ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಆಗ್ರಹ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಸಮಿತಿ
Last Updated 21 ಮೇ 2022, 4:32 IST
ಅಕ್ಷರ ಗಾತ್ರ

ಶಿವಮೊಗ್ಗ: ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ತಾಲ್ಲೂಕು ಘಟಕದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಸಂವಿಧಾನಾತ್ಮಕವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೈಕ್ಷಣಿಕ ಸಂಸ್ಥೆಗಳ ಪ್ರವೇಶ ಮತ್ತು ರಾಜ್ಯ ಸರ್ಕಾರದ ಸೇವೆಗಳಲ್ಲಿರುವ ಮೀಸಲಾತಿ ಪ್ರಮಾಣವನ್ನು ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚಿಸಬೇಕು. ಪರಿಶಿಷ್ಟ ಪಂಗಡದವರಿಗೆ ಈಗಿರುವ ಶೇ 3ರಿಂದ ಶೇ 7.5ಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಿಸಿ ಸರ್ಕಾರ ಈ ಕೂಡಲೇ ಆದೇಶ ಹೊರಡಿಸಬೇಕು ಎಂದು
ಪ್ರತಿಭಟನಕಾರರು ಆಗ್ರಹಿಸಿದರು.

ಇದಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‍ದಾಸ್‍ ಅವರ ಆಯೋಗದ ವರದಿಯನ್ನು ಕೂಡಲೇ ಜಾರಿ ಮಾಡಬೇಕು. ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಸಮಿತಿಯ ಸಂಚಾಲಕ ಎಚ್.ಆರ್. ಹನುಮಂತಪ್ಪ ಮಾತನಾಡಿ, ‘ವಾಲ್ಮೀಕಿ ಶ್ರೀಗಳು ನೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಮೌನ ತಾಳಿದೆ. ಈಗಿನ ಮುಖ್ಯಮಂತ್ರಿ ಅವರೂ ಸೇರಿ ಹಿಂದಿನ ಮುಖ್ಯಮಂತ್ರಿಗಳು ಮೀಸಲಾತಿ ಹೆಚ್ಚಿಸುವುದಾಗಿ ಭರವಸೆ ನೀಡಿದ್ರು. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸ್ವಾಮೀಜಿ ಅವರನ್ನು ಬೀದಿಯಲ್ಲಿ ಕೂರುವಂತೆ ಮಾಡಲಾಗಿದೆ’ ಎಂದು ದೂರಿದರು.

ದಲಿತ ಸಂಘರ್ಷ ಸಮಿತಿಯ ಮುಖಂಡ ಎಂ. ಗುರುಮೂರ್ತಿ ಮಾತನಾಡಿ, ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಈಗಿರುವ ಮೀಸಲಾತಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವಾಲ್ಮೀಕಿ ಸಮಾಜದ ಮುಖಂಡ ಆರ್. ಲಕ್ಷ್ಮಣ್, ಪ್ರಮುಖರಾದ ರವಿಕುಮಾರ್, ಮೋಹನ್ ಕುಮಾರ್‌, ರುದ್ರೇಶಪ್ಪ, ಲೋಕೇಶಪ್ಪ, ಮೇಘರಾಜ್, ಬೇಬಿ ಪ್ರಕಾಶ್, ಅನ್ನಪೂರ್ಣಮ್ಮ, ಎಚ್. ವಿನೋದ, ಶೋಭಾ, ವನಿತಾ, ಹರಿಗೆ ರವಿ, ಅಶೋಕ್, ಕೆ. ದೇವೇಂದ್ರಪ್ಪ, ಚಂದ್ರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT