ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಪಂಚಾಯತಿ ಮಟ್ಟದಲ್ಲೂ ಕೋವಿಡ್ ಆರೈಕೆ ಕೇಂದ್ರ

ಮುಖ್ಯಮಂತ್ರಿ ಜತೆಗಿನ ವೀಡಿಯೊ ಸಂವಾದದ ಬಳಿಕ ಸಚಿವ ಕೆ.ಎಸ್.ಈಶ್ವರಪ್ಪ ಮಾಹಿತಿ
Last Updated 26 ಮೇ 2021, 12:25 IST
ಅಕ್ಷರ ಗಾತ್ರ

ಶಿವಮೊಗ್ಗ: ಕೋವಿಡ್‌ ರೋಗಿಗಳ ಸಂಖ್ಯೆಯ ಆಧಾರದ ಮೇಲೆ ಜಿಲ್ಲೆಯ ಗ್ರಾಮ ಪಂಚಾಯತಿ ಮಟ್ಟದಲ್ಲೂ ಕೋವಿಡ್ ಆರೈಕೆ ಕೇಂದ್ರಗಳನ್ನು ಆರಂಭಿಸಲು ಸೂಚನೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಮುಖ್ಯಮಂತ್ರಿ ಅವರೊಂದಿಗೆ ಬುಧವಾರ ವೀಡಿಯೊ ಸಂವಾದದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‍ರಾಜ್ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಮುಂಚೂಣಿಯ ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅನುಮೋದನೆ ನೀಡಿದ್ದಾರೆ. ಗ್ರಾಮೀಣ ಮಟ್ಟದಲ್ಲಿ ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಪಾಸಿಟಿವ್‌ ದರವನ್ನು ಇನ್ನಷ್ಟು ತಗ್ಗಿಸಲು ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು ಎಂದು ವಿವರಿಸಿದರು.

ಪ್ರಸ್ತುತ ಜಿಲ್ಲೆಯಲ್ಲಿ 17 ಕೋವಿಡ್ ಆರೈಕೆ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಕೋವಿಡ್‌ ಇರುವವರು ಕಡ್ಡಾಯವಾಗಿ ಕೇಂದ್ರಗಳಿಗೆ ದಾಖಲಾಗಬೇಕು. ಹೋಂ ಐಸೋಲೇಷನ್‍ಗೆ ಅನುಮತಿ ಇಲ್ಲ. ಶಿವಮೊಗ್ಗ ನಗರದಲ್ಲಿ ನಾಲ್ಕು ವಾರ್ಡ್‍ಗಳಿಗೆ ಒಂದರಂತೆ 9 ಕೋವಿಡ್ ಆರೈಕೆ ಕೇಂದ್ರ ಆರಂಭಿಸಲಾಗಿದೆ. ಆಯಾ ಭಾಗದ ಕಾರ್ಪೊರೇಟರ್‌ಗಳು ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಸ್ವಚ್ಛತೆಗೂ ಆದ್ಯತೆ ನೀಡಲಾಗಿದೆ ಎಂದರು.

ವಿಡಿಯೋ ಸಂವಾದ: ತೀರ್ಥಹಳ್ಳಿ ತಾಲೂಕಿನ ಅರೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಕೆ.ಭಾಸ್ಕರ್ ಅವರಿಂದ ಮುಖ್ಯಮಂತ್ರಿ ಮಾಹಿತಿ ಪಡೆದರು. ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮದುವೆ, ಜಾತ್ರೆಗಳಿಗೆ ಕಡಿವಾಣ ಹಾಕಬೇಕು. ಕೋವಿಡ್ ಪಾಸಿಟಿವಿಟಿ ದರ ಶೇ 10ಕ್ಕೆ ಇಳಿಯಲು ಪ್ರಯತ್ನಿಸಬೇಕು ಎಂದು ಸೂಚಿಸಿದರು.

ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಭಾಸ್ಕರ್ ಯಡಿಯೂರಪ್ಪ ಅವರಿಗೆ ಮಾಹಿತಿ ನೀಡಿದರು. ಪಂಚಾಯಿತಿ ವ್ಯಾಪ್ತಿಯಲ್ಲಿ ಇದುವರೆಗೆ 51 ಪ್ರಕರಣಗಳು ಪತ್ತೆಯಾಗಿವೆ. ಯಾರೂ ಮೃತಪಟ್ಟಿಲ್ಲ. ಟಾಸ್ಕ್‌ಫೋರ್ಸ್ ಸದಸ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಸೋಂಕು ಪತ್ತೆಯಾದ ವ್ಯಕ್ತಿಗಳಿಗೆ ವೈದ್ಯಕೀಯ ಕಿಟ್ ನೀಡಲಾಗುತ್ತಿದೆ ಎಂದರು.

ಜಿಲ್ಲಾ ಪಂಚಾಯಯಿತಿ ಸಿಇಒ ಎಂ.ಎಲ್.ವೈಶಾಲಿ ಮಾತನಾಡಿ, 11,290 ಪ್ರಕರಣಗಳು ಗ್ರಾಮೀಣ ಭಾಗದಲ್ಲಿ ವರದಿಯಾಗಿವೆ. ಪ್ರಸ್ತುತ 6,900 ಸಕ್ರಿಯ ಪ್ರಕರಣಗಳು ಇವೆ. ನಾಲ್ಕು ದಿನಗಳಿಂದ ಪ್ರಕರಣಗಳಲ್ಲಿ ಇಳಿಕೆ ಕಂಡು ಬಂದಿದೆ. ಗ್ರಾಮೀಣ ಭಾಗದಲ್ಲಿ ಪಾಸಿಟಿವಿಟಿ ದರ ಶೇ 31ರಷ್ಟಿದೆ ಎಂದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT