ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ಅಗತ್ಯ: ಸಚಿವ ಮಧು ಬಂಗಾರಪ್ಪ

Published 1 ಡಿಸೆಂಬರ್ 2023, 16:05 IST
Last Updated 1 ಡಿಸೆಂಬರ್ 2023, 16:05 IST
ಅಕ್ಷರ ಗಾತ್ರ

ಹೊಸನಗರ: ಮಲೆನಾಡಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಸಾಧ್ಯತೆ ಇದ್ದು, ಅಧಿಕಾರಿಗಳು ಸೋಮಾರಿತನ ತಾಳದೇ ಜಾಗೃತರಾಗಿರಬೇಕು ಎಂದು ಸಚಿವ ಮಧು ಬಂಗಾರಪ್ಪ ಸೂಚಿಸಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಬರ ನಿರ್ವಹಣೆ ಮತ್ತು ಕುಡಿಯುವ ನೀರು ಸಮಸ್ಯೆ ಕುರಿತ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ತಾಲ್ಲೂಕಿನಲ್ಲಿ ಜನರಿಗೆ ಕುಡಿಯುವ ನೀರು ಸರಬರಾಜು ಮಾಡಲು ಯಾವುದೇ ತೊಂದರೆಯಾಗಬಾರದು. ಅಧಿಕಾರಿಗಳು ಲಭ್ಯವಿರುವ ನೀರನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಈಗಿನಿಂದಲೇ ಅಗತ್ಯ ಯೋಜನೆ ರೂಪಿಸಿಕೊಳ್ಳಬೇಕು. ಗ್ರಾಮ ಪಂಚಾಯಿತಿ ಪಿಡಿಒಗಳು ತಮ್ಮ ವ್ಯಾಪ್ತಿಯಲ್ಲಿನ ನೀರು ಬಳಕೆ ಕುರಿತು ಯೋಜನೆ ತಯಾರಿಸಬೇಕು ಎಂದು ಸೂಚಿಸಿದರು.

ತೆರೆದಬಾವಿ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಇದರಿಂದ ನೀರು ಸರಬರಾಜು ಸುಲಭವಾಗಲಿದೆ ಎಂದು ತಿಳಿಸಿದರು.

ಮಳೆಗಾಲದಲ್ಲಿ ತಾಲ್ಲೂಕಿನ ಹಳ್ಳಕೊಳ್ಳಗಳು ತುಂಬಿ ಹರಿಯುವುದರಿಂದ ಕಾಲುಸಂಕ ನಿರ್ಮಾಣದ ಅಗತ್ಯವಿದ್ದು, ನರೇಗಾ ಅಡಿ ₹ 10 ಲಕ್ಷ ವೆಚ್ಚದ ಕಾಮಗಾರಿ ನಡೆಸಲು ಅವಕಾಶ ನೀಡಬೇಕು ಎಂದು ತಾಲ್ಲೂಕು ಪಂಚಾಯಿತಿ ಇಒ ನರೇಂದ್ರಕುಮಾರ್ ತಿಳಿಸಿದರು.

ತಾಲ್ಲೂಕಿನಲ್ಲಿ ಜಲಜೀವನ್‌ ಮಿಷನ್‌ ಯೋಜನೆ ಅಡಿ ಕುಡಿಯುವ ನೀರು ಕಾಮಗಾರಿ ಪ್ರಗತಿಯಲ್ಲಿದೆ. ಆದರೆ, ಪೈಪ್‌ಲೈನ್‌ ಕಾಮಗಾರಿಗೆ ಸೀಮಿತವಾಗಿದೆ. ಗ್ರಾಮಗಳಲ್ಲಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ತ್ವರಿತಗತಿಯಲ್ಲಿ ನಡೆಸಬೇಕು ಎಂದು ಗ್ರಾಮ ಪಂಚಾಯಿತಿ ಪಿಡಿಒಗಳು ಸಚಿವರ ಗಮನಕ್ಕೆ ತಂದರು.

ಸಚಿವ ಮಧು ಬಂಗಾರಪ್ಪ, ‘ಜೆಜೆಎಂ ಯೋಜನೆ ಅಡಿ ಕೂಡಲೇ ಹಣ ಬಿಡುಗಡೆಗೊಳಿಸಿ ನೀರಿನ ಟ್ಯಾಂಕ್ ನಿರ್ಮಾಣ ಮಾಡಬೇಕು’ ಎಂದು ಸೂಚಿಸಿದರು.

ತಾಲ್ಲೂಕಿನಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ಇಲ್ಲಿನ ಕೆಲ ಗ್ರಾಮಗಳ ಬಾವಿಯಲ್ಲಿ ಪ್ಲೋರೈಡ್‌ಯುಕ್ತ ನೀರು ಇದ್ದು, ಇದನ್ನು ಶುದ್ಧಿಕರಿಸಿ ಕುಡಿಯಲು ಪೂರೈಸಬೇಕು ಎಂದು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT