ಬೆಲೆ ಏರಿಕೆ ನಿಯಂತ್ರಣಕ್ಕೆ ಒತ್ತಾಯ

ಶಿವಮೊಗ್ಗ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಲೆ ಏರಿಕೆ ನಿಯಂತ್ರಿಸಬೇಕು ಎಂದು ಒತ್ತಾಯಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಳೆಗಳು ಗಗನಕ್ಕೇರಿವೆ. ಖಾಸಗಿ ಬಸ್ ಪ್ರಯಾಣ ದರ, ವಿದ್ಯುತ್ ದರ ಹೆಚ್ಚಳ ಸಾಮಾನ್ಯರ ಬದುಕಿಗೆ ಮಾರಕವಾಗಿದೆ. ಜೀವನ ನಡೆಸುವುದೆ ಕಷ್ಟವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿಯಂತ್ರಣಕ್ಕೆ ಕ್ರಮ ಕೈಗೊಂಡಿಲ್ಲ. ಜನ ವಿರೋಧಿ ಸರ್ಕಾರಗಳನ್ನು ವಜಾಗೊಳಿಸಬೇಕು ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಕೋವಿಡ್ ನಿಯಂತ್ರಿಸುವಲ್ಲೂ ಕೇಂದ್ರ ಸರ್ಕಾರ ವಿಫಲವಾಗಿದೆ. ಪ್ರಾರಂಭದಲ್ಲೇ ಹೊರ ದೇಶಗಳಿಗೆ ಲಸಿಕೆ ಕಳುಹಿಸಲಾಯಿತು. ದುಡಿಯುವ ಕೈಗಳಿಗೆ ಲಾಕ್‌ಡೌನ್‌ನಿಂದ ಕೆಲಸವಿಲ್ಲದಂತಾಗಿದೆ. ಜೀವನ ನಡೆಸುವುದೇ ದುಸ್ತರವಾಗಿದೆ. ಈಗ ಬೆಲೆ ಏರಿಕೆ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಟ್ರಸ್ಟ್ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್, ಪದಾಧಿಕಾರಿಗಳಾದ ಹೊಳೆಮಡಿಲು ವೆಂಕಟೇಶ್, ಎಚ್.ಎಂ.ಸಂಗಯ್ಯ, ಎಸ್.ವಿ.ರಾಜಮ್ಮ, ಶಂಕ್ರಾನಾಯ್ಕ, ಗೋಪಾಲಕೃಷ್ಣ, ಆದಿಶೇಷ, ಶ್ರೀಧರ್ ಅವರು ರಾಷ್ಟ್ರಪತಿಗೆ ಕಳುಹಿಸುವಂತೆ ಕೋರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.