ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರಕಾರ್ಮಿಕರಿಗೆ ಮನೆ ನಿರ್ಮಾಣ ಶೀಘ್ರ: ಮೇಯರ್ ಸುವರ್ಣಾ ಶಂಕರ್

ಗಾಂಧಿ ಜಯಂತಿಯಂದು ಶಂಕುಸ್ಥಾಪನೆ:
Last Updated 24 ಸೆಪ್ಟೆಂಬರ್ 2020, 3:20 IST
ಅಕ್ಷರ ಗಾತ್ರ

ಶಿವಮೊಗ್ಗ: ಪೌರಕಾರ್ಮಿಕರ ಹಲವು ವರ್ಷಗಳ ಕನಸಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ ಅಕ್ಟೋಬರ್‌ 2ರ ಗಾಂಧಿ ಜಯಂತಿಯಂದು ಶಂಕುಸ್ಥಾಪನೆ ನೆರವೇರಿಸಿ ಚಾಲನೆ ನೀಡಲಾಗುವುದು ಎಂದು ಮಹಾನಗರ ಪಾಲಿಕೆ ಮೇಯರ್ ಸುವರ್ಣಾ ಶಂಕರ್ ತಿಳಿಸಿದರು.

ಅಂಬೇಡ್ಕರ್ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗಡಿಯಲ್ಲಿ ದೇಶವನ್ನು ಕಾಯುತ್ತಿರುವ ಯೋಧರಂತೆ ಇಲ್ಲಿ ನಮ್ಮೆಲ್ಲರ ಆರೋಗ್ಯವನ್ನು ಕಾಪಾಡುತ್ತಿರುವ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಪಾಲಿಕೆ ವತಿಯಿಂದ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಗೃಹಭಾಗ್ಯ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು ಎಂದರು.

ಕೊರೊನಾ ವಾರಿಯರ್ಸ್‍ಗೆ ಪರಿಹಾರ ಧನ: ಪಾಲಿಕೆಯ ಇಬ್ಬರು ಪೌರಕಾರ್ಮಿಕರು ಕೊರೊನಾ ಪೀಡಿತರಾಗಿ ಸಾವನ್ನಪ್ಪಿದ್ದಾರೆ. ಸಾವಿಗೀಡಾಗುವ ಕೊರೊನಾ ವಾರಿಯರ್‌ಗೆ ಸರ್ಕಾರ ₹ 30 ಲಕ್ಷ ನೀಡಲಿದೆ. ಪಾಲಿಕೆಯಿಂದ ಕೊರೊನಾಕ್ಕೆ ಬಲಿಯಾಗಿರುವ ಚನ್ನಮ್ಮ ಮತ್ತು ಪಾಪಾನಾಯ್ಕ ಅವರ ಕುಟುಂಬಕ್ಕೆ ತಲಾ ₹ 3 ಲಕ್ಷ ಪರಿಹಾರ ಒದಗಿಸಲು ನಿರ್ಧರಿಸಲಾಗಿದೆ. ಕುಟುಂಬದಲ್ಲಿ ಒಬ್ಬರಿಗೆ ಪಾಲಿಕೆಯಲ್ಲಿ ಉದ್ಯೋಗ ನೀಡಲು ನಿರ್ಧರಿಸಲಾಗಿದೆ ಎಂದು ಭವರಸೆ ನೀಡಿದರು.

ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ‘ಪೌರಕಾರ್ಮಿಕರು ಕೊರೊನಾ ಸಂದರ್ಭದಲ್ಲಿ ತಮ್ಮ ಜೀವವನ್ನು ಲೆಕ್ಕಿಸದೆ ಸೇವೆ ಸಲ್ಲಿಸಿದ್ದಾರೆ. ಕೊರೊನಾ ಪಾಸಿಟಿವ್ ವ್ಯಕ್ತಿಗಳಿರುವ ಕಂಟೈನ್‍ಮೆಂಟ್ ಪ್ರದೇಶದಲ್ಲೂ ಸ್ವಚ್ಛತಾ ಕಾರ್ಯವನ್ನು ಪ್ರತಿನಿತ್ಯ ನಡೆಸಿದ್ದಾರೆ. ಕೊರೊನಾದಿಂದ ಸಾವಿಗೀಡಾದವರ ಅಂತ್ಯಸಂಸ್ಕಾರ ಕಾರ್ಯವನ್ನು ನಿರಂತರವಾಗಿ ಯಾವುದೇ ಚ್ಯುತಿ ಬಾರದಂತೆ ನಡೆಸಿಕೊಂಡು ಬರುತ್ತಿದ್ದಾರೆ. ಪೌರಕಾರ್ಮಿಕರಿಗೆ ಆರೋಗ್ಯ ಸೇವೆ ಸೇರಿ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಪಾಲಿಕೆ ವತಿಯಿಂದ ಕಲ್ಪಿಸಲು ಬದ್ಧರಾಗಿದ್ದೇವೆ’ ಎಂದರು.

ಬೆಳ್ಳಿದೀಪ ಕೊಡುಗೆ:ಪೌರಕಾರ್ಮಿಕ ದಿನಾಚರಣೆ ಅಂಗವಾಗಿ 5 ಮಂದಿ ಪೌರಕಾರ್ಮಿಕರಿಗೆ ಸಾಂಕೇತಿಕವಾಗಿ ಬೆಳ್ಳಿ ದೀಪ ನೀಡಿ ಸನ್ಮಾನಿಸಲಾಯಿತು.

ಉಪ ಮೇಯರ್ ಸುರೇಖಾ ಮುರಳೀಧರ್, ಪಾಲಿಕೆ ಸದಸ್ಯರಾದ ಎಸ್.ಎನ್.ಚನ್ನಬಸಪ್ಪ, ಎಚ್.ಸಿ. ಯೋಗೀಶ್, ಜ್ಞಾನೇಶ್ವರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT