ಶುಕ್ರವಾರ, ಜನವರಿ 22, 2021
19 °C

ಶಿವಮೊಗ್ಗ: ಕೇಂದ್ರದ ವಿರುದ್ಧ ನಾಳೆ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ಖಂಡಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಕರೆಯ ಮೇರೆಗೆ ನ.26ರಂದು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.

ದೇಶದ ಆರ್ಥಿಕ ಸಾರ್ವಭೌಮತ್ವಕ್ಕೆ ಧಕ್ಕೆ ತರುವ, ರೈತರು, ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ಕೇಂದ್ರ ಸರ್ಕಾರದ ಧೋರಣೆ ಖಂಡನೀಯ. ಕೊರೊನಾ ಸಂಕಷ್ಟದ ನಂತರ ಕಾರ್ಮಿಕರ ಹಿತ ಕಾಪಾಡುವ ಬದಲು ಮತ್ತಷ್ಟು ಸಂಕಷ್ಟಕ್ಕೆ ಕೇಂದ್ರ ಸರ್ಕಾರ ನೂಕಿದೆ. ಕೇಂದ್ರದ ಇಂತಹ ಧೋರಣೆ ಖಂಡಿಸಿ ಅಂದು ಬೆಳಿಗ್ಗೆ 11ಕ್ಕೆ ಮಹಾವೀರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಜೆಸಿಟಿಯು ಜಿಲ್ಲಾ ಸಂಚಾಲಕ ಎಂ.ನಾರಾಯಣ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕೇಂದ್ರ ಸರ್ಕಾರ ಕಾರ್ಮಿಕ ಸಂಘಟನೆಗಳ ಜತೆ ಯಾವುದೇ ಚರ್ಚೆ ನಡೆಸದೆ ಕೋವಿಡ್‌ ಪರಿಸ್ಥಿತಿಯ ದುರುಪಯೋಗಪಡಿಸಿಕೊಂಡು, ವಿರೋಧ ಪಕ್ಷಗಳ ಗೈರು ಹಾಜರಿಯಲ್ಲಿ ಕಾರ್ಮಿಕರ ಹಿತಕ್ಕೆ ಧಕ್ಕೆ ತರುವಂತಹ ಮೂರು ಕಾರ್ಮಿಕ ಸಂಹಿತೆಗಳನ್ನು ಸಂಸತ್‌ನಲ್ಲಿ ಅಂಗೀಕರಿಸಿದೆ ಎಂದು ದೂರಿದರು.

ರೈತ ವಿರೋಧಿ ಕಾನೂನುಗಳನ್ನು ವಾಪಸ್ ಪಡೆಯಬೇಕು. ಆದಾಯ ತೆರಿಗೆ ರಹಿತ ಕುಟುಂಬಗಳಿಗೆ ₹ 7,500  ಪಾವತಿಸಬೇಕು. ತಿಂಗಳಿಗೆ 10 ಕೆ.ಜಿ ಉಚಿತ ಪಡಿತರ ವಿತರಿಸಬೇಕು. ಸಾರ್ವಜನಿಕ ವಲಯ ಸೇವಾ ಸಂಸ್ಥೆಗಳ ಖಾಸಗೀಕರಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಮುಷ್ಕರಕ್ಕೆ ಅಖಿಲ ಭಾರತ ಸಂಘಟನೆಗಳು, ಕಾರ್ಮಿಕರು, ನೌಕರರು, ಅಸಂಘಟಿತ ಕ್ಷೇತ್ರದ ಕಾರ್ಮಿಕರು, ಬೀದಿಬದಿ ವ್ಯಾಪಾರಸ್ಥರು, ಆಟೊ, ಟ್ಯಾಕ್ಸಿ, ಸಾರಿಗೆ ನೌಕರರು, ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರು, ರೈತ ಸಂಘಟನೆಗಳು, ದಲಿತ ಸಂಘರ್ಷ ಸಮಿತಿ ಸೇರಿದಂತೆ ಇತರೆ ಸಂಘಟನೆಗಳು ಬೆಂಬಲ ನೀಡಿವೆ. ಮುಷ್ಕರದಲ್ಲಿ ಭಾಗವಹಿಸುತ್ತಿವೆ ಎಂದು ವಿವರ ನೀಡಿದರು.

ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಎಚ್.ಆರ್.ಬಸವರಾಜಪ್ಪ, ಭೂಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರುದ್ಧ ಮೂರು ಹಂತಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವವರೆಗೂ ಚಳವಳಿ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಹನುಮಮ್ಮ, ಕರ್ನಾಟಕ ಜನಶಕ್ತಿ ಕಾರ್ಯದರ್ಶಿ ಕೆ.ಎಲ್.ಅಶೋಕ್, ದಸಂಸ ಜಿಲ್ಲಾ ಸಂಚಾಲಕ ಹಾಲೇಶಪ್ಪ, ಅನಿಲ್, ಶಿವಮೂರ್ತಿ, ಚಂದ್ರಪ್ಪ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.