ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಎಲ್ಲ ರೈತರಿಗೂ ₹500 ಪ್ರೋತ್ಸಾಹ ಧನ ಕೊಡುವಂತೆ ಆಗ್ರಹ

ರಾಜ್ಯ ರೈತ ಸಂಘ, ಹಸಿರು ಸೇನೆಯಿಂದ ಪ್ರತಿಭಟನೆ
Last Updated 26 ನವೆಂಬರ್ 2022, 4:53 IST
ಅಕ್ಷರ ಗಾತ್ರ

ಶಿವಮೊಗ್ಗ: ಬೆಂಬಲ ಬೆಲೆಯಡಿ ಭತ್ತ ಖರೀದಿ ವೇಳೆ ಕ್ವಿಂಟಲ್‌ಗೆ ₹500 ಪ್ರೋತ್ಸಾಹ ಧನ ನೀಡುವ ಯೋಜನೆಯನ್ನು ರಾಜ್ಯದ ಎಲ್ಲ ಜಿಲ್ಲೆಗಳ ಭತ್ತ ಬೆಳೆಗಾರರಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿ ಶುಕ್ರವಾರ ನಗರದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ ಹಾಗೂ ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ.ಶ್ರೀನಿವಾಸ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಂಬಲ ಯೋಜನೆಯಡಿ ಭತ್ತ ಖರೀದಿ ತಕ್ಷಣ ಆರಂಭಿಸುವಂತೆ
ಒತ್ತಾಯಿಸಲಾಯಿತು.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಭತ್ತ ಬೆಳೆಗಾರರಿಗೆ ಮಾತ್ರ ರಾಜ್ಯ ಸರ್ಕಾರ ಪ್ರತಿ ಕ್ವಿಂಟಲ್‌ಗೆ ₹500 ಸಹಾಯಧನ ನೀಡುತ್ತಿದೆ. ಪ್ರತಿ ರೈತರಿಂದ 40 ಕ್ವಿಂಟಲ್ ಖರೀದಿ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಇತರೆ ಜಿಲ್ಲೆಗಳ ಬೆಳೆಗಾರರಿಗೂ ₹500 ಸಹಾಯಧನ ನೀಡಿ ಭತ್ತ ಖರೀದಿಸಲು ಒತ್ತಾಯಿಸಿದರು.

ಬೆಂಬಲ ಬೆಲೆಯಡಿ ಭತ್ತ ಖರೀದಿ ಯೋಜನೆಯಡಿ ರಾಜ್ಯದಲ್ಲಿ ಭತ್ತ ಬೆಳೆಯುವ ಕೆಲವು ಜಿಲ್ಲೆಗಳಲ್ಲಿ ಮಾತ್ರ ಖರೀದಿ ಮಾಡಲು ಆದೇಶ ನೀಡಲಾಗಿದೆ. ಆದರೆ, ಶಿವಮೊಗ್ಗ ಸೇರಿದಂತೆ ಭತ್ತ ಬೆಳೆಯುವ ಹಲವು ಜಿಲ್ಲೆಗಳಲ್ಲಿ ಖರೀದಿ ಕೇಂದ್ರ ಇನ್ನೂ ಪ್ರಾರಂಭಿಸಿಲ್ಲ. ಪ್ರಸ್ತುತ ಈಗ ಸುಗ್ಗಿ ಕಾಲವಾಗಿದ್ದು, ಸಣ್ಣ ರೈತರು ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ವರ್ತಕರಿಗೆ ಭತ್ತ ಮಾರಾಟ ಮಾಡುತ್ತಿದ್ದಾರೆ ಎಂದರು.
ಅಲ್ಲದೇ ಅತಿವೃಷ್ಟಿಯಿಂದಾಗಿ ಭತ್ತದ ಇಳುವರಿ ಸಹ ಕುಂಠಿತವಾಗಿದೆ. ಇಂತಹ ಸಂದರ್ಭದಲ್ಲಿ ರೈತರು ಕಡಿಮೆ ಬೆಲೆಗೆ ಭತ್ತ ಮಾರಾಟ ಮಾಡುವಂತಹ ಪರಿಸ್ಥಿತಿ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಪ್ರಮುಖರಾದ ಇ.ಬಿ. ಜಗದೀಶ್, ಎಸ್. ಶಿವಮೂರ್ತಿ, ಕೆ. ರಾಘವೇಂದ್ರ, ಪಿ.ಡಿ. ಮಂಜಪ್ಪ, ಜಿ.ಎನ್. ಪಂಚಾಕ್ಷರಿ, ಸಿ. ಚಂದ್ರಪ್ಪ ಮೊದಲಾದವರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT