ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಆತ್ಮಹತ್ಯೆ, ಆಕಸ್ಮಿಕ ಸಾವು ಪ್ರಕರಣಗಳಿಗೆ ತ್ವರಿತ ಪರಿಹಾರ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಸೂಚನೆ
Last Updated 19 ನವೆಂಬರ್ 2021, 15:51 IST
ಅಕ್ಷರ ಗಾತ್ರ

ಶಿವಮೊಗ್ಗ: ರೈತರ ಆತ್ಮಹತ್ಯೆ, ಹಾವು ಕಡಿತ, ಆಕಸ್ಮಿಕ ಸಾವು ಮತ್ತಿತರ ಪ್ರಕರಣಗಳಲ್ಲಿ ಸಂತ್ರಸ್ತ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಲು ಜಿಲ್ಲಾಡಳಿತದ ಅನುದಾನ ಬಳಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸಹಾಯಧನ ಬಿಡುಗಡೆ ಮಾಡಲು ಸರ್ಕಾರ ಅನುದಾನ ಬಿಡುಗಡೆ ಮಾಡುವವರೆಗೆ ವಿಳಂಬ ಮಾಡಬಾರದು. ಜಿಲ್ಲಾಡಳಿತದದ ಅನುದಾನವನ್ನು ಬಳಸಿಕೊಂಡು ತ್ವರಿತವಾಗಿ ಪರಿಹಾರಧನ ವಿತರಿಸಲು ಕ್ರಮಕೈಗೊಳ್ಳಬೇಕು. ಪ್ರಸ್ತುತ ಸುರಿಯುತ್ತಿರುವ ಮಳೆಯಿಂದ ಆಗುತ್ತಿರುವ ಬೆಳೆ, ಜೀವಹಾನಿ ಮಾಹಿತಿ ಪಡೆದು ತಕ್ಷಣ ಸಲ್ಲಿಸಬೇಕು ಎಂದು ತಾಕೀತು ಮಾಡಿದರು.

ಜಿಲ್ಲೆಯಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳನ್ನುಕಾಲಮಿತಿಯೊಳಗಾಗಿ ಪೂರ್ಣಗೊಳಿಸಬೇಕು. ವರದಿ ನೀಡುವಂತೆ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾಮಗಾರಿಗಳಿಗೆ ಬಿಡುಗಡೆಯಾಗಿರುವ ಅನುದಾನ ಸರ್ಕಾರಕ್ಕೆ ವಾಪಸ್ ಹೋಗದಂತೆ ನಿಯೋಜಿತ ಉದ್ದೇಶಕ್ಕೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ವಸತಿ ಯೋಜನೆಗಳಲ್ಲಿ ಆಯ್ಕೆಯಾದ ಫಲಾನುಭವಿಗಳು ಕೆಲವು ವರ್ಷಗಳಿಂದ ಮನೆ ಕಟ್ಟಿಕೊಂಡಿಲ್ಲ. ಕಳೆದ ಸಾಲಿನಲ್ಲಿ ಮಳೆಯಿಂದ ಪೂರ್ಣ ಪ್ರಮಾಣದಲ್ಲಿ ಹಾಗೂ ಭಾಗಶಃ ಹಾನಿಯಾದ ಮನೆಗಳ ದುರಸ್ತಿ ಹಾಗೂ ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಆದರೂ ಹಲವು ಫಲಾನುಭವಿಗಳು ಕಟ್ಟಡ ನಿರ್ಮಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಬೇಕು. ಫಲಾನುಭವಿಗಳು ಈಗಾಗಲೇ ಮನೆ ನಿರ್ಮಿಸಿಕೊಂಡಿದ್ದರೆ ಅಂತಹ ಫಲಾನುಭವಿಗಳಿಗೆ ನಿಯಮಾನುಸಾರ ಸಹಾಯಧನ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೊರೊನಾ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಈಗಾಗಲೆ ಶೇ 90ರಷ್ಟು ಮಂದಿ ಮೊದಲ ಹಂತದ ಹಾಗೂ 52ರಷ್ಟು ಮಂದಿ 2ನೇ ಹಂತದ ಲಸಿಕೆ ಪಡೆದಿದ್ದಾರೆ. 2ನೇ ಹಂತದ ಲಸಿಕೆ ಪಡೆಯುವಲ್ಲಿ ಬಹುಸಂಖ್ಯೆಯ ಜನ ಹಿಂದೇಟು ಹಾಕುತ್ತಿದ್ದಾರೆ. ದ್ವಿತೀಯ ಹಂತದ ಲಸಿಕೆ ಹಾಕಿಸಿಕೊಳ್ಳಲು ಮನವೊಲಿಸಬೇಕು. ಆಶಾ, ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಅವಿರತವಾಗಿ ಶ್ರಮಿಸುತ್ತಿದ್ದಾರೆ. 2ನೇ ಹಂತದ ಲಸಿಕೆ ಪಡೆದರೆ ಸಂಭವನೀಯ ಕೊರೊನಾ ಅಲೆ ಸಮರ್ಥವಾಗಿ ಎದುರಿಸಲು ಸಾಧ್ಯವಾಗಲಿದೆ. ಲಸಿಕೆ ಪಡೆದುಕೊಳ್ಳದಿರುವ ಜನರು ತಮ್ಮ ಸಮೀಪದ ಆರೋಗ್ಯ ಕೇಂದ್ರಕ್ಕೆ ತೆರಳಿ ಆರೋಗ್ಯ ಕ್ಷಮತೆ ಹೆಚ್ಚಿಸುವ ಲಸಿಕೆ ಪಡೆಯುವಂತೆ ಮನವೊಲಿಸಬೇಕು ಎಂದು ಸೂಚಿಸಿದರು.

ವಿವಿಧ ನಿಗಮ-ಮಂಡಳಿಗಳಲ್ಲಿ ಅನುಷ್ಠಾನದಲ್ಲಿರುವ ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳಿಗೆ ಕೊಳವೆಬಾವಿ ಕೊರೆಸಿಕೊಡುವ ಹಾಗೂ ಈಗಾಗಲೆ ಕೊರೆಸಲಾದ ಕೊಳವೆಬಾವಿಗಳಿಗೆ ಪಂಪ್‌ ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಲು ನಿಗಮಗಳ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಎಂದರು.

ಜಿಲ್ಲಾ ಪಂಚಾಯತಿ ಸಿಇಒ ಎಂ.ಎಲ್.ವೈಶಾಲಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT