ಗುರುವಾರ , ಮೇ 19, 2022
24 °C

ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಕಾಂಗ್ರೆಸ್‌ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ ಅವರ ಆತ್ಮಹತ್ಯೆ ಪ್ರಕರಣ ಸಂಬಂಧ ಶಾಸಕ ಕೆ.ಎಸ್. ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಆಗ್ರಹಿಸಿದರು.

ನಗರದ ಶಿವಪ್ಪ ನಾಯಕ ಪ್ರತಿಮೆ ವೃತ್ತದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

‘ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್.ಈಶ್ವರಪ್ಪ ಅವರು ಮೊದಲನೇ ಆರೋಪಿಯಾಗಿದ್ದಾರೆ. ಇವರ ವಿರುದ್ಧ ಐಪಿಸಿ ಸೆಕ್ಷನ್ 306 ಹಾಗೂ ಸೆಕ್ಷನ್ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಾನೂನಾತ್ಮಕವಾಗಿ ಅವರ ಬಂಧನ ಆಗಲೇಬೇಕು’ ಎಂದು ಒತ್ತಾಯಿಸಿದರು.

‘ಈಶ್ವರಪ್ಪ ಅವರು ಧರ್ಮಗಳ ನಡುವೆ ವಿಷಬೀಜ ಬಿತ್ತಿದ್ದಾರೆ. ಅವರ ಪಾಪದ ಕೊಡ ತುಂಬಿ ತುಳುಕುತ್ತಿದೆ. ನೆಮ್ಮದಿಯಾಗಿದ್ದ ಶಿವಮೊಗ್ಗದಲ್ಲಿ ಅಶಾಂತಿ ಮೂಡಿಸಿದ್ದಾರೆ. ಅವರಿಗೆ ಈಗ ಕಾಲವೇ ತಕ್ಕ ಉತ್ತರ ಕೊಡುತ್ತಿದೆ. ಅವರು ಕೇವಲ ರಾಜೀನಾಮೆ ಕೊಟ್ಟರೆ ಸಾಲದು. ಬಂಧಿಸಬೇಕು’ ಎಂದು ಆಗ್ರಹಿಸಿದರು.

ಸಂತೋಷ್ ಕುಟುಂಬಕ್ಕೆ₹ 1 ಕೋಟಿ ಪರಿಹಾರ ನೀಡಬೇಕು. ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ರಾಜ್ಯ ಸರ್ಕಾರದ ವಿರುದ್ಧ ಶೇ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ. ಈ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವಿಧಾನಪರಿಷತ್‌ ಮಾಜಿ ಸದಸ್ಯ ಆರ್. ಪ್ರಸನ್ನಕುಮಾರ್, ಪ್ರಮುಖರಾದ ಎಸ್.ಪಿ. ಶೇಷಾದ್ರಿ, ಎನ್. ರಮೇಶ್, ಬಲದೇವ್ ಕೃಷ್ಣ, ಸೌಗಂಧಿಕಾ, ಚಂದ್ರಭೂಪಾಲ್, ರಾಮೇಗೌಡ, ಯಮುನಾ ರಂಗೇಗೌಡ, ಚಂದ್ರಶೇಖರಪ್ಪ, ತಬಸ್ಸುಮ್, ಸುಮಾ, ಸಿ.ಜಿ. ಮಧುಸೂದನ್, ಕೆ. ಚೇತನ್, ವಿಜಯಕುಮಾರ್, ಬಾಬು, ಜಿ.ಡಿ. ಮಂಜುನಾಥ್, ಎಲ್. ಸತ್ಯನಾರಾಯಣ್, ಧರ್ಮರಾಜ್, ವಿಶ್ವನಾಥ್ ಕಾಶಿ, ನಾಗರಾಜ್, ಬಿ.ಎ. ರಮೇಶ್ ಹೆಗ್ಡೆ ಇದ್ದರು.

ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಪ್ರತಿಭಟನೆ: ಕೆ.ಎಸ್.ಈಶ್ವರಪ್ಪ ಅವರನ್ನು ಕೂಲಡೇ ಬಂಧಿಸುವಂತೆ ಆಗ್ರಹಿಸಿ ಶನಿವಾರ ನಗರದ ಗಾಂಧಿ ಪಾರ್ಕ್‌ನಲ್ಲಿ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದಿಂದ ಈಶ್ವರಪ್ಪ ಅವರ ಬಂಧನದ ಅಣಕು ಪ್ರದರ್ಶನ ನಡೆಯಿತು.

ಸಂಘದ ಜಿಲ್ಲಾಧ್ಯಕ್ಷ ಹಾಗೂ ಕೆಪಿಸಿಸಿ ಸದಸ್ಯ ಆರ್. ಮೋಹನ್ ಮಾತನಾಡಿ, ‘ಸಂತೋಷ್ ಆತ್ಮಹತ್ಯೆಗೆ ಸಚಿವ ಈಶ್ವರಪ್ಪ ಅವರು ಶೇ 40ರಷ್ಟು ಕಮಿಷನ್ ಕೇಳಿರುವುದೇ ಕಾರಣ. ಕೂಡಲೇ ಈಶ್ವರಪ್ಪ ಅವರನ್ನು ಬಂಧಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಹತ್ತು ಪರ್ಸೆಂಟ್ ಸರ್ಕಾರ ಎಂದು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಸುಳ್ಳು ಆರೋಪ ಮಾಡಿದ್ದರು. ಆದರೆ ಈಗ ಯಾರು ತುಟಿ ಬಿಚ್ಚುತ್ತಿಲ್ಲ. ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.

ಗಣೇಶ್ ಚಿಕ್ಕಮರಡಿ, ಲೋಕೇಶ್ ನಾಯ್ಕ್, ಶಿವಣ್ಣ, ರುದ್ರಪ್ಪ, ಸತೀಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು