ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೌಲಾನಾ ಆಜಾದ್ ಸರ್ಕಾರಿ ಶಾಲೆ ಉಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್‌ ನೇತೃತ್ವದಲ್ಲಿ

Last Updated 10 ನವೆಂಬರ್ 2021, 6:15 IST
ಅಕ್ಷರ ಗಾತ್ರ

ಸಾಗರ: ನಗರದ ಕೆಳದಿ ರಸ್ತೆಯಲ್ಲಿರುವ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಸರ್ಕಾರಿ ಶಾಲೆಯನ್ನು ಉಳಿಸುವಂತೆ ಒತ್ತಾಯಿಸಿ ನಗರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪೋಷಕರು ಹಾಗೂ ಮಕ್ಕಳು ಮಂಗಳವಾರ ಪ್ರತಿಭಟನೆ ನಡೆಸಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು.

ನಂತರ ಬಹಿರಂಗ ಸಭೆಯಲ್ಲಿ ಮಾತನಾಡಿದ ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಐ.ಎನ್. ಸುರೇಶ್ ಬಾಬು, ‘ಕೆಳದಿ ರಸ್ತೆಯಲ್ಲಿರುವ ಮೌಲಾನಾ ಆಜಾದ್ ಶಾಲೆಯನ್ನು ಉಳಿಸಿಕೊಳ್ಳುವತ್ತ ಅಧಿಕಾರಿಗಳಾಗಲೀ, ಜನಪ್ರತಿನಿಧಿಗಳಾಗಲೀ ಆಸಕ್ತಿ ತೋರುತ್ತಿಲ್ಲ. ಇದರಿಂದ ನಮ್ಮೂರಿಗೆ ಮಂಜೂರಾಗಿರುವ ಶಾಲೆಯನ್ನು ವಿದ್ಯಾರ್ಥಿಗಳ ಕೊರತೆಯ ನೆಪವೊಡ್ಡಿ ಬೇರೆ ಊರಿಗೆ ಸ್ಥಳಾಂತರಿಸುವ ಹುನ್ನಾರ ನಡೆದಿದೆ’ ಎಂದು ಆರೋಪಿಸಿದರು.

‘2018ನೇ ಸಾಲಿನಲ್ಲಿ ಇಲ್ಲಿಗೆ ಮೌಲಾನಾ ಆಜಾದ್ ಶಾಲೆ ಮಂಜೂರಾಗಿದ್ದು, ಶಾಲೆಯ ನೂತನ ಕಟ್ಟಡಕ್ಕೆ ಸರ್ಕಾರ ₹ 50 ಲಕ್ಷ ಬಿಡುಗಡೆ ಮಾಡಿದೆ. ಆದರೂ ನೂತನ ಕಟ್ಟಡ ನಿರ್ಮಾಣಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮುಂದಾಗದೆ ತೀವ್ರ ನಿರ್ಲಕ್ಷ್ಯ ತಾಳಿದ್ದಾರೆ. ಇದರಿಂದಾಗಿ ಇಲ್ಲಿ ಓದುತ್ತಿರುವ ಮಕ್ಕಳ ಭವಿಷ್ಯಕ್ಕೆ ಆತಂಕ ಎದುರಾಗಿದೆ’ ಎಂದು ದೂರಿದರು.

‘ಕೆಳದಿ ರಸ್ತೆಯಲ್ಲಿರುವ ಉರ್ದು ಶಾಲೆಯನ್ನು ಗಮನದಲ್ಲಿಟ್ಟುಕೊಂಡೇ ಸುತ್ತಮುತ್ತಲಿನ ಪೋಷಕರು ತಮ್ಮ ಮಕ್ಕಳನ್ನು ಮೌಲಾನಾ ಆಜಾದ್ ಶಾಲೆಗೆ ಸೇರಿಸಿದ್ದಾರೆ. ಈಗ ಆ ಮಕ್ಕಳನ್ನು 3 ಕಿ.ಮೀ. ದೂರದ ಗಾಂಧಿನಗರದಲ್ಲಿರುವ ಉರ್ದು ಶಾಲೆಗೆ ಕಳುಹಿಸಬೇಕು ಎಂದರೆ ಬಹುತೇಕ ಮಕ್ಕಳು ಶಾಲೆಯನ್ನು ಬಿಡುತ್ತಾರೆ. ಈ ವಿಷಯ ಗೊತ್ತಿದ್ದೂ ಶಿಕ್ಷಣ ಇಲಾಖೆ ಸೂಕ್ತ ವ್ಯವಸ್ಥೆ ಕಲ್ಪಿಸದಿರುವುದು ಎಷ್ಟು ಸರಿ’ ಎಂದು ಅವರು ಪ್ರಶ್ನಿಸಿದರು.

‘ಮೌಲಾನಾ ಆಜಾದ್ ಶಾಲೆಯಲ್ಲಿ ಮುಸ್ಲಿಂ, ಕ್ರಿಶ್ಚಿಯನ್ ಮಕ್ಕಳು ಅಲ್ಲದೇ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗದ ಮಕ್ಕಳಿಗೂ ಕಲಿಯಲು ಅವಕಾಶ ಕಲ್ಪಿಸಲಾಗಿದೆ. ಸರ್ಕಾರ ಎಲ್ಲಾ ಸೌಲಭ್ಯಗಳನ್ನು ಮಕ್ಕಳಿಗೆ ಉಚಿತವಾಗಿ ಕಲ್ಪಿಸಿದೆ. ಸ್ವಂತ ಕಟ್ಟಡವಿಲ್ಲದಿದ್ದರೆ ಬಾಡಿಗೆ ಕಟ್ಟಡದಲ್ಲಿ ಶಾಲೆ ನಡೆಸಲು ಅವಕಾಶವಿದೆ. ಶಾಲೆಯನ್ನು ಉಳಿಸಿಕೊಳ್ಳುವ ಬಗ್ಗೆ ಯಾರಿಗೂ ಆಸಕ್ತಿ ಇಲ್ಲವಾಗಿದೆ’ ಎಂದು ದೂರಿದರು.

ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಘಟಕದ ಪದಾಧಿಕಾರಿ ಸಂತೋಷ್ ಸದ್ಗುರು, ‘ಸ್ವಾತಂತ್ರ್ಯದ ನಂತರ ಭಾರತದ ಪ್ರಥಮ ಶಿಕ್ಷಣ ಸಚಿವರಾಗಿದ್ದ ಮೌಲಾನಾ ಆಜಾದ್ ಅವರ ಹೆಸರಿನ ಶಾಲೆಗೆ ಈ ದುರ್ಗತಿ ಬಂದಿರುವುದು ಬೇಸರದ ಸಂಗತಿ’ ಎಂದರು.

ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮಧು ಮಾಲತಿ, ‘ತಮ್ಮ ಮಕ್ಕಳ ಭವಿಷ್ಯ ಅತಂತ್ರವಾಗಲಿರುವ ಕಾರಣ ಪೋಷಕರೂ ಬೀದಿಗಿಳಿದು ಹೋರಾಟ ಮಾಡಬೇಕಾದ ಅನಿವಾರ್ಯ ಸೃಷ್ಟಿಸಲಾಗಿದೆ. ಅಧಿಕಾರಿಗಳಿಗೆ ಸರ್ಕಾರಿ ಶಾಲೆಗಳ ಬಗ್ಗೆ ಕಿಂಚಿತ್ತಾದರೂ ಆಸಕ್ತಿ ಇದ್ದರೆ ಶಾಲೆಯನ್ನು ಉಳಿಸಿಕೊಳ್ಳುವತ್ತ ಗಮನ ಹರಿಸಬೇಕು’ ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಮುಖಂಡ ಅನ್ವರ್ ಬಾಷಾ, ‘ತಾಲ್ಲೂಕಿನಲ್ಲಿ ಕೆಲವು ಶಿಕ್ಷಕರು ಶಾಲೆಯಲ್ಲಿ ಪಾಠ ಮಾಡುವುದಕ್ಕಿಂತ ರಿಯಲ್ ಎಸ್ಟೇಟ್, ಬಡ್ಡಿ ವ್ಯವಹಾರ, ಎಲ್‌ಐಸಿ ಏಜೆಂಟರಾಗಿ ಕೆಲಸ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ. ಇದರಿಂದಾಗಿ ಇಲ್ಲಿನ ಶಿಕ್ಷಣ ವ್ಯವಸ್ಥೆಗೆ ಧಕ್ಕೆ ಉಂಟಾಗಿದೆ’ ಎಂದರು.

ಸಾಮಾಜಿಕ ಕಾರ್ಯಕರ್ತ ನಾಗರಾಜ್ ಬಿಲಗುಂಜಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಬ್ಬಾರ್, ಕಾಂಗ್ರೆಸ್ ಪ್ರಮುಖರಾದ ಮಹಾಬಲ ಕೌತಿ, ಹಮೀದ್, ಗಣಾಧೀಶ, ನಿತ್ಯಾನಂದ ಶೆಟ್ಟಿ, ವಿನಾಯಕ ಗುಡಿಗಾರ್, ಲಲಿತಮ್ಮ ಅಬ್ದುಲ್ ಹಮೀದ್, ಸೈಯದ್ ಜಮೀಲ್, ತನ್ವೀರ್, ನಾರಾಯಣಪ್ಪ, ಸಂತೋಷ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT