ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಕ್ಕಿಜ್ವರ ಭಯ ಬೇಡ: ಜಿಲ್ಲಾಧಿಕಾರಿ

Last Updated 8 ಜನವರಿ 2021, 14:09 IST
ಅಕ್ಷರ ಗಾತ್ರ

ಶಿವಮೊಗ್ಗ: ಹಕ್ಕಿಜ್ವರದ ಬಗ್ಗೆ ತೀವ್ರ ನಿಗಾ ವಹಿಸಲಾಗಿದ್ದು, ಎಲ್ಲಾ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಹಕ್ಕಿಜ್ವರದ ಯಾವುದೇ ಪ್ರಕರಣ ವರದಿಯಾಗಿಲ್ಲ. ಜನರು ಭಯ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿಶನಿವಾರ ಹಮ್ಮಿಕೊಂಡಿದ್ದ ಹಕ್ಕಿಜ್ವರ ಮುನ್ನಚ್ಚರಿಕೆ ಕ್ರಮಗಳ ಕುರಿತು ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ನೆರೆಯ ರಾಜ್ಯದಲ್ಲಿ ಹಕ್ಕಿಜ್ವರದ ಪ್ರಕರಣ ಕಂಡು ಬಂದಿದ್ದರೂ, ಜಿಲ್ಲೆಯ ಜನರು ಆತಂಕಪಡುವ ಅಗತ್ಯವಿಲ್ಲ. ಹಕ್ಕಿಜ್ವರ ಲಕ್ಷಣದ ಬಗ್ಗೆ ನಿಗಾವಹಿಸಲು ಎಲ್ಲಾ ತಾಲ್ಲೂಕುಗಳಲ್ಲಿ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ. ಹಕ್ಕಿಜ್ವರದ ಬಗ್ಗೆ ಸಂದೇಹಾಸ್ಪದ ಪ್ರಕರಣಗಳು ಪತ್ತೆಯಾದರೆ, ಸಾರ್ವಜನಿಕರು ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಹೇಳಿದರು.

ಹಕ್ಕಿಗಳು ಸತ್ತಿರುವ ಬಗ್ಗೆ ವರದಿಯಾದರೆ, ಈ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಬೇಕು. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಗತ್ಯವಿದ್ದರೆ ಪರಿಶೀಲನೆಗೆ ಪ್ರಯೋಗಾಲಯಕ್ಕೆ ಕಳುಹಿಸುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಹಕ್ಕಿಜ್ವರದ ಬಗ್ಗೆ ಗಾಬರಿಯಾಗುವ ಅಗತ್ಯವಿಲ್ಲ. ಹಕ್ಕಿಯೊಂದಿಗೆ ನೇರ ಸಂಪರ್ಕವಿರುವವರು ಹಕ್ಕಿಜ್ವರದಿಂದ ಬಾಧಿತರಾಗುವ ಸಾಧ್ಯತೆಯಿದೆ. ಅಂತಹ ಸಂದರ್ಭದಲ್ಲಿ ಆ ವ್ಯಕ್ತಿಗಳನ್ನು ಪ್ರತ್ಯೇಕವಾಗಿರಿಸಿ, ಚಿಕಿತ್ಸೆ ನೀಡುವ ಅಗತ್ಯವಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ತಿಳಿಸಿದರು.

ಅರಣ್ಯ ಇಲಾಖೆ ಸಿಬ್ಬಂದಿ ಹಕ್ಕಿಜ್ವರದ ಬಗ್ಗೆ ನಿಗಾ ವಹಿಸಬೇಕು. ಕೋಳಿ ಫಾರಂಗಳಲ್ಲೂ ನಿಗಾ ವಹಿಸಬೇಕಾಗಿದ್ದು, ಫಾರಂ ಮಾಲೀಕರೊಂದಿಗೆ ಸಭೆ ನಡೆಸಿ ಮಾಹಿತಿ ನೀಡಬೇಕು. ಪಕ್ಷಿಗಳ ಹಿಕ್ಕೆ ಮತ್ತು ಕೆರೆಕುಂಟೆಗಳ ನೀರಿನ ಮಾದರಿಯನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಗೆ ಒದಗಿಸಬೇಕು. ವಲಸೆ ಹಕ್ಕಿಗಳ ಮೇಲೆ ನಿಗಾ ಇರಿಸಬೇಕು ಎಂದು ಸಲಹೆ ನೀಡಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT