ಶನಿವಾರ, ಅಕ್ಟೋಬರ್ 23, 2021
24 °C
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

ಭೂ ಹಕ್ಕಿಗಾಗಿ ರಸ್ತೆಗಿಳಿದ ಮುಳುಗಡೆ ಸಂತ್ರಸ್ತರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಶರಾವತಿ ವಿದ್ಯುತ್ ಯೋಜನೆಗಾಗಿ ಭೂಮಿ ಕಳೆದುಕೊಂಡ ಸಂಸತ್ರಸ್ತರಿಗೆ ಭೂಹಕ್ಕು ನೀಡಲು ಆಗ್ರಹಿಸಿ ಮಲೆನಾಡು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಮುಳುಗಡೆ ಸಂತ್ರಸ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ವಿದ್ಯುತ್ ಯೋಜನೆಗಾಗಿ ಸಾಗರ, ಹೊಸನಗರ ತಾಲ್ಲೂಕಿನ ರೈತರು ಒಂದು ಲಕ್ಷ ಎಕರೆಗೂ ಹೆಚ್ಚು ಭೂಮಿ ಕಳೆದುಕೊಂಡಿದ್ದರು. ಭೂಮಿ ಕಳೆದುಕೊಂಡು 6 ದಶಕಗಳು ಕಳೆದರೂ ಮನೆ, ಜಮೀನಿನ ಹಕ್ಕುಪತ್ರ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಗೋಡು ತಿಮ್ಮಪ್ಪ ಅವರು ಕಂದಾಯ ಸಚಿವರಾಗಿದ್ದಾಗ ದಕ್ಷ ಅಧಿಕಾರಿ ಮದನ್ ಗೋಪಾಲ್ ಅವರ ಪ್ರಯತ್ನದ ಫಲವಾಗಿ  9,600 ಎಕರೆ ಅರಣ್ಯ ಭೂಮಿ ಡಿನೋಟಿಫಿಕೇಷನ್ ಮಾಡಿ ಕಂದಾಯ ಇಲಾಖೆಗೆ ವರ್ಗಾಯಿಸಲಾಗಿತ್ತು. ನಂತರ ಮುಳುಗಡೆ ಸಂತ್ರಸ್ತರಿಗೆ ಭೂ ಹಕ್ಕು ನೀಡುವ ಪ್ರಕ್ರಿಯೆ ಆರಂಭಿಸಲಾಗಿತ್ತು. ಕೆಲವು ಪ್ರಗತಿ ವಿರೋಧಿಗಳು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಡಿನೋಟಿಫಿಕೇಷನ್ ಮಾಡಿದ್ದು ಕಾನೂನು ಬಾಹಿರ ಎಂದು  ಹೈಕೋರ್ಟ್ ಮಾರ್ಚ್‌ನಲ್ಲಿ ತೀರ್ಪು ನೀಡಿದೆ. ಈ ತೀರ್ಪು ಬಂದು 6 ತಿಂಗಳಾದರೂ ಸರ್ಕಾರ ಮೇಲ್ಮನವಿ ಸಲ್ಲಿಸಿಲ್ಲ. ಕೇಂದ್ಕ್ಕೆ ಮನವರಿಕೆ ಮಾಡಿಕೊಡುವಲ್ಲೂ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಲು ತಕ್ಷಣ ಮೇಲ್ಮನವಿ ಸಲ್ಲಿಸಬೇಕು. ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮದನ್ ಗೋಪಾಲ್ ಅವರು ಸಭೆಯಲ್ಲಿ ಕೈಗೊಂಡಿದ್ದ ನಡಾವಳಿ ಅನುಷ್ಠಾನಗೊಳಿಸಬೇಕು. ಕೆಲವರು ಮುಳುಗಡೆ ರೈತರನ್ನು ನಕಲಿ ಪರಿಸರವಾದಿಗಳು ಎಂದು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಇದು ತಪ್ಪಬೇಕು. ವಾಸದ ಮನೆ ಮತ್ತು ಜಮೀನಿನ ಮಾಲೀಕತ್ವ ನೀಡಬೇಕು ಎಂದು ಒತ್ತಾಯಿಸಿದರು.

ಹೋರಾಟ ಸಮಿತಿ ಸಂಚಾಲಕ ತೀ.ನಾ.ಶ್ರೀನಿವಾಸ್, ಮುಖಂಡರಾದ ಎಂ.ಬಿ.ರಾಜಪ್ಪ, ಷಣ್ಮುಖ, ಧರ್ಮರಾಜ್, ವೆಂಕಟೇಶ್, ಕೃಷ್ಣಮೂರ್ತಿ, ಶಿವಣ್ಣ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು