ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಲೆ ಏರಿಕೆ: ಅಡುಗೆ ಅನಿಲ ಸಿಲಿಂಡರ್‌ಗೆ ಹಾರ ಹಾಕಿ ಕಾಂಗ್ರೆಸ್‌ ಪ್ರತಿಭಟನೆ

Last Updated 1 ಏಪ್ರಿಲ್ 2022, 4:53 IST
ಅಕ್ಷರ ಗಾತ್ರ

ಶಿವಮೊಗ್ಗ: ಇಂಧನ, ಅಡುಗೆ ಅನಿಲ ದರ ಏರಿಕೆ ವಿರೋಧಿಸಿ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನಗರದ ಮಹಾವೀರ ವೃತ್ತದಲ್ಲಿ ಸಿಲಿಂಡರ್‌ಗಳಿಗೆ ಹೂವಿನ ಹಾರ ಹಾಕಿ, ಜಾಗಟೆ ಬಾರಿಸುವ ಮೂಲಕ ಪ್ರತಿಭಟನೆ ನಡೆಸಿದರು.

‘ಕೊರೊನಾದಿಂದ ಜನ ಜೀವನ ಸಂಕಷ್ಟದಲ್ಲಿದೆ. ಚೇತರಿಸಿಕೊಳ್ಳುತ್ತಿರುವ ಸಮಯದಲ್ಲೇ ಪೆಟ್ರೋಲ್, ಡೀಸೆಲ್, ಅನಿಲ ಸಿಲಿಂಡರ್ ಬೆಲೆ ಏರಿಕೆ ದೊಡ್ಡ ಪೆಟ್ಟು ನೀಡಿದೆ. ಕೊರೊನಾದಿಂದ ತತ್ತರಿಸಿದ್ದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ದಿನ ಬಳಕೆ ಪದಾರ್ಥಗಳು ಸೇರಿದಂತೆ ಹಲವು ಉತ್ಪನ್ನಗಳ ದರ ಕೂಡ ಹೆಚ್ಚಳವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಲೇ ಇದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಕಡಿಮೆಯಾಗಿದ್ದರೂ, ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡುವ ಬದಲು ಮನಸೋ ಇಚ್ಛೆ ದರ ಹೆಚ್ಚಳ ಮಾಡುತ್ತಿದೆ. ಮಾರ್ಚ್ ತಿಂಗಳಲ್ಲಿಯೇ 9 ಬಾರಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳವಾಗಿದೆ. ಇದರಿಂದ ವಾಹನ ಸವಾರರು ತೀವ್ರ ಆತಂಕಗೊಂಡಿದ್ದಾರೆ’ ಎಂದು ದೂರಿದರು.

‘ಕೇಂದ್ರ ಸರ್ಕಾರದ ಅವೈಜ್ಞಾನಿಕ ಆರ್ಥಿಕ ನೀತಿಗಳಿಂದಾಗಿ ದೇಶದಲ್ಲಿ ಅರ್ಥ ವ್ಯವಸ್ಥೆ ಹಾಳಾಗಿದೆ. ಜನ ಸಾಮಾನ್ಯರು ಜೀವನ ನಡೆಸುವುದು ಕಷ್ಟಕರವಾಗಿದೆ. ಈ ಮಧ್ಯೆ ಅಗತ್ಯ ವಸ್ತುಗಳ ಬೆಲೆ ಏರುತ್ತಲೇ ಇದೆ. ಬಡ ಹಾಗೂ ಮಧ್ಯಮ ವರ್ಗದ ಜನ ಜೀವನ ನಡೆಸುವುದೇ ದುಸ್ತರವಾಗಿದೆ. ರಾಷ್ಟ್ರಪತಿಗಳು ಜನವಿರೋಧಿ ಕೇಂದ್ರದ ಬಿಜೆಪಿ ಸರ್ಕಾರ ವಜಾಗೊಳಿಸಬೇಕು’ ಎಂದು ಆಗ್ರಹಿಸಿದರು.

ಜಿಲ್ಲಾ ಅಧ್ಯಕ್ಷ ಎಚ್.ಎಸ್. ಸುಂದರೇಶ್, ವಿಧಾನಪರಿಷತ್ ಮಾಜಿ ಸದಸ್ಯ ಆರ್. ಪ್ರಸನ್ನ ಕುಮಾರ್, ಕೆ. ರಂಗನಾಥ್‌, ಜಿ.ಡಿ. ಮಂಜುನಾಥ್‌, ಎಸ್‌.ಕೆ. ಮರಿಯಪ್ಪ, ವಿಜಯಕುಮಾರ್, ವೈ. ಸೌಗಂಧಿಕಾ, ಎಚ್‌.ಸಿ. ಯೋಗೇಶ್‌, ರೇಖಾ ರಂಗನಾಥ್, ಯಮುನಾ ರಂಗೇಗೌಡ ಎಚ್. ನಾಗರಾಜ್, ಚಂದ್ರಭೂಪಾಲ್, ಎಚ್.ಸಿ. ಯೋಗೀಶ್, ಎಚ್.ಪಿ. ಗಿರೀಶ್, ಮಧುಸೂದನ್, ಚೇತನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT