ಶನಿವಾರ, ಅಕ್ಟೋಬರ್ 23, 2021
20 °C

ಸರ್ಕಾರಿ ಶಾಲೆಗೆ ಮಕ್ಕಳ ದಾಖಲಾತಿ ಹೆಚ್ಚಳ: ಡಿ. ಗಣಪತಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಗರ: ಕೋವಿಡ್ ನಂತರ ಸರ್ಕಾರಿ ಶಾಲೆಗೆ ದಾಖಲಾಗುವ ಮಕ್ಕಳ ಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಬೆಳಲಮಕ್ಕಿ ಸರ್ಕಾರಿ ಪ್ರಾಥಮಿಕ ಶಾಲೆಗೆ ಈ ವರ್ಷ 100ಕ್ಕೂ ಹೆಚ್ಚು ಮಕ್ಕಳು ದಾಖಲಾಗಿರುವುದೇ ಇದಕ್ಕೆ ಸಾಕ್ಷಿ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಡಿ. ಗಣಪತಪ್ಪ ಹೇಳಿದರು.

ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಳಲಮಕ್ಕಿ ಸರ್ಕಾರಿ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೋವಿಡ್ ತಂದಿರುವ ಹಲವು ರೀತಿಯ ಬದಲಾವಣೆಗಳಲ್ಲಿ ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹ ಕಡಿಮೆಯಾಗಿರುವುದು ಕೂಡ ಒಂದು ಪ್ರಮುಖ ಬೆಳವಣಿಗೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಆನಂದಪುರಂನ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ 130 ಮಕ್ಕಳು ಪ್ರವೇಶ ಪಡೆದಿದ್ದಾರೆ. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಹಲವು ರೀತಿಯ ಪ್ರೋತ್ಸಾಹ ನೀಡುತ್ತಿದ್ದು, ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳಿಸುವತ್ತ ಒಲವು ತೋರಬೇಕು ಎಂದು ಮನವಿ ಮಾಡಿದರು.

ಶಿಕ್ಷಕರ ಕಲಾಸಿಂಚನ ವೇದಿಕೆ ಅಧ್ಯಕ್ಷ ಸತ್ಯನಾರಾಯಣ ಸಿರಿವಂತೆ, ‘ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲೂ ಇಂಗ್ಲಿಷ್‌ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿರುವುದು ಆರೋಗ್ಯಕರ ಬೆಳವಣಿಗೆ. ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಇಲ್ಲ ಎಂದು ಪೋಷಕರು ದೂರುವ ಸನ್ನಿವೇಶ ಈಗ ಇಲ್ಲವಾಗಿದೆ. ಸರ್ಕಾರಿ ಶಾಲೆಗಳಲ್ಲಿನ ಶೈಕ್ಷಣಿಕ ವಾತಾವರಣವನ್ನು ಮತ್ತಷ್ಟು ಅಭಿವೃದ್ಧಿ ಪಡಿಸುವತ್ತ ಶಿಕ್ಷಕರು ಗಮನ ಹರಿಸಬೇಕಿದೆ’ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಬೆಳಲಮಕ್ಕಿ ಶಾಲೆಯ ಮುಖ್ಯಶಿಕ್ಷಕ ದಿನೇಶ್, ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಮುಖ್ಯಶಿಕ್ಷಕ ಟೀಕಪ್ಪ ಅವರನ್ನು ಸನ್ಮಾನಿಸಲಾಯಿತು.

ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ವೈ. ಮೂರ್ತಿ, ಪ್ರಮುಖರಾದ ಶಾರದಾ ಎ.ಎಸ್. ಮಂಜುಳಾ, ಚಂದ್ರಕಲಾ, ಗುತ್ಯಪ್ಪ, ಎಂ.ಪಿ. ಸತ್ಯನಾರಾಯಣ್, ಮಾಲತೇಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು