಜ್ಯದ ವಿಲೇವಾರಿಯ ಬಗ್ಗೆಯೂ ಮಾಹಿತಿ ಒದಗಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪ್ಲಾಸ್ಟಿಕ್‌ ಬಳಕೆ ವಿರುದ್ಧ ಮೊಕದ್ದಮೆ ದಾಖಲಿಸಿ: ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸುವಂತೆ ಸರ್ಕಾರದ ಆದೇಶವಿದ್ದರೂ, ಅದನ್ನು ಸಮರ್ಪಕ ವಾಗಿ ಅನುಷ್ಠಾನಕ್ಕೆ ತರುವುದರಲ್ಲಿ ವಿಳಂಬವಾಗುತ್ತಿದೆ. ಈ ಸಂಬಂಧ ತಹಶೀಲ್ದಾರರು, ಪರಿಸರ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಪ್ಲಾಸ್ಟಿಕ್ ಬಳಸುವವರ ವಿರುದ್ಧ ಮೊಕದ್ದಮೆ ದಾಖಲಿಸಿ ಎಂದು ಸೂಚಿಸಿದರು.

ಕೆರೆ ಒತ್ತುವರಿ ತೆರವುಗೊಳಿಸಿ: ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಕೆರೆಗಳ ಒತ್ತುವರಿ ಆಗಿರುವ ಬಗ್ಗೆ ದೂರುಗಳು ದಾಖಲಾಗುತ್ತಲೇ ಇವೆ. ಈ ಕೆರೆಗಳಿಗೆ ಸಂಬಂಧಿಸಿದಂತೆ ಸರ್ಕಾರದ ದಾಖಲೆಗಳನ್ನು ಪರಿಶೀಲಿಸಿ, ಸರ್ವೆ ಮಾಡಿಸಿ, ಒತ್ತುವರಿಯಾಗಿದ್ದಲ್ಲಿ ಒತ್ತುವರಿ ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಕಾರ್ಯಕ್ಕಾಗಿ ಮಾಸಿಕವಾಗಿ ಗುರಿ ನಿಗದಿಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಇಲಾಖಾಧಿಕಾರಿಗಳು ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿ ಮಾಹಿತಿ ನೀಡದಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ಭಾರಿ ಪ್ರಮಾಣದ ನಷ್ಟ ಉಂಟಾಗುತ್ತಿದೆ. ಪ್ರಕರಣಗಳ ವಿಚಾರಣೆಗಳಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ನಿರ್ವಹಿಸಿ, ಮಾಹಿತಿ ದಾಖಲಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಹೊನ್ನಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT