ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಸ್ಥ ಸಮಾಜಕ್ಕೆ ಆರೋಗ್ಯ ಸೇವೆಯ ಪಾತ್ರ ಅನನ್ಯವಾದುದು: ಡಾ.ಕೆ. ಸುಧಾಕರ್

ಶಂಕುಸ್ಥಾಪನಾ ಸಮಾರಂಭದಲ್ಲಿ ಆರೋಗ್ಯ ಸಚಿವ
Last Updated 3 ಮೇ 2022, 5:16 IST
ಅಕ್ಷರ ಗಾತ್ರ

ಶಿಕಾರಿಪುರ: ಸ್ವಾಸ್ಥ್ಯ ಸಮಾಜ ನಿರ್ಮಿಸಲು ಹಾಗೂ ದೇಶದ ಜಿಡಿಪಿ ಹೆಚ್ಚಿಸುವ ನಿಟ್ಟಿನಲ್ಲಿ ಆರೋಗ್ಯ ಸೇವೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಕಟ್ಟಡ ಕಾಮಗಾರಿ ಶಂಕುಸ್ಥಾಪನಾ ಸಮಾರಂಭದಲ್ಲಿ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಸಮರ್ಥವಾಗಿ ಎದುರಿಸಿದ್ದೇವೆ. ಕೋವಿಡ್ ಅನ್ನು ಸಮರ್ಥವಾಗಿ ನಿರ್ವಹಣೆ ಮಾಡಿದ್ದಕ್ಕೆ ಪ್ರಶಸ್ತಿ ಪಡೆದುಕೊಂಡಿದ್ದೇವೆ. ಎರಡು ವರ್ಷಗಳಲ್ಲಿ ವೈದ್ಯರ ನೇಮಕಾತಿ ಮಾಡಿಕೊಂಡು ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆ ನೀಗಿಸಲಾಗಿದೆ ಎಂದರು.

‘ಶಿವಮೊಗ್ಗ ಜಿಲ್ಲೆ ಪ್ರಕೃತಿಯ ಸೊಬಗನ್ನು ಹೊಂದಿದ್ದು, ಅನೇಕ ಗಿಡ ಮೂಲಿಕೆಗಳು ಪರಿಸರದಲ್ಲಿ ದೊರೆಯುತ್ತವೆ. ಜಿಲ್ಲೆಯಲ್ಲಿ ಆಯುಷ್ ವಿಶ್ವವಿದ್ಯಾಲಯ ಸ್ಥಾಪಿಸಲು ಪೂರಕ ವಾತಾವರಣವಿದ್ದು, ಮುಂದಿನ ದಿನಗಳಲ್ಲಿ ಭೂಮಿಪೂಜೆ ನೆರವೇರಿಸಲು ಮುಖ್ಯಮಂತ್ರಿ ಅವರ ಜತೆ ಬರುತ್ತೇನೆ’ ಎಂದು ಹೇಳಿದರು.

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ‘ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿವೃದ್ಧಿಯ ದೂರದೃಷ್ಟಿ ಹೊಂದಿರುವ ನಾಯಕರಾಗಿದ್ದಾರೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಆಸ್ಪತ್ರೆ ಮೇಲ್ದರ್ಜೆಗೆ ಏರುತ್ತಿರುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಪಟ್ಟಣದ ಒಳಚರಂಡಿ ಕಾಮಗಾರಿಗೆ ಅನುದಾನ ನೀಡಲಾಗಿದೆ’ ಎಂದು ತಿಳಿಸಿದರು.

ಸಂಸದ ಬಿ.ವೈ. ರಾಘವೇಂದ್ರ, ‘ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ಭೂಮಿಪೂಜೆ ನೆರವೇರಿಸಿರುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ರಾಜಕೀಯ ದುರುದ್ದೇಶದಿಂದ ಪಟ್ಟಣದ ಜಿಲ್ಲಾ ಆಸ್ಪತ್ರೆಯನ್ನು ರದ್ದುಗೊಳಿಸುವ ಕಾರ್ಯವನ್ನು ಕೆಲವರು ಮಾಡಿದ್ದರು. ಪ್ರಸ್ತುತ ಆಸ್ಪತ್ರೆ ಮೇಲ್ದರ್ಜೆಗೆ ಏರುತ್ತಿರುವುದರಿಂದ ಪಟ್ಟಣದಲ್ಲಿ ಮೆಡಿಕಲ್ ಕಾಲೇಜು ಮಾಡಲು ಅಭ್ಯಂತರವಿಲ್ಲ’ ಎಂದು ಹೇಳಿದರು.

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಜಿಲ್ಲಾಧಿಕಾರಿ ಡಾ.ಸೆಲ್ವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ, ಸಾಗರ ಉಪವಿಭಾಗಧಿಕಾರಿ ಡಾ.ನಾಗರಾಜ್ ನಾಯ್ಕ್, ವಿವಿಧ ನಿಗಮ ಮಂಡಳಿ ನಿರ್ದೇಶಕರು, ಡಿಸಿಸಿ ಬ್ಯಾಂಕ್
ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ, ಪುರಸಭೆ ಅಧ್ಯಕ್ಷೆ ಲಕ್ಷ್ಮಿ ಮಹಾಲಿಂಗಪ್ಪ, ಶಿರಾಳಕೊಪ್ಪ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಟಿ. ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ, ವೈದ್ಯಾಧಿಕಾರಿಗಳಾದ ಡಾ.ನಾಗರಾಜನಾಯ್ಕ್, ಡಾ.ಮಲ್ಲಪ್ಪ, ಗುಡುದಪ್ಪ ಕಸವಿ, ಡಾ.ಮಂಜುನಾಥ ನಾಗಲೀಕರ್, ಡಾ.ದಿನೇಶ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಪ್ಪ, ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಶಿವಾನಂದ್ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪಿಎಸ್‌ಐ ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ
ಶಿಕಾರಿಪುರ:
ಪಿಎಸ್‌ಐ ಪರೀಕ್ಷಾ ಅಕ್ರಮ ಸಂಗತಿ ತನಿಖಾ ಹಂತದಲ್ಲಿದ್ದು, ಸರ್ಕಾರ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪರೀಕ್ಷೆ ಅಕ್ರಮ ಪ್ರಕರಣ ತನಿಖಾ ಹಂತದಲ್ಲಿರುವುದರಿಂದ ಯಾವುದೇ ಹೇಳಿಕೆ ಕೊಡುವುದು ಸರಿಯಲ್ಲ’ ಎಂದರು.

‘ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ಬರುತ್ತಾರೆ ಎಂದು ಕಾಂಗ್ರೆಸ್ ನಾಯಕರು ಹೇಳಿಕೊಂಡು ಓಡಾಡುವಂತೆ ನಾವು ಓಡಾಡುವುದಿಲ್ಲ. ನಾವು ಮಾಡಿ ತೋರಿಸುತ್ತೇವೆ’ ಎಂದು ಹೇಳಿದರು.

ಬಿಟ್ ಕಾಯಿನ್ ಬಗ್ಗೆ ಸರಿಯಾಗಿ ತನಿಖೆ ನಡೆದರೆ ರಾಜ್ಯಕ್ಕೆ ಮೂರನೇ ಸಿಎಂ ಬರುತ್ತಾರೆ ಎಂಬ ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಡಾ.ಸುಧಾಕರ್, ‘ದೇಶದಲ್ಲಿ ಬಿಟ್ ಕಾಯಿನ್ ಕಳವು ಅಥವಾ ದುರುಪಯೋಗ ನಡೆದಿರುವ ಬಗ್ಗೆ ಒಂದು ದೂರಾದರೂ ದಾಖಲಾಗಬೇಕು ಎಂಬುದನ್ನು ಪ್ರಿಯಾಂಕ್‌ ಖರ್ಗೆ ಅರ್ಥ ಮಾಡಿಕೊಳ್ಳಬೇಕು. ಇಲ್ಲದಿರುವುದನ್ನು ಸೃಷ್ಟಿಸಿ ಹೇಳಲು ಹೊರಟಿದ್ದಾರೆ’ ಎಂದರು.

*
ತಾಲ್ಲೂಕಿನ ಜನರ ಆರೋಗ್ಯದ ದೃಷ್ಟಿಯಿಂದ ಸುಸಜ್ಜಿತ ಆಸ್ಪತ್ರೆ ನಿರ್ಮಿಸಲು ಮುಂದಾಗಿದ್ದೇವೆ. ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಹಾಗೂ ತಾಯಿ, ಮಕ್ಕಳ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ.
-ಬಿ.ಎಸ್‌. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ

ಯಡಿಯೂರಪ್ಪ ಅವರು ಶಿಕಾರಿಪುರವನ್ನು ಮಾದರಿ ಕ್ಷೇತ್ರವಾಗಿಸಿದ್ದಾರೆ. ಅವರನ್ನು ಶಾಸಕರಾಗಿ ಪಡೆದಿರುವುದು ನಿಮ್ಮೆಲ್ಲರ ಭಾಗ್ಯ. ಯಡಿಯೂರಪ್ಪ ಪುತ್ರ, ಸಂಸದ ರಾಘವೇಂದ್ರ ಜನಪರ ನಾಯಕರಾಗಿದ್ದಾರೆ.
-ಡಾ.ಕೆ. ಸುಧಾಕರ್, ಆರೋಗ್ಯ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT