ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಿಪ್ಪನ್‌ಪೇಟೆ ಬಳಿ 100 ಎಕರೆಯಲ್ಲಿ ಗೋಶಾಲೆ ಸ್ಥಾಪನೆ: ಪ್ರಭು ಬಿ.ಚವ್ಹಾಣ್

ಸೂಕ್ತ ಸ್ಥಳ ಗುರುತಿಸಲು ಜಿಲ್ಲಾಧಿಕಾರಿಗೆ ಶುಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ್ ಸೂಚನೆ
Last Updated 16 ಜುಲೈ 2021, 14:58 IST
ಅಕ್ಷರ ಗಾತ್ರ

ಶಿವಮೊಗ್ಗ: ಹೊಸನಗರ ತಾಲ್ಲೂಕು ರಿಪನ್‌ಪೇಟೆ ಬಳಿ 100 ಎಕರೆ ಜಾಗದಲ್ಲಿ ಗೋಶಾಲೆ ಆರಂಭಿಸಲು ಸರ್ಕಾರ ನಿರ್ಧರಿಸಿದ್ದು, ಸೂಕ್ತ ಸ್ಥಳ ಗುರುತಿಸುವಂತೆ ಶುಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ್ ಜಿಲ್ಲಾಧಿಕಾರಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಪಶುಪಾಲನಾ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಪ್ರತಿ ಜಿಲ್ಲೆಗೆ ಒಂದರಂತೆ ಗೋಶಾಲೆ ಆರಂಭಿಸಲಾಗುತ್ತಿದೆ, ಜಾನುವಾರುಗಳಿಗೆ ಅಗತ್ಯವಾದ ಮೇವು, ನೀರು, ನೆರಳು ಒದಗಿಸಲಾಗುವುದು. ಶಿವಮೊಗ್ಗ ಜಿಲ್ಲೆಯಲ್ಲೂಗಾಂಧಿ ಜಯಂತಿಗೂ ಮೊದಲು ಗೋಶಾಲೆ ಸ್ಥಾಪನೆಗೆ ಸ್ಥಳ ಗುರುತಿಸಬೇಕು. ಯೋಜನೆಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಪ್ರಾಣಿ ಕಲ್ಯಾಣ ಮಂಡಳಿಯ ಸಭೆಗಳನ್ನು ನಿಯಮಿತವಾಗಿ ನಡೆಸಬೇಕು. ಇತರೆ ಎಲ್ಲಾ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ರಾಜ್ಯದಲ್ಲಿ ಗೋಹತ್ಯೆ ನಿಷೇಧಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಗೋಹತ್ಯೆ ನಿಷೇಧ ಕಾನೂನು ರಾಜ್ಯದಲ್ಲೂ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ. ಗೋಹತ್ಯೆಗೆ ಮುಂದಾಗುವವರಿಗೆ ಸಜೆ ಹಾಗೂ ದಂಡ ವಿಧಿಸಲು ಕಾನೂನು ಜಾರಿಗೊಳಿಸಲಾಗಿದೆ. ಗೋಹತ್ಯೆ ನಿಯಂತ್ರಣ ಕೇವಲ ಪೊಲೀಸ್ ಇಲಾಖೆಯ ಕಾರ್ಯವಲ್ಲ. ಪಶು ಇಲಾಖೆಯ ಅಧಿಕಾರಿ-ಸಿಬ್ಬಂದಿ ಹಾಗೂ ಸಾರ್ವಜನಿಕರು ಈ ಪವಿತ್ರ ಕಾರ್ಯದಲ್ಲಿ ಕೈಜೋಡಿಸಬೇಕು. ಜಾನುವಾರುಗಳ ರೋಗ, ಪ್ರಕೃತಿ ವಿಕೋಪ ಮತ್ತು ಜಾನುವಾರುಗಳ ಮೇಲೆ ಮನುಷ್ಯ ನಡೆಸುವ ಕ್ರೌರ್ಯಗಳಿಂದಲೂ ಜಾನುವಾರುಗಳನ್ನು ರಕ್ಷಿಸಬೇಕು. ಅದಕ್ಕಾಗಿ ಬೆಂಗಳೂರಿನ ಹೆಬ್ಬಾಳದ ಪಶುಪಾಲನಾ ಭವನದಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ. ಅವುಗಳ ಆರೋಗ್ಯ ತಪಾಸಣೆಗೆ ವಿಶೇಷ ಆಸ್ಪತ್ರೆಗಳನ್ನು ಆರಂಭಿಸಲಾಗುತ್ತಿದೆ ಎಂದು ವಿವರ ನೀಡಿದರು.

ಪಶುಪಾಲನಾ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿ ಹಂತದ ಅಧಿಕಾರಿಗಳು ಇಲಾಖೆಯ ಯೋಜನೆಗಳ ಮಾಹಿತಿ ಅರಿತು ಅನುಷ್ಠಾನಕ್ಕೆ ತರುವಲ್ಲಿ ಶ್ರಮಿಸಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ಸರಿಯಲ್ಲ ಎಂದರು.

ಪಶುಪಾಲಕರು, ರೈತರು, ಜಾನುವಾರು ಸಾಕಾಣಿಕೆಯಲ್ಲಿ ತೊಡಗಿರುವವರಿಗೆ ಅನುಕೂಲ ಮಾಡಿಕೊಡಲು 41 ಆಂಬುಲೆನ್ಸ್‌ಗಳು ನೀಡಲಾಗಿದೆ. ಈ ಯೋಜನೆ ದೇಶದಲ್ಲೇ ಮೊದಲು ಅನುಷ್ಠಾನಕ್ಕೆ ತಂದ ಕೀರ್ತಿ ರಾಜ್ಯಕ್ಕೆ ಸಲ್ಲಸುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಜಾನುವಾರುಗಳಿಗೆ ಸಕಾಲದಲ್ಲಿ ಅಗತ್ಯ ಸೇವೆ ಒದಗಿಸಲು ಅನುಕೂಲವಾಗುವಂತೆ 1962 ಸಹಾಯವಾಣಿ ಆರಂಭಿಸಲಾಗಿದೆ. ಅರ್ಹ ರೈತರು ಈ ಸಂಖ್ಯೆಗೆ ಉಚಿತವಾಗಿ ಕರೆಮಾಡಿ ಪಶುವೈದ್ಯ ಸೇವೆ ಬಳಸಿಕೊಳ್ಳಬಹುದು. ಅದಕ್ಕಾಗಿ ತುರ್ತು ವಾಹನ ಮೀಸಲಿಡಲಾಗಿದೆ. ಈ ಸಂಚಾರಿ ಪಶು ಆಸ್ಪತ್ರೆ ರೈತರ ಮನೆಬಾಗಿಲಿಗೆ ತೆರಳಿ ಸೇವೆ ನೀಡಲಿದೆ. ಈ ಆಂಬುಲೆನ್ಸ್‌ನಲ್ಲಿ ಶಸ್ತ್ರಚಿಕಿತ್ಸಾ ಘಟಕ, ಪ್ರಯೋಗಶಾಲೆ, ಸ್ಕ್ಯಾನಿಂಗ್ ಹಾಗೂ ತುರ್ತು ಚಿಕಿತ್ಸಾ ಘಟಕದೊಂದಿಗೆ ಅಗತ್ಯ ಔಷಧ ಹಾಗೂ ಚಿಕಿತ್ಸಾ ಸಲಕರಣೆ ಒಳಗೊಂಡಿರುತ್ತದೆ ಎಂದು ವಿವರಿಸಿದರು.

ಪಶು ಇಲಾಖೆಯಲ್ಲಿ ಅರ್ಹರಿಗೆ ಬಡ್ತಿ ನೀಡಿ ಆಡಳಿತ ಯಂತ್ರಕ್ಕೆ ಚುರುಕು ನೀಡಲಾಗಿದೆ. ಖಾಲಿ ಹುದ್ದೆಗಳನ್ನು ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಶುಸಂಗೋಪನಾ ಸೇವೆಗಳನ್ನು ನೀಡಲು ಹಾಗೂ ಇಲಾಖೆಯನ್ನು ಇನ್ನಷ್ಟು ಸದೃಢಗೊಳಿಸಲು ಅಗತ್ಯ ಕಟ್ಟಡ ನಿರ್ಮಿಸಲು ಅನುಮತಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ ನಾಯ್ಕ್, ಪಶು ಇಲಾಖಾ ವೈದ್ಯರು ಕಾರ್ಯನಿರತ ಸ್ಥಳದಲ್ಲಿಯೇ ಇದ್ದು ಕಾರ್ಯನಿರ್ವಹಿಸಬೇಕು. ರೈತರ ದೂರವಾಣಿ ಕರೆಗಳನ್ನು ಸ್ವೀಕರಿಸಿ ಸಕಾಲದಲ್ಲಿ ಸೇವೆ ನೀಡಬೇಕು ಎಂದು ಸೂಚಿಸಿದರು.

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಕೊಳಗಿ ರೇವಣಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಅನುರಾಧಾ ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ.ಶಿವಯೋಗಿ ಎಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT