ಸೋಮವಾರ, ಸೆಪ್ಟೆಂಬರ್ 20, 2021
29 °C
ಅತಿವೃಷ್ಟಿ ಹಾನಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ ಮಾಹಿತಿ

ಶಿವಮೊಗ್ಗ: ಮಳೆ, ನೆರೆಯಿಂದ ಮನೆ ಕಳೆದುಕೊಂಡವರಿಗೆ ಬಾಡಿಗೆ ನೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಮಳೆ, ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆ ಆಗುವವರೆಗೂ ಪ್ರತಿ ತಿಂಗಳೂ ಬಾಡಿಗೆ ನೀಡುವ ಕುರಿತು ಪರಿಶೀಲಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅತಿವೃಷ್ಟಿ ಹಾನಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಮನೆ ದುರಸ್ತಿ ಅಥವಾ ಬಾಡಿಗೆ ನೀಡುವ ಆದೇಶ ಜಾರಿಯಾಗುವವರೆಗೂ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಕಲ್ಪಿಸಬೇಕು. ಬಿದ್ದ ಮನೆಗಳಿಗೆ ಪರಿಹಾರ ಒದಗಿಸಲು ಹಕ್ಕುಪತ್ರ ಸಮಸ್ಯೆ ಎದುರಾಗಿದೆ. ಈ ಕುರಿತು ಜನಪ್ರತಿನಿಧಿಗಳ ಸಭೆ ಕರೆದು ಚರ್ಚಿಸಲಾಗುವುದು ಎಂದು ವಿವರ ನೀಡಿದರು.

ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸುಮಾರು ₹ 491 ಕೋಟಿ  ಹಾನಿಯಾಗಿದೆ. ಹಾನಿಯಾದ ಕೃಷಿ ಭೂಮಿಗೆ ಹೆಚ್ಚುವರಿ ಪರಿಹಾರ ದೊರಕಿಸಲು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್‌) ಮಾರ್ಗಸೂಚಿಗೆ ತಿದ್ದುಪಡಿ ತರಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದರು.

ಮಳೆಯಿಂದ ಜಿಲ್ಲೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ತಲಾ ₹ 5 ಲಕ್ಷ ಪರಿಹಾರ ಒದಗಿಸಲಾಗಿದೆ. 27 ಜಾನುವಾರುಗಳು ಜೀವ ಕಳೆದುಕೊಂಡಿವೆ. 126 ಮನೆಗಳಿಗೆ ಸಂಪೂರ್ಣ ಹಾನಿಯಾಗಿದೆ. 478 ಮನೆಗಳಿಗೆ ತೀವ್ರ, 532 ಮನೆಗಳಿಗೆ ಭಾಗಶಃ ಹಾಗೂ 76 ಕೊಟ್ಟಿಗೆಗಳಿಗೆ ಹಾನಿ ಉಂಟಾಗಿದೆ. 1,174 ಹೆಕ್ಟೇರ್ ಕೃಷಿ ಜಮೀನಿನಲ್ಲಿ ಮರಳು ತುಂಬಿದೆ. ಎನ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ ₹ 1.43 ಕೋಟಿ ಪರಿಹಾರ ನೀಡಬೇಕಾಗಿದೆ. ಈ ಪರಿಹಾರ ತುಂಬಾ ಕಡಿಮೆ. ಇದನ್ನು ಪರಿಷ್ಕರಿಸುವ ಕುರಿತು ರಾಜ್ಯ ಸರ್ಕಾರದ ಮೂಲಕ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು.

ಶಾಸಕರಾದ ಎಚ್‌.ಹಾಲಪ್ಪ ಹರತಾಳು, ಅಶೋಕ ನಾಯ್ಕ್, ವಿಧಾನ ಪರಿಷತ್‌ ಸದಸ್ಯರಾದ ಆಯನೂರು ಮಂಜುನಾಥ್, ಆರ್‌.ಪ್ರಸನ್ನ ಕುಮಾರ್, ಎಸ್‌.ರುದ್ರೇಗೌಡ, ನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ, ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್‌.ದತ್ತಾತ್ರಿ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್‌.ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಹೆಚ್ಚುವರಿ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ ಉಪಸ್ಥಿತರಿದ್ದರು.

***

ನಾವೇನೂ ಶಾಸಕರಂತೆ ಕಾಣಲ್ವಾ: ಆಯನೂರು ಪ್ರಶ್ನೆ
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರ ಎದುರೇ ಅವರದೇ ಪಕ್ಷದ ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತ‍ಡಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅತಿವೃಷ್ಟಿ ಹಾನಿ ಪರಿಶೀಲನಾ ಸಭೆ ಮಧ್ಯೆ ಸಭಾಂಗಣಕ್ಕೆ ಬಂದ ಅವರು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ವಿರುದ್ಧ ಆಕ್ರೋಶ ಹೊರಹಾಕಿದರು.

‘ನಾವು ಶಾಸಕರಲ್ಲವೇನು? ಮಷ್ಕಿರಿ ಮಾಡ್ತೀರಾ? ಜಿಲ್ಲಾಡಳಿತ ಅಥವಾ ತಾಲ್ಲೂಕು ಆಡಳಿತದ ಸಭೆಗೆ ನಮಗೆ ಆಹ್ವಾನ ನೀಡುತ್ತಿಲ್ಲ. ಮಾಹಿತಿ‌ ನೀಡುವುದಿಲ್ಲ. ಅನುದಾನ, ಪರಿಹಾರದ ಬಗ್ಗೆ ನಮಗೆ ಮಾಹಿತಿ ಸಿಗುವುದಿಲ್ಲ. ನಾವೇನು ನಿಮಗೆ ಶಾಸಕರ ರೀತಿ ಕಾಣಿಸೋದಿಲ್ವಾ’ ಎಂದು ಪ್ರಶ್ನಿಸಿದರು.

ಆಯನೂರು ಮಾತಿಗೆ ಸಭೆಯಲ್ಲಿದ್ದ ಸಾಗರ ಶಾಸಕ ಎಚ್‌.ಹಾಲಪ್ಪ ಹರತಾಳು ಸಾಥ್ ನೀಡಿದರು. ನಂತರ ಸಚಿವ ಈಶ್ವರಪ್ಪ ಸಮಸ್ಯೆ ಇತ್ಯರ್ಥಪಡಿಸುವ ಭರವಸೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.