ಬುಧವಾರ, ಆಗಸ್ಟ್ 17, 2022
30 °C
ಶಾಂತಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಸಾಮರಸ್ಯದ ಬದುಕಿಗೆ ಜಿಲ್ಲಾಡಳಿತದ ಆದ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯ. ಸಾಮರಸ್ಯದ ಬದುಕು ನಡೆಸುವ ವಾತಾವರಣ ನಿರ್ಮಿಸಲು ಜಿಲ್ಲಾಡಳಿತ ಶ್ರಮಿಸಲಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.

ಜಿಲ್ಲಾಡಳಿತ ಸಭಾಂಗಣದಲ್ಲಿ ಮಂಗಳವಾರ ನಡೆದ ಶಾಂತಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಅನಪೇಕ್ಷಿತ ಘಟನೆಗಳಿಂದ ಒಂದು ವಾರ ನಗರದ ಆರ್ಥಿಕ ಚಟುವಟಿಕೆಗಳಿಗೆ ಹಿನ್ನಡೆಯಾಗಿದೆ. ನಗರದ ಗೌರವ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ. ಭಯದ ವಾತಾವರಣ ಹೋಗಲಾಡಿಸಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. ಪ್ರತಿಯೊಬ್ಬರೂ  ಸಹಕರಿಸಬೇಕು ಎಂದು ಮನವಿ ಮಾಡಿದರು.

ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಕೊಡಿಸಲಾಗುವುದು. ಗಾಂಜಾ ಪ್ರಭಾವದಿಂದ ಹಲವು ಅಪರಾಧ ಕೃತ್ಯಗಳು ಸಂಭವಿಸುತ್ತಿವೆ. ಕಟ್ಟುನಿಟ್ಟಾಗಿ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುವುದು. ಉದ್ದೀಪನವಾಗಿ ಔಷಧ ಬಳಕೆಗೆ ಕಡಿವಾಣ ಹಾಕಲು  ಔಷಧ ವ್ಯಾಪಾರಿಗಳ ಸಭೆ ಶೀಘ್ರ ಕರೆಯಲಾಗುವುದು. ವೈಯಕ್ತಿಕ ಘಟನೆಗಳನ್ನು ಸಾಮುದಾಯದ ದೃಷ್ಟಿಯಿಂದ ನೋಡುವುದರಿಂದ ಪರಿಸ್ಥಿತಿ ಬಿಗಡಾಯಿಸಲು ಕಾರಣ. ಅದಕ್ಕೆ ಯಾರೂ ಆಸ್ಪದ ನೀಡಬಾರದು ಎಂದು ತಾಕೀತು ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಸಾರ್ವಜನಿಕರ ಸಹಕಾರದಿಂದ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಮೊಹಲ್ಲಾ ಸಭೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ನಡೆಸಲಾಗುವುದು. ಸಾರ್ವಜನಿಕರು ನೇರವಾಗಿ ತಮ್ಮನ್ನು  ಭೇಟಿ ಮಾಡಬಹುದು. ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯ. ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಮನೆಗಳ ಮುಂದೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ವಿವಿಧ ಸಮುದಾಯಗಳ ಪ್ರತಿನಿಧಿಗಳು ನಿಷೇಧಾಜ್ಞೆ ಮುಂದುವರಿಕೆಗೆ ವಿರೋಧ ವ್ಯಕ್ತಪಡಿಸಿದರು. ಸರಿಯಾದ ಮಾಹಿತಿ ಇಲ್ಲದೆ ಜನಸಾಮಾನ್ಯರಿಗೆ, ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಬಹಳ ತೊಂದರೆಯಾಗಿದೆ. ನಿಷೇಧಾಜ್ಞೆ ಇರುವಾಗ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು