ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೋರಾಟಗಾರರ ಆದರ್ಶ ಅಳವಡಿಸಿಕೊಳ್ಳಿ

ಸ್ಮಾರಕ ಭವನ ಶಂಕುಸ್ಥಾಪನೆ ಸಮಾರಂಭದಲ್ಲಿ ಯಡಿಯೂರಪ್ಪ
Last Updated 27 ಸೆಪ್ಟೆಂಬರ್ 2021, 6:56 IST
ಅಕ್ಷರ ಗಾತ್ರ

ಈಸೂರು (ಶಿಕಾರಿಪುರ):ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹೋರಾಟಗಾರರ ಆದರ್ಶವನ್ನು ಯುವಕರು ಅಳವಡಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲಹೆ ನೀಡಿದರು.

ತಾಲ್ಲೂಕಿನ ಈಸೂರು ಗ್ರಾಮದಲ್ಲಿ ಭಾನುವಾರ ಲೋಕೋಪಯೋಗಿ ಇಲಾಖೆ, ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ತಾಲ್ಲೂಕು ಆಡಳಿತದ ಆಶ್ರಯದಲ್ಲಿ ನಡೆದ ಈಸೂರು ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನ ನಿರ್ಮಾಣ ಕಾಮಗಾರಿ ಶಂಕುಸ್ಥಾಪನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಈಸೂರು ಸ್ವಾತಂತ್ರ್ಯ ಹೋರಾಟಗಾರರು ಸ್ಫೂರ್ತಿಯಾಗಬೇಕು. ಹೋರಾಟಗಾರರ ಚಿಂತನೆಗಳನ್ನು
ಯುವಕರು ಅಳವಡಿಸಿಕೊಳ್ಳಬೇಕು. ಸ್ವಾತಂತ್ರ್ಯ ಹೋರಾಟಗಾರರ ನೆನಪಿಗೆ ₹ 5 ಕೋಟಿ ವೆಚ್ಚದಲ್ಲಿ ಸ್ಮಾರಕ ಭವನ ನಿರ್ಮಾಣವಾಗಲಿದೆ. ಸ್ಮಾರಕ ಭವನ ಕಾಮಗಾರಿಯನ್ನು ಒಂದು ವರ್ಷದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದರು.

ಸಂಸದ ಬಿ.ವೈ. ರಾಘವೇಂದ್ರ, ‘ಈಸೂರಿನ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನ ನಿರ್ಮಾಣ ಸೇರಿ ಈಸೂರಿನ ಸಮಗ್ರ ಅಭಿವೃದ್ಧಿಗೆ ಯಡಿಯೂರಪ್ಪ ಆದ್ಯತೆ ನೀಡಿದ್ದಾರೆ. ತಾಲ್ಲೂಕಿನ ಎಲ್ಲಾ ಹೋಬಳಿಗಳ ಜನರಿಗೆ ಅನುಕೂಲವಾಗುವ ನೀರಾವರಿ ಯೋಜನೆಗಳನ್ನು ಅನುಷ್ಠಾನ ಮಾಡಿದ್ದಾರೆ’ ಎಂದು ಶ್ಲಾಘಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ ಕುಮಾರ್, ‘ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ರಾಜ್ಯದ ಕೊಡುಗೆ ಅಪಾರವಾಗಿದೆ. ಈಸೂರಿನ ಹೋರಾಟಗಾರರ ನೆನಪಿಗಾಗಿ ನಿರ್ಮಾಣವಾಗುತ್ತಿರುವ ಸ್ಮಾರಕ ಭವನ ನಮ್ಮ ಹೋರಾಟಕ್ಕೆ ಪ್ರೇರಣೆಯಾಗಬೇಕು’ ಎಂದರು.

ಕೃಷಿ ಸಚಿವ ಬಿ.ಸಿ. ಪಾಟೀಲ್, ‘ರಾಜಕೀಯ ಜನ್ಮ ನೀಡಿದ ತಾಲ್ಲೂಕಿನ ಋಣವನ್ನು ತೀರಿಸಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದಾರೆ. ಶಿಕಾರಿಪುರ ತಾಲ್ಲೂಕಿನ ಹೆಸರನ್ನು ದೇಶಕ್ಕೆ ತಲುಪಿಸಿದ್ದಾರೆ. ಯಡಿಯೂರಪ್ಪ ಕೇವಲ ಲಿಂಗಾಯತ ನಾಯಕರಲ್ಲ. ಜಾತ್ಯತೀತ ನಾಯಕರಾಗಿದ್ದಾರೆ’ ಎಂದರು.

ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ, ‘ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ಎಲ್ಲ ಜಿಲ್ಲೆಗಳ ಅಭಿವೃದ್ಧಿಗಾಗಿ ಶ್ರಮಿಸಿದ್ದರು. ಸಂಸದ ರಾಘವೇಂದ್ರ ಕೇಂದ್ರದಿಂದ ಕೋಟ್ಯಂತರ ರೂಪಾಯಿ ಅನುದಾನ ತಂದು ಜಿಲ್ಲೆಯ ಅಭಿವೃದ್ಧಿ ಮಾಡಿದ್ದಾರೆ’ ಎಂದು ಹೇಳಿದರು.

ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ರುದ್ರೇಗೌಡ್ರು, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಮಾಜಿ ಅಧ್ಯಕ್ಷ ಪದ್ಮನಾಭ ಭಟ್, ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ದತ್ತಾತ್ರಿ, ಹರಿಯಾಣದ ನ್ಯಾಷನಲ್ ಫುಡ್ ಟೆಕ್ನಾಲಜಿ ವಿಶ್ವವಿದ್ಯಾಲಯ ಕುಲಪತಿ ಡಾ. ಚಿಂದಿ ವಾಸುದೇವಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT