ಶನಿವಾರ, ಜುಲೈ 2, 2022
25 °C
ನಗರದ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಆರಗ ಜ್ಞಾನೇಂದ್ರ

ತುರ್ತು ಪರಿಹಾರಕ್ಕೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಭಾರಿ ಮಳೆಗೆ ಹಲವೆಡೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿರುವುದು ಗಮನಕ್ಕೆ ಬಂದಿದೆ. ಕೂಡಲೇ ಹಾನಿ ಪ್ರಮಾಣದ ವರದಿ ಸಲ್ಲಿಸಿ ತುರ್ತು ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಶನಿವಾರ ನಗರದಲ್ಲಿ ಮಳೆ ಹಾನಿಗೊಳಗಾದ ಬಾಪೂಜಿನಗರ, ವಿದ್ಯಾನಗರ, ಗಣಪತಿ ಲೇ ಔಟ್ ಮುಂತಾದ ಪ್ರದೇಶಗಳಿಗೆ ಶಾಸಕ ಕೆ.ಎಸ್. ಈಶ್ವರಪ್ಪ ಹಾಗೂ ಸಂಬಂಧಿತ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು.

ಮುಂಗಾರು ಆರಂಭವಾಗುವ ಮೊದಲೇ ಪಾಲಿಕೆ ವತಿಯಿಂದ ನಗರದ ರಾಜಕಾಲುವೆ, ಮಳೆನೀರು ಚರಂಡಿಗಳನ್ನು ಸ್ವಚ್ಛ ಮಾಡಿಕೊಳ್ಳಲು ಸಿದ್ಧತೆ ಕೈಗೊಳ್ಳಲಾಗಿತ್ತು. ಆದರೆ, ಅವಧಿಗೂ ಮುನ್ನವೇ ಅನಿರೀಕ್ಷಿತವಾಗಿ ಬಂದ ಭಾರಿ ಮಳೆಯಿಂದಾಗಿ ನಗರದಲ್ಲಿ ಕೆಲ ಮನೆಗಳಿಗೆ ಹಾನಿಯಾಗಿದೆ. ಅನೇಕ ಮನೆಗಳ ಗೋಡೆಗಳು ಬೀಳುವ ಹಂತ ತಲುಪಿವೆ. ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಇನ್ನೂ ಹಲವೆಡೆ ರಸ್ತೆ, ಚಾನೆಲ್ ಏರಿಗಳು ಕೊಚ್ಚಿ ಹೋಗಿರುವ ಬಗ್ಗೆಯೂ ಮಾಹಿತಿ ಇದೆ. ಇವುಗಳನ್ನು ಸರಿಪಡಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಈ ಸಂಬಂಧ ಈಗಾಗಲೇ ಶಾಸಕ ಕೆ.ಎಸ್. ಈಶ್ವರಪ್ಪ, ಸ್ಥಳೀಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಸೇರಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ತುರ್ತು ಪರಿಹಾರ ಕ್ರಮಗಳನ್ನು ಕೈಗೊಂಡಿದ್ದಾರೆ. ಪರಿಶೀಲನೆಯ ನಂತರ ವರದಿ ಪಡೆದು, ಪರಿಹಾರ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.

ತೀರ್ಥಹಳ್ಳಿ ಸಮೀಪದ ತೂದೂರು ಗ್ರಾಮದಲ್ಲಿ ಶಂಕರಪ್ಪ ಎಂಬ ಕೃಷಿ ಕಾರ್ಮಿಕ ಸಾವಿಗೀಡಾಗಿದ್ದು, ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗೆ ತಿಳಿಸಲಾಗಿದೆ. ಅಂತೆಯೇ ಜಿಲ್ಲೆಯಾದ್ಯಂತ ಸುಮಾರು 1,800 ಹೆಕ್ಟೇರ್ ತೋಟಗಾರಿಕೆ ಮತ್ತು ಕೃಷಿ ಬೆಳೆ ಹಾನಿಯಾಗಿರುವ ವರದಿ ಇದೆ. ಸುಮಾರು 9 ಮನೆಗಳು ಬಿದ್ದಿರುವ, ಕೆಲವು ಚಾನೆಲ್ ಹಾಗೂ ಕೆರೆಗಳು ಒಡೆದು ನೀರು ಹರಿದು ಹಾನಿಯಾಗಿರುವ ಬಗ್ಗೆಯೂ ಮಾಹಿತಿ ಇದೆ. ಅಧಿಕಾರಿಗಳ ವರದಿಯನ್ನಾಧರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಕೆ.ಎಸ್. ಈಶ್ವರಪ್ಪ, ಮೇಯರ್ ಸುನಿತಾ ಅಣ್ಣಪ್ಪ, ಚನ್ನಬಸಪ್ಪ, ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.