ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸಂಸದರು ರಾಜ್ಯದ ಸಮಸ್ಯೆಗಳ ಪರ ಸಂಸತ್‌ನಲ್ಲಿ ಧ್ವನಿ ಎತ್ತಲಿಲ್ಲ: ಜಯಚಂದ್ರ

ಕಾರ್ಯಕರ್ತರ ಸಭೆಯಲ್ಲಿ ಶಿರಾ ಶಾಸಕ ಟಿ.ಬಿ. ಜಯಚಂದ್ರ ಆರೋಪ
Published 4 ಮೇ 2024, 15:55 IST
Last Updated 4 ಮೇ 2024, 15:55 IST
ಅಕ್ಷರ ಗಾತ್ರ

ಶಿಕಾರಿಪುರ: ‘ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಸಂಸದರು ರಾಜ್ಯದ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಲಿಲ್ಲ’ ಎಂದು ಶಿರಾ ಶಾಸಕ ಟಿ.ಬಿ.ಜಯಚಂದ್ರ ಆರೋಪಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

‘ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ಮಾದರಿಯಲ್ಲಿ ಆಡಳಿತ ನಡೆಸದೇ ಸರ್ವಾಧಿಕಾರಿ ಧೋರಣೆ ತಾಳಿದೆ. ಜಾತಿ, ಧರ್ಮದ ಹೆಸರಿನಲ್ಲಿ ಕೋಮುವಾದಿ ಪಕ್ಷಗಳು ಪೈಪೋಟಿಗೆ ಇಳಿದಿವೆ. ಮುಂದಿನ ದಿನಗಳಲ್ಲಿ ಸಂವಿಧಾನ ಬದಲಾವಣೆ ಮಾಡುವ ಹುನ್ನಾರ ನಡೆಯುತ್ತಿದೆ. ಬಿಜೆಪಿ ನಿಯಂತ್ರಣ ಶಕ್ತಿಗಳು ಸಂವಿಧಾನಕ್ಕೆ ಅಪಚಾರ ಮಾಡುವ ರೀತಿ ಕೆಲಸ ಮಾಡುತ್ತಿವೆ. ಈ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ತಮ್ಮ ಪಕ್ಷದ ಉಳಿವಿಗಾಗಿ ಹೊಂದಾಣಿಕೆ ಮಾಡಿಕೊಂಡಿವೆ’ ಎಂದು ಟೀಕಿಸಿದರು.

‘ಕೇಂದ್ರ ಸರ್ಕಾರ ಸಾಮಾನ್ಯ ಜನರ ಜೀವನದ ಬಗ್ಗೆ ಕಾಳಜಿ ವಹಿಸಿಲ್ಲ. ಉದ್ಯಮಿಗಳಾದ ಅದಾನಿ ಅಂಬಾನಿ ಆದಾಯ ಹೆಚ್ಚಿಸಲು ಮುಂದಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಬಿಜೆಪಿ ಈಡೇರಿಸಿಲ್ಲ. ಕಪ್ಪು ಹಣ ದೇಶಕ್ಕೆ ತಂದು ಜನರ ಖಾತೆಗೆ ₹ 15 ಲಕ್ಷ ಹಾಕಲಿಲ್ಲ. 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಿಲ್ಲ’ ಎಂದು ದೂರಿದರು.

‘ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡುವ ಮೂಲಕ ನುಡಿದಂತೆ ನಡೆದಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಲು ಮುಂದಾಗಬೇಕು’ ಎಂದು ಸಲಹೆ ನೀಡಿದರು.

ತಿಪಟೂರು ಶಾಸಕ ಷಡಾಕ್ಷರಿ, ‘ರಾಜ್ಯದಲ್ಲಿ ಭೀಕರ ಬರಗಾಲ ಬಂದರೂ ಪ್ರಧಾನಿ ನರೇಂದ್ರ ಮೋದಿ ನೆರವಿಗೆ ಬರಲಿಲ್ಲ. ಬರಗಾಲದಿಂದ ತತ್ತರಿಸಿದ ರೈತರ ಸಾಲವನ್ನು ಮನ್ನಾ ಮಾಡುವ ಬದಲು ಉದ್ಯಮಿಗಳ ₹ 16 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಗೀತಾ ಶಿವರಾಜಕುಮಾರ್ ಅವರನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.

ಬಿಜೆಪಿ ಮುಖಂಡ ತ್ಯಾಗರ್ತಿ ನೀಲಪ್ಪ ಕಾಂಗ್ರೆಸ್ ಸೇರ್ಪಡೆಯಾದರು.

ಕೆಪಿಸಿಸಿ ಸದಸ್ಯ ಗೋಣಿ ಮಾಲತೇಶ್, ಬ್ಲಾಕ್ ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಪಾರಿವಾಳ ಶಿವರಾಮ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಣಿವೆಮನೆ ಅರುಣ್ ಕುಮಾರ್, ಮುಖಂಡರಾದ ಬನ್ನೂರು ಮಂಜಪ್ಪ, ರೋಷನ್, ಉಳ್ಳಿ ದರ್ಶನ್, ತಿಮ್ಮಣ್ಣ, ಉಮೇಶ್ ಮಾರವಳ್ಳಿ, ಭಂಡಾರಿ ಮಾಲತೇಶ್, ಬಡಗಿ ಫಾಲಾಕ್ಷ, ಅಂಬಾರಗೊಪ್ಪ ರಾಜಪ್ಪ, ರಾಘುನಾಯ್ಕ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT