ಮಂಗಳವಾರ, ಏಪ್ರಿಲ್ 13, 2021
32 °C
ರಾಷ್ಟೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್.ಕುಂದರ್‌‌ ಸೂಚನೆ

'ಕೌಟುಂಬಿಕ ದೌರ್ಜನ್ಯ: ಎಫ್‌ಐಆರ್‌ಗೂ ಮೊದಲು ಸಮಾಲೋಚನೆಗೆ ಅವಕಾಶ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ಎಫ್‌ಐಆರ್‌ ದಾಖಲಿಸುವ ಮೊದಲು ಆಪ್ತ ಸಮಾಲೋಚನೆ, ಪರಸ್ಪರ ಮಾತುಕತೆಗೆ ಅವಕಾಶ ಕಲ್ಪಿಸಬೇಕು. ನಂತರವಷ್ಟೇ ಕಾನೂನು ಸಮರಕ್ಕೆ ಸಹಕರಿಸಬೇಕು ಎಂದು ರಾಷ್ಟೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್.ಕುಂದರ್‌ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಹಿಳೆಯರ ಸಮಸ್ಯೆಗಳ ಕುರಿತು ನಡೆದ ಚರ್ಚೆ ಮತ್ತು ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಕೌಟುಂಬಿಕ ದೌರ್ಜನ್ಯಗಳಲ್ಲಿ ಹಲವು ಪ್ರಕರಣಗಳು ಸಂದರ್ಭದ ಆಧಾರದ ಮೇಲೆ ನಡೆದಿರುತ್ತವೆ. ಸಮಯ ಕಳೆದಂತೆ ಎಲ್ಲರ ಮನಸ್ಸು ತಿಳಿಯಾಗುವ ಸಾಧ್ಯತೆಯೂ ಇರುತ್ತದೆ. ಮನಸ್ಸುಗಳ ಪರಿವರ್ತನೆಗೆ ಮೊದಲು ಅವಕಾಶ ಇರಬೇಕು. ದೌರ್ಜನ್ಯವೇ ಪ್ರಧಾನವಾಗಿದ್ದರೆ ಎಫ್‌ಐಆರ್ ದಾಖಲಿಸಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸಬೇಕು ಎಂದು ಸೂಚಿಸಿದರು.

ಎಲ್ಲಾ ಸರ್ಕಾರಿ ಕಚೇರಿಗಳು, ಖಾಸಗಿ ಸಂಸ್ಥೆಗಳಲ್ಲೂ ಮಹಿಳೆಯರು ದೂರು ದಾಖಲಿಸಲು ಕಡ್ಡಾಯವಾಗಿ ಆಂತರಿಕ ದೂರು ಸಮಿತಿ ರಚಿಸಬೇಕು. ಈ ಕುರಿತು ಅಧಿಕಾರಿಗಳು ಪರಿಶೀಲಿಸಬೇಕು. ದುರು ಸಮಿತಿ ರಚನೆ ಕುರಿತು ಖಾತ್ರಿ ಪಡಿಸಬೇಕು. ಎಲ್ಲಾ ಮಹಿಳಾ ಕಾರ್ಮಿಕರನ್ನು ಕಾರ್ಮಿಕ ಕಾಯ್ದೆ ಅಡಿ ನೋಂದಣಿ ಮಾಡಿಸಬೇಕು. ಸೌಲಭ್ಯಗಳನ್ನು ಒದಗಿಸಬೇಕು. ಮಹಿಳಾ ವಲಸೆ ಕಾರ್ಮಿಕರಿಗೂ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಸಖಿ ಒನ್ ಸ್ಟಾಪ್ ಸೆಂಟರ್‌ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು. ಸುಸಜ್ಜಿತ ಸ್ವಂತ ಕಟ್ಟಡ ಶೀಘ್ರ ಪೂರ್ಣಗೊಳಿಸಬೇಕು. ಸಖಿ ಕೇಂದ್ರದಲ್ಲಿ, ನೊಂದ ಮಹಿಳೆಯರಿಗೆ ವೈದ್ಯಕೀಯ, ಆಪ್ತ ಸಮಾಲೋಚನೆ, ಕಾನೂನು ನೆರವು ಒಂದೇ ಸೂರಿನಡಿ ಒದಗಿಸಲಾಗುತ್ತದೆ. ಈ ಕುರಿತು ಹೆಚ್ಚಿನ ಅರಿವು ಮೂಡಿಸುವ ಕಾರ್ಯ ಗ್ರಾಮೀಣ ಮಟ್ಟದಲ್ಲೂ ನಡೆಯಬೇಕು.

ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಯಲ್ಲಿ 109 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿವೆ. 89 ವಿವಾಹಗಳನ್ನು ತಡೆಯಲಾಗಿದೆ. ಬಾಲ್ಯ ವಿವಾಹ ತಡೆಗೆ ಇನ್ನಷ್ಟು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜ್, ಹೆಚ್ಚುವರಿ ಎಸ್‌ಪಿ ಡಾ.ಶೇಖರ್, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು