ಶುಕ್ರವಾರ, ಮೇ 20, 2022
21 °C
ಕಾರೆಹೊಂಡ ಗ್ರಾಮದಲ್ಲಿ 60 ವರ್ಷ ದಾಟಿದವರ ಸಾವು ಪ್ರಕರಣ

ಶಿವಮೊಗ್ಗ | ವಿಶೇಷ ತಂಡದಿಂದ ಪರಿಶೀಲನೆಗೆ ಶಾಸಕ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಗರ: ತಾಲ್ಲೂಕಿನ ಕಾರೆಹೊಂಡ ಗ್ರಾಮದಲ್ಲಿ ಈಚಿನ ದಿನಗಳಲ್ಲಿ 60 ವರ್ಷ ದಾಟಿದವರು ಸಾವು ಕಾಣುತ್ತಿರುವ ಬಗ್ಗೆ ವರದಿಯಾಗುತ್ತಿದ್ದು, ಇದರ ಕಾರಣ ಪತ್ತೆಹಚ್ಚಲು ವಿಶೇಷ ತಂಡ ರಚಿಸಬೇಕು ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕೆಎಫ್‌ಡಿ ಹಾಗೂ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರೆಹೊಂಡ ಗ್ರಾಮಕ್ಕೆ ಈಚೆಗೆ ಭೇಟಿ ನೀಡಿದಾಗ ಗ್ರಾಮಸ್ಥರು ಅಲ್ಲಿ ಸಂಭವಿಸುತ್ತಿರುವ ಸಾವುಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ತಾಲ್ಲೂಕು ಆರೋಗ್ಯಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಿ ಗ್ರಾಮಕ್ಕೆ ತೆರಳಿ ಕೂಡಲೇ ಪರಿಶೀಲಿಸಬೇಕು ಎಂದು ತಿಳಿಸಿದರು.

ಬೇಸಿಗೆಕಾಲ ಆಗಿರುವುದರಿಂದ ಹಾವುಗಳ ಹರಿದಾಟ ಹೆಚ್ಚಿದೆ. ಹಾವು ಕಚ್ಚಿದ ಪ್ರಕರಣಗಳಲ್ಲಿ ರೋಗಿಗಳನ್ನು ಮೊದಲು ಆಯುರ್ವೇದ ಅಥವಾ ನಾಟಿ ವೈದ್ಯರ ಬಳಿ ಕರೆದೊಯ್ದು ನಂತರ ಸರ್ಕಾರಿ ಆಸ್ಪತ್ರೆಗೆ ಕರೆತಂದರೆ ಚಿಕಿತ್ಸೆ ಕಷ್ಟ ಸಾಧ್ಯವಾಗುತ್ತದೆ. ಹಾವು ಕಚ್ಚಿದ ಪ್ರಕರಣಗಳಲ್ಲಿ ರೋಗಿಗಳನ್ನು ಕೂಡಲೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಬೇಕು. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕಿನ ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಎಫ್‌ಡಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟ ನಂತರ ಯಾವುದೇ ಪ್ರಕರಣ ವರದಿಯಾಗಿಲ್ಲ. ಹಾಗೆಂದು ನಿರ್ಲಕ್ಷ್ಯ ಮಾಡುವಂತಿಲ್ಲ. ಕೆಎಫ್‌ಡಿ ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು.

ತಾಲ್ಲೂಕಿನಲ್ಲಿ 200ಕ್ಕೂ ಹೆಚ್ಚು ಶಿಕ್ಷಕರ ಕೊರತೆ ಇದೆ. ಕೆಲವೆಡೆ ಅತಿಥಿ ಶಿಕ್ಷಕರೇ ಶಾಲೆಗಳನ್ನು ನಿರ್ವಹಿಸುತ್ತಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ಶಿಕ್ಷಕರ ಕೊರತೆ ಇರುವ ಪ್ರದೇಶದಲ್ಲಿ ಆದ್ಯತೆ ಮೇರೆಗೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.

ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ. ಮಹೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ರಾಯ್ಕರ್, ಉಪವಿಭಾಗಾಧಿಕಾರಿ ಡಾ.ನಾಗರಾಜ್ ಎಲ್., ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್, ಅರಣ್ಯ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.