ಮಂಗಳವಾರ, ಸೆಪ್ಟೆಂಬರ್ 28, 2021
25 °C
ತ್ವರಿತ ವಿಲೇವಾರಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಸೆಲ್ವಕುಮಾರ್‌ ಸೂಚನೆ

ಭದ್ರತಾ ಪಿಂಚಣಿ: ವಿಲೇವಾರಿಯಾಗದ ಅರ್ಜಿಗಳು 979

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಸಾಮಾಜಿಕ ಭದ್ರತಾ ಯೋಜನೆಯಲ್ಲಿ ಪಿಂಚಣಿ ಕೋರಿ ಸಲ್ಲಿಸಿದ 979 ಅರ್ಜಿಗಳು ಬಾಕಿ ಇವೆ. ಎಲ್ಲ ಅರ್ಜಿಗಳನ್ನು ಪರಿಶೀಲನೆ ಮಾಡಿ ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಸೆಲ್ವಕುಮಾರ್‌ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲೆಯ ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ವಿಧವಾ, ಅಂಗವಿಕಲ ವೇತನಗಳನ್ನು ಸಮಯಕ್ಕೆ ಸರಿಯಾಗಿ ತಲುಪುವಂತೆ ಕ್ರಮ ಕೈಗೊಳ್ಳಬೇಕು. ಅರ್ಜಿ ಸಲ್ಲಿಸಿದವರು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡುವಂತೆ ಮಾಡಬಾರದು ಎಂದು ತಾಕೀತು ಮಾಡಿದರು.

1,174 ಹೆಕ್ಟೇರ್ ಕೃಷಿ ಭೂಮಿಗೆ ಮರಳಿನ ತೊಡಕು: ಮರಳು ಸಂಗ್ರಹಗೊಂಡ ಕಾರಣ 1,174 ಹೆಕ್ಟೇರ್ ಕೃಷಿ ಭೂಮಿಗೆ ಧಕ್ಕೆಯಾಗಿದೆ. ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಈ ಬಾರಿ ಆರು ಜನರು ಜೀವ ಕಳೆದುಕೊಂಡಿದ್ದಾರೆ. ಐದು ಪ್ರಕರಣಗಳಲ್ಲಿ ಪರಿಹಾರ ನೀಡಲಾಗಿದೆ. 126 ಮನೆಗಳು ಪೂರ್ಣ ಹಾನಿಯಾಗಿವೆ. 478 ಮನೆಗಳಿಗೆ ತೀವ್ರ ಹಾನಿ ಹಾಗೂ 532 ಮನೆಗಳು ಭಾಗಶಃ ಹಾನಿಯಾಗಿವೆ. ಎನ್‍ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ ₹ 1.43 ಕೋಟಿ ಪರಿಹಾರ ಒದಗಿಸಬೇಕಾಗಿದೆ. ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೂ ಹಾನಿಯಾಗಿದೆ. ನೆರೆ ಸಂತ್ರಸ್ತರ ಪುನರ್ವಸತಿ ಕಾರ್ಯಗಳಿಗೆ ಪ್ರಸಕ್ತ ಸಾಲಿನಲ್ಲಿ ₹ 7.93 ಕೋಟಿ ಬಿಡುಗಡೆಯಾಗಿದೆ. 303 ಮನೆಗಳ ನಿರ್ಮಾಣ ಕಾರ್ಯ ಆರಂಭವಾಗಬೇಕಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ ಮಾಹಿತಿ ನೀಡಿದರು.

ಬೆಳೆ ಹಾನಿಗೆ ಸಬ್ಸಿಡಿ ನೀಡುವ ಕಾರ್ಯವೂ ಪ್ರಗತಿಯಲ್ಲಿದೆ. ಸಲ್ಲಿಕೆಯಾದ 7,352 ಅರ್ಜಿಗಳಲ್ಲಿ 1,044 ಅರ್ಜಿಗಳಿಗೆ ಅನುಮೋದನೆ ನೀಡಲಾಗಿದೆ. ದತ್ತಾಂಶ ತುಂಬುವ ಕಾರ್ಯವನ್ನು ವಾರದ ಒಳಗಾಗಿ ಪೂರ್ಣಗೊಳಿಸುವಂತೆ ಸೆಲ್ವಕುಮಾರ್ ಅವರು ಸೂಚನೆ ನೀಡಿದರು.

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ 190 ವಾರ್ಡ್‌ಗಳಲ್ಲಿ ಪ್ರತಿದಿನ 280 ಟನ್ ಕಸ ಉತ್ಪತ್ತಿಯಾಗುತ್ತಿದೆ. ಘನತ್ಯಾಜ್ಯ ವಸ್ತು ನಿರ್ವಹಣೆಗೆ 90 ಎಕರೆ ಜಮೀನು ಹೊಂದಲಾಗಿದೆ. ಪ್ರಸ್ತುತ ಮನೆ, ಮನೆಗಳಿಂದ ಶೇ 100ರಷ್ಟು ಕಸ ಸಂಗ್ರಹಿಸಲಾಗುತ್ತಿದೆ. ಪ್ರಾಥಮಿಕ ಹಂತದಲ್ಲಿ ಶೇ 80ರಷ್ಟು ಕಸ ವಿಂಗಡಿಸಲಾಗುತ್ತಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆಗೆ ₹ 17.96 ಕೋಟಿ ಬಿಡುಗಡೆಯಾಗಿದೆ. ₹ 5.89 ಕೋಟಿ ವೆಚ್ಚವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಘನತ್ಯಾಜ್ಯ ನಿರ್ವಹಣೆ ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚಿಸಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು