ಮಂಗಳವಾರ, ಮೇ 17, 2022
27 °C

‘ಜಿಲ್ಲೆಯಲ್ಲಿ 7 ಬಾಲಕಾರ್ಮಿಕರ ಪತ್ತೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಕಳೆದ ವರ್ಷ ಜಿಲ್ಲೆಯಲ್ಲಿ ಬಾಲಕಾರ್ಮಿಕರನ್ನು ಪತ್ತೆ ಹಚ್ಚಲು 638 ದಿಢೀರ್ ತಪಾಸಣೆ ಕೈಗೊಳ್ಳಲಾಗಿದ್ದು, 7 ಪ್ರಕರಣಗಳಲ್ಲಿ ಬಾಲಕಾರ್ಮಿಕರನ್ನು ಪತ್ತೆಹಚ್ಚಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಬಾಲಕಾರ್ಮಿಕ ಯೋಜನಾಧಿಕಾರಿ ರಘುನಾಥ್ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಜಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲಿ ಬಾಲಕಾರ್ಮಿಕರ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯಲ್ಲಿ 58 ಅಪಾಯಕಾರಿ ಉದ್ದಿಮೆಗಳು ಹಾಗೂ 11262 ಅಪಾಯಕಾರಿಯಲ್ಲದ ಉದ್ದಿಮೆಗಳನ್ನು ಗುರುತಿಸಲಾಗಿದೆ. ಈ ಎಲ್ಲಾ ಕಡೆ ಬಾಲಕಾರ್ಮಿಕರನ್ನು ತೊಡಗಿಸಲಾಗಿದೆಯೇ ಎಂದು ತಪಾಸಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ನಗರ ಪ್ರದೇಶಗಳಲ್ಲಿ ಮಾತ್ರವಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿರುವ ಬಾಲಕಾರ್ಮಿಕರನ್ನು ಪತ್ತೆಹಚ್ಚಲು ನಿರಂತರ ತಪಾಸಣಾ ಕಾರ್ಯವನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೂಚನೆ ನೀಡಿದರು. 

ನಗರ ಪ್ರದೇಶಗಳಿಗಿಂತ ಗ್ರಾಮೀಣ ಪ್ರದೇಶಗಳಲ್ಲಿ ಬಾಲಕಾರ್ಮಿಕರನ್ನು ಕೆಲಸದಲ್ಲಿ ತೊಡಗಿಸಿಕೊಂಡಿರುವ ಸಾಧ್ಯತೆಗಳು ಹೆಚ್ಚಿವೆ. ಅಡಿಕೆ ತೋಟಗಳು, ಇಟ್ಟಿಗೆ ಭಟ್ಟಿಗಳು, ಪೌಲ್ಟ್ರಿ ಫಾರ್ಮ್‌ಗಳು, ಮಂಡಕ್ಕಿ ಭಟ್ಟಿಗಳು ಸೇರಿ ಎಲ್ಲಾ ಕಡೆಗಳಲ್ಲಿ ಸಂಪೂರ್ಣ ಪರಿಶೀಲನೆ ನಡೆಸಿ ವರದಿಯನ್ನು ಸಲ್ಲಿಸಬೇಕು ಎಂದು ತಾಕೀತು ಮಾಡಿದರು.

ದೂರು ನೀಡಿ: ಜಿಲ್ಲೆಯಲ್ಲಿ ಎಲ್ಲಿಯಾದರೂ ಬಾಲಕಾರ್ಮಿಕರು ಕಂಡುಬಂದಲ್ಲಿ ಸಾರ್ವಜನಿಕರು 1098 ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಬಹುದಾಗಿದೆ. ಬಾಲಕಾರ್ಮಿಕ ಪದ್ಧತಿಯಿಂದಾಗಿ ಅಂತಹ ಮಕ್ಕಳ ಶೋಷಣೆ, ಲೈಂಗಿಕ ಕಿರುಕುಳ, ಕ್ರಿಮಿನಲ್ ಕೃತ್ಯಗಳಿಗೆ ದಾರಿಯಾಗುತ್ತದೆ. ಬಾಲಕಾರ್ಮಿಕರನ್ನು ಆರಂಭದಲ್ಲಿಯೇ ಪತ್ತೆಹಚ್ಚಿ ಕ್ರಮ ಕೈಗೊಳ್ಳಲು ಎಲ್ಲರ ಸಹಕಾರ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಸೆಲ್ವಮಣಿ ಹೇಳಿದರು.

ಬಾಲಕಾರ್ಮಿಕ ಜಾಗೃತಿ ಭಿತ್ತಿಪತ್ರ ಬಿಡುಗಡೆ ಮಾಡಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಹೊನ್ನಳ್ಳಿ, ಜಿಲ್ಲಾ ಕಾರ್ಮಿಕ ಕಲ್ಯಾಣಾಧಿಕಾರಿ ಸೀಬಿ ರಂಗಯ್ಯ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮಲ್ಲಿಕಾರ್ಜುನ್, ತಹಶೀಲ್ದಾರ್‌ಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.