ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 3 ಕೋಟಿ ವೆಚ್ಚದಲ್ಲಿ ಗಾಂಧಿ ಪಾರ್ಕ್ ಅಭಿವೃದ್ಧಿ

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಪಾರ್ಕ್‌ಗೆ ಭೇಟಿ
Last Updated 25 ಜೂನ್ 2021, 4:05 IST
ಅಕ್ಷರ ಗಾತ್ರ

ಶಿವಮೊಗ್ಗ: ₹ 3 ಕೋಟಿ ವೆಚ್ಚದಲ್ಲಿ ಗಾಂಧಿ ಪಾರ್ಕ್ ಅಭಿವೃದ್ಧಿಪಡಿಸಲು ಕ್ರಿಯಾಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ನಗರದ ಗಾಂಧಿ ಪಾರ್ಕ್‌ಗೆ ಗುರುವಾರ ಸಂಸದ ಬಿ.ವೈ.ರಾಘವೇಂದ್ರ, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳೊಂದಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ನೂರಾರು ವರ್ಷಗಳ ಇತಿಹಾಸ ಹೊಂದಿರುವ ಈ ಉದ್ಯಾನವನ್ನು ಈ ಹಿಂದೆ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಗಾಂಧಿ ಪಾರ್ಕ್‌ ಆಗಿ ಅಭಿವೃದ್ಧಿಪಡಿಸಲಾಗಿತ್ತು. ಈಗ ಸೌಲಭ್ಯಗಳಿಲ್ಲದೆ ಪಾರ್ಕ್‌ ಹದಗೆಟ್ಟಿದೆ. ಇಲ್ಲಿ ನಿತ್ಯ ವಾಯುವಿಹಾರಕ್ಕೆ ಬರುವವರು ಹಾಗೂ ಮಕ್ಕಳು, ಪೋಷಕರು ಹಾಗೂ ಸಾರ್ವಜನಿಕರು ಉದ್ಯಾನಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಅವರ ಅಪೇಕ್ಷೆಯಂತೆ ಪಾರ್ಕ್ ಅಭಿವೃದ್ಧಿಪಡಿಸಲಾಗುತ್ತಿದೆ’ ಎಂದರು.

‘ಆಧುನಿಕ ರೀತಿಯಲ್ಲಿ ಪಾರ್ಕ್‌ ಅಭಿವೃದ್ಧಿಪಡಿಸಲು ಕ್ರಿಯಾಯೋಜನೆ ರೂಪಿಸಲಾಗಿದೆ. ಬೆಳಕಿನ ವ್ಯವಸ್ಥೆ, ಪಾದಚಾರಿಗಳ ಪಥ, ಮಕ್ಕಳ ಆಟಕ್ಕೆ ಅನುಕೂಲವಾಗುವಂತೆ ಪ್ರತ್ಯೇಕ ಸ್ಥಳ, ಈಜುಕೊಳ, ಓಪನ್‌ ಜಿಮ್ ಮುಂತಾದವುಗಳನ್ನು ಅಳವಡಿಸಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, ಕಾರ್ಯಾರಂಭ ಮಾಡಲಾಗುವುದು’ ಎಂದು
ತಿಳಿಸಿದರು.

₹ 8.50 ವೆಚ್ಚದಲ್ಲಿ ಥೀಮ್ ಪಾರ್ಕ್‌: ‘ಸ್ಮಾರ್ಟ್‌ ಸಿಟಿ ಯೋಜನೆಯಡಿ ₹ 8.50 ವೆಚ್ಚದಲ್ಲಿ ಥೀಮ್ ಪಾರ್ಕ್ ನಿರ್ಮಿಸಲು ಉದ್ದೇಶಿಸಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ರೂಪಿಸಲಾಗಿದ್ದ ಕ್ರಿಯಾ ಯೋಜನೆಗೆ ಅನುಮೋದನೆ ದೊರೆತಿದ್ದು, ಅಂತಿಮ ಹಂತದಲ್ಲಿದೆ. ಗುಜರಾತಿನ ಕಂಪನಿಯೊಂದು ಈ ಥೀಮ್ ಪಾರ್ಕ್ ನಿರ್ಮಾಣಕ್ಕೆ ಉತ್ಸಾಹ ತೋರಿಸಿದೆ. ಈ ಪಾರ್ಕ್‌ ನಿರ್ವಹಣೆಯನ್ನು ಪಾಲಿಕೆಗೆ ವಹಿಸಬೇಕೋ, ಇಲ್ಲ ಖಾಸಗಿ ಸಂಸ್ಥೆಗಳು ಹಾಗೂ ಖಾಸಗಿ ಕೈಗಾರಿಕೆಗಳಿಗೆ ನೀಡಬೇಕೋ ಎಂಬ ಬಗ್ಗೆ ಚರ್ಚಿಸಲಾಗಿದೆ. ಈ ಸಂಬಂಧ ಮುಂದಿನ ವಾರದಲ್ಲಿ ಕೈಗಾರಿಕೆಗಳ ಮುಖ್ಯಸ್ಥರ ಸಭೆ ಕರೆದು ನಿರ್ಣಯ ಕೈಗೊಳ್ಳಲಾಗುವುದು’ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಮಹಾನಗರಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ, ಆಯುಕ್ತ ಚಿದಾನಂದ
ವಟಾರೆ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT