ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ಯಾರಂಟಿ ಯೋಜನೆಗಳ ಕಾರಣಕ್ಕೆ ಮತದಾನದ ಪ್ರಮಾಣ ಹೆಚ್ಚಳ: ಬಿ.ಆರ್.ಜಯಂತ್ ಅಭಿಮತ

ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಬಿ.ಆರ್.ಜಯಂತ್ ಅಭಿಮತ
Published 9 ಮೇ 2024, 14:00 IST
Last Updated 9 ಮೇ 2024, 14:00 IST
ಅಕ್ಷರ ಗಾತ್ರ

ಸಾಗರ: ‘ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರ ಸೇರಿ ಹಲವೆಡೆ ಮತದಾನದ ಪ್ರಮಾಣ ಹೆಚ್ಚಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳೇ ಕಾರಣವಾಗಿದೆ’ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ, ಕಾಂಗ್ರೆಸ್ ಮುಂಖಡ ಬಿ.ಆರ್.ಜಯಂತ್ ಅಭಿಪ್ರಾಯಪಟ್ಟಿದ್ದಾರೆ.

‘ಚುನಾವಣೆ ಪೂರ್ವದಲ್ಲಿ ನಡೆದ ಪ್ರಚಾರ ಸಭೆಗಳಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು. ಮತದಾನದಲ್ಲೂ ಮಹಿಳೆಯರ ಸಂಖ್ಯೆ ಹೆಚ್ಚಿದೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

‘ಗ್ಯಾರಂಟಿ ಯೋಜನೆಗಳ ಕಾರಣಕ್ಕೆ ಮತದಾನದ ಪ್ರಮಾಣ ಹೆಚ್ಚಾಗಿರುವುದರ ಲಾಭ ಸಹಜವಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ದೊರಕಲಿದೆ. ಮತದಾನದ ಸಂದರ್ಭದಲ್ಲೇ ಇದು ಬಹಿರಂಗವಾಗಿ ವ್ಯಕ್ತಗೊಂಡಿದೆ. ಹೀಗಾಗಿ ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಗೀತಾ ಶಿವರಾಜಕುಮಾರ್ ಗೆಲುವು ಸಾಧಿಸಲಿದ್ದಾರೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

‘ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಜೊತೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ ಪ್ರತಿವರ್ಷ ಮಹಿಳೆಯರಿಗೆ ₹ 1 ಲಕ್ಷ ಸಹಾಯಧನ ನೀಡುವುದಾಗಿ ಘೋಷಿಸಿದೆ. ಇದು ಕೂಡ ಕಾಂಗ್ರೆಸ್ ಗೆಲುವಿಗೆ ನೆರವಾಗಲಿದೆ’ ಎಂದರು.

‘ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಮಲ್ಲಿಕಾರ್ಜುನ ಹಕ್ರೆ ಚುನಾವಣೆಗೆ ಮುನ್ನ ಬಿಜೆಪಿ ಸೇರಿರುವುದರಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ. ಕಾಂಗ್ರೆಸ್‌ನಲ್ಲಿದ್ದಾಗ ಅವರು ಪ್ರತಿನಿಧಿಸುವ ಯಡಜಿಗಳಮನೆ ಪಂಚಾಯಿತಿ ವ್ಯಾಪ್ತಿಯ ಐದು ಬೂತ್‌ಗಳಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಬಂದಿರಲಿಲ್ಲ. 5 ವರ್ಷಗಳ ಕಾಲ ಅವರು ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾಗಲು ಕಾಂಗ್ರೆಸ್ ಅವಕಾಶ ನೀಡಿತ್ತು. ಸ್ವಲ್ಪ ತಾಳ್ಮೆ ವಹಿಸಿದ್ದರೆ ಕಾಂಗ್ರೆಸ್‌ಲ್ಲೇ ಅವರಿಗೆ ಭವಿಷ್ಯವಿತ್ತು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಪ್ರಮುಖರಾದ ರವಿಕುಮಾರ್ ಗೌಡ, ಅಶೋಕ್ ಬೇಳೂರು, ಮಹಾಬಲ ಕೌತಿ, ಭೀಮನೇರಿ ಆನಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT