ಶನಿವಾರ, ಸೆಪ್ಟೆಂಬರ್ 18, 2021
30 °C

ಕ್ರೀಡಾ ಕೇಂದ್ರಕ್ಕೆ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಸಹ್ಯಾದ್ರಿ ಕಾಲೇಜು ಕ್ಯಾಂಪಸ್‌ನಲ್ಲಿ ಖೇಲೋ ಇಂಡಿಯಾ ಯೋಜನೆಯ ವಿಶೇಷ ಕ್ರೀಡಾ ಸಂಕೀರ್ಣ ಮತ್ತು ಕ್ರೀಡಾ ತರಬೇತಿ ನಿರ್ಮಾಣ ಖಂಡಿಸಿ   ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಈ ಕ್ರೀಡಾ ಸಂಕೀರ್ಣದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತದೆ. ಮೈಸೂರು ರಾಜ ಜಯಚಾಮರಾಜೇಂದ್ರ ಒಡೆಯರ್ ಅವರು ಶೈಕ್ಷಣಿಕ ಉದ್ದೇಶಕ್ಕಾಗಿ 100 ಎಕರೆ ಭೂಮಿ ಮೀಸಲಿಟ್ಟಿದ್ದರು. ಪ್ರಸ್ತುತ 6 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಿಜ್ಞಾನ, ಕಲಾ ಮತ್ತು ವಾಣಿಜ್ಯ ವಿಭಾಗಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ವ್ಯಾಸಂಗ ಕೊಠಡಿಗಳು, ಹಾಸ್ಟೆಲ್ ಹಾಗೂ ವಾಚನಾಲಯ, ಪ್ರಯೋಗಾಲಯ ಸೇರಿದಂತೆ ವಿವಿಧ ಶೈಕ್ಷಣಿಕ ಅಭಿವೃದ್ಧಿ ಚಟುವಟಿಕೆಗಳಿಗೆ, ಮೂಲ ಸೌಲಭ್ಯಗಳಿಗೆ ನಗರದ ಮಧ್ಯದ ಈ ಪ್ರದೇಶದ ಆವಶ್ಯಕತೆ ಇದೆ. ಮುಂದಿನ ದಿನಗಳಲ್ಲಿ ಸ್ನಾತಕೋತ್ತರ ವಿಷಯಗಳ ಬೋಧನೆಗೆ ಕೊಠಡಿಗಳು ಬೇಕಾಗುತ್ತವೆ. ಆಗ ಜಾಗದ ಕೊರತೆ ಉಂಟಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

ಭವಿಷ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗಾಗಿ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಅವಕಾಶ ನೀಡಬಾರದು. ಜಿಲ್ಲಾಡಳಿತ ಮತ್ತು ಕುವೆಂಪು ವಿಶ್ವವಿದ್ಯಾಲಯ ಈ ಯೋಜನೆ ತಿರಸ್ಕರಿಸಬೇಕು ಎಂದು ಒತ್ತಾಯಿಸಿದರು.

ಯೋಜನೆಗೆ ನಮ್ಮ ವಿರೋಧವಿಲ್ಲ. ಆದರೆ, ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಬೇಡ. ಆಯನೂರು ಕಾಲೇಜು ಬಳಿ 50 ಎಕರೆ ಜಾಗವಿದೆ. ಅಲ್ಲಿ ಯೋಜನೆ ಜಾರಿಗೊಳಿಸಬೇಕು ಎಂದು ಸಲಹೆ ನೀಡಿದರು.

ಸಂಸದ ಬಿ.ವೈ.ರಾಘವೇಂದ್ರ, ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಸ್ಥಳಕ್ಕೆ ಆಗಮಿಸುವಂತೆ ವಿದ್ಯಾರ್ಥಿಗಳು ಪಟ್ಟು ಹಿಡಿದರು. ಪೊಲೀಸರು ಮತ್ತು ಕಾಲೇಜು ಆಡಳಿತ ಮಂಡಳಿ ಮಧ್ಯಪ್ರವೇಶಿಸಿ ವಿದ್ಯಾರ್ಥಿಗಳ ಮನವೊಲಿಸಿದರು. ಪ್ರಾಂಶುಪಾಲರು ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು.

ಸಹ್ಯಾದ್ರಿ ಕಾಲೇಜು ಹಳೇ ವಿದ್ಯಾರ್ಥಿಗಳ ಸಂಘ, ಕನ್ನಡಪರ ಸಂಘಟನೆಗಳು, ದಲಿತಪರ ಸಂಘಟನೆಗಳು, ಕಾಲೇಜು ವಿದ್ಯಾರ್ಥಿ ಮುಖಂಡರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು