ಸಾಗರ: ‘ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸ್ ಆ್ಯಪ್ ಮೊದಲಾದ ಸಾಮಾಜಿಕ ಜಾಲತಾಣದಲ್ಲಿ ಆಯುಧಗಳ ಪ್ರದರ್ಶನ, ಸಾರ್ವಜನಿಕ ಶಾಂತಿಗೆ ಭಂಗವಾಗುವ ರೀತಿಯಲ್ಲಿ ಫೋಟೊ, ಹೇಳಿಕೆ ಪ್ರಕಟಿಸಿದರೆ ಅಂತಹ ವ್ಯಕ್ತಿ, ಸಂಸ್ಥೆಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಡಿವೈಎಸ್‌ಪಿ ಗೋಪಾಲಕೃಷ್ಣ ಟಿ. ನಾಯಕ್ ಎಚ್ಚರಿಸಿದ್ದಾರೆ.
‘ಇನ್‌ಸ್ಟಾಗ್ರಾಮ್‌ನಲ್ಲಿ ಈಚೆಗೆ ನಗರದ ಅಣಲೆಕೊಪ್ಪ ಬಡಾವಣೆಯ ವ್ಯಕ್ತಿಯೊಬ್ಬ ಸಾರ್ವಜನಿಕವಾಗಿ ಆಯುಧವೊಂದನ್ನು ಪ್ರದರ್ಶಿಸಿ ಭಯ ಹುಟ್ಟಿಸುವ ರೀತಿಯಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾನೆ. ಈ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
‘ಕೆಲವೊಂದು ಆ್ಯಪ್‌ಗಳ ಮೂಲಕ ಕಡಿಮೆ ಅವಧಿಯಲ್ಲಿ ಹೆಚ್ಚು ಹಣ ಗಳಿಸಬಹುದು ಎಂಬ ಆಮಿಷವೊಡ್ಡಲಾಗುತ್ತಿದೆ. ಆರಂಭದಲ್ಲಿ ಹಣ ತೊಡಗಿಸುವವರಿಗೆ ನಂಬಿಕೆ ಬರಲು ಅವರ ಖಾತೆಗೆ ಹೆಚ್ಚಿನ ಹಣ ಜಮಾ ಮಾಡಿ ನಂತರ ವಂಚಿಸುವ ಜಾಲ ಸಕ್ರಿಯವಾಗಿದೆ. ಈ ಬಗ್ಗೆ ಸಾರ್ವಜನಿಕರು ಎಚ್ಚರ ವಹಿಸಬೇಕು’ ಎಂದು ಮನವಿ ಮಾಡಿದ್ದಾರೆ.
‘ಮುಂಬರುವ ಗಣಪತಿ ಹಬ್ಬದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಂಬಂಧ ಮುಂಜಾಗ್ರತಾ ಕ್ರಮವಾಗಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ 48 ಮಂದಿಯಿಂದ ಶಾಂತಿ ಭಂಗ ಮಾಡದಂತೆ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ. ಹಬ್ಬದ ಆಚರಣೆ ವೇಳೆ ಯಾವುದೇ ವಿವಾದ ಉಂಟಾದರೆ ಕೂಡಲೇ ಇಲಾಖೆ ಗಮನಕ್ಕೆ ತರಬೇಕು. ಹಾಗೆ ಮಾಡದೆ ಪರಿಸ್ಥಿತಿ ಉದ್ವಿಗ್ನಕ್ಕೆ ಕಾರಣರಾಗುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ತಿಳಿಸಿದ್ದಾರೆ.
ಸಾರ್ವಜನಿಕವಾಗಿ ಗಣಪತಿಯನ್ನು ಪ್ರತಿಷ್ಠಾಪಿಸುವವರಿಗೆ ರಾತ್ರಿ 10 ರವರೆಗೆ ಮಾತ್ರ ಧ್ವನಿವರ್ಧಕದ ಬಳಕೆಗೆ ಅವಕಾಶ ನೀಡಲಾಗುವುದು. ವಿಸರ್ಜನೆ ಮೆರವಣಿಗೆ ಸಾಗುವ ಬೀದಿಯಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ಇರುತ್ತದೆ. ಶಾಂತಿ ಮತ್ತು ಸೌಹಾರ್ದತೆಯಿಂದ ಹಬ್ಬದ ಆಚರಣೆಗೆ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ತಾಲ್ಲೂಕಿನಲ್ಲಿ ಗಾಂಜಾ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಇಲಾಖೆ ಸಕ್ರಿಯವಾಗಿದೆ. 2023 ರಲ್ಲಿ 14, 2024 ರಲ್ಲಿ ಈವರೆಗೆ 11 ಪ್ರಕರಣಗಳನ್ನು ದಾಖಲಿಸಲಾಗಿದೆ. ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ ಹೆಲ್ಮೆಟ್ ಧರಿಸದವರ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕ್ರಮದ ಹಿಂದಿರುವ ಸದುದ್ದೇಶವನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.