ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡು ತಿಂಗಳ ಮೊದಲೇ ’ಖಾತ್ರಿ’ ದಿನಗಳು ಪೂರ್ಣ: ಈಶ್ವರಪ್ಪ

Last Updated 2 ಫೆಬ್ರುವರಿ 2022, 13:07 IST
ಅಕ್ಷರ ಗಾತ್ರ

ಶಿವಮೊಗ್ಗ: ಉದ್ಯೋಗ ಖಾತ್ರಿ ಯೋಜನೆಯಲ್ಲಿ ರಾಜ್ಯಕ್ಕೆ ಹೆಚ್ಚುವರಿ ಮಾನವ ದಿನಗಳನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮಾಹಿತಿ ನೀಡಿದರು.

ಹೊಳಲೂರು ಅಂಬೇಡ್ಕರ್ ಭವನದಲ್ಲಿ ಬುಧವಾರ ಉದ್ಯೋಗ ಖಾತ್ರಿ ಯೋಜನೆ ನೌಕರರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ ನರೇಗಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ವರ್ಷ ಕೇಂದ್ರ ಸರ್ಕಾರ ನೀಡಿದ್ದ 13 ಕೋಟಿ ಮಾನವ ದಿನಗಳ ಗುರಿಯನ್ನು ನವೆಂಬರ್ ತಿಂಗಳಲ್ಲೇ ಪೂರ್ಣಗೊಳಿಸಲಾಗಿದೆ. ಹೆಚ್ಚುವರಿಯಾಗಿ ನೀಡಿದ್ದ 1.40 ಕೋಟಿ ಮಾನವ ದಿನಗಳನ್ನೂ ಬಳಸಿಕೊಳ್ಳಲಾಗಿದೆ. ಇನ್ನೂ ಎರಡು ತಿಂಗಳು ಬಾಕಿ ಇದ್ದು ಇನ್ನಷ್ಟು ಅವಕಾಶ ನೀಡುವಂತೆ ಮನವಿ ಮಾಡಲಾಗಿದೆ ಎಂದರು.

ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ವಿಶ್ವಕ್ಕೆ ಮಾದರಿಯಾಗಿದೆ. ನರೇಗಾ ಕೇವಲ ಕೂಲಿಗಾಗಿ ಕೆಲಸ ಮಾಡುವ ಯೋಜನೆಯಲ್ಲ. ಗ್ರಾಮೀಣ ಪ್ರದೇಶದಲ್ಲಿ ಅಗತ್ಯ ಮೂಲಸೌಲಭ್ಯ ಸೃಷ್ಟಿಸುವ ಜತೆಗೆ ವೈಯಕ್ತಿಕ ಸೌಲಭ್ಯಗಳನ್ನು ಪಡೆಯುವ ಯೋಜನೆ. ಯೋಜನೆ ಬಳಸಿಕೊಂಡು ರಾಜ್ಯದ ಗ್ರಾಮಗಳನ್ನು ವ್ಯವಸ್ಥಿತವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. 600ಕ್ಕೂ ಹೆಚ್ಚು ಕಲ್ಯಾಣಿಗಳಿಗೆ ಪುನರ್ಜನ್ಮ ನೀಡಲು ಸಾಧ್ಯವಾಗಿದೆ. ಎರಡು ವರ್ಷಗಳಲ್ಲಿ ಪ್ರತಿ ಗ್ರಾಮದಲ್ಲಿ ಕನಿಷ್ಠ ಒಂದು ಕೆರೆ ಅಭಿವೃದ್ಧಿ ಯೋಜನೆ ಕೈಗೊಳ್ಳಲಾಗಿದೆ. ಇದರಿಂದ ಅಂತರ್ಜಲಮಟ್ಟ ಹೆಚ್ಚಳವಾಗಿದೆ. ಜಲಧಾರೆ ಯೋಜನೆಯಡಿ ಕರ್ನಾಟಕ ದೇಶಕ್ಕೆ ಪ್ರಥಮ ಸ್ಥಾನ ಪಡೆದಿದೆ ಎಂದು ವಿವರ ನೀಡಿದರು.

ನರೇಗಾ ಯೋಜನೆಯಲ್ಲಿ ಸಣ್ಣ ರೈತರು ಕೃಷಿ ಚಟುವಟಿಕೆ ಸಾಮರ್ಥ್ಯ ಹೆಚ್ಚಿಸಿಕೊಂಡಿದ್ದಾರೆ. ಹೆಚ್ಚಿನ ಆದಾಯ ಗಳಿಸುತ್ತಿದ್ದಾರೆ. ಕೆರೆ, ಬದು, ಇಂಗು ಗುಂಡಿಗಳ ನಿರ್ಮಾಣ, ತಡೆಗೋಡೆ ನಿರ್ಮಾಣ, ಹೊಲಕ್ಕೆ ಹೋಗಲು ಸಣ್ಣ ರಸ್ತೆಗಳ ನಿರ್ಮಾಣ, ವಿವಿಧ ಇಲಾಖೆಗಳ ಸಹಯೋಗದಲ್ಲಿ ಸಸಿಗಳನ್ನು ನೆಡುವ ಯೋಜನೆ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಟ್ಟಿ ನಿರ್ಮಾಣ, ದನದ ಕೊಟ್ಟಿಗೆ, ಕುರಿ ಶೆಡ್ ನಿರ್ಮಾಣ ಸೇರಿದಂತೆ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅವಕಾಶವಿದೆ ಎಂದರು.

ತ್ಯಾವರೆಕೊಪ್ಪ ಸಿಂಹಧಾಮ ಅಭಿವೃದ್ಧಿ: ನರೇಗಾ ಯೋಜನೆ ಬಳಸಿಕೊಂಡು ತ್ಯಾವರೆಕೊಪ್ಪ ಸಿಂಹಧಾಮದ ಕೆರೆಗಳ ಅಭಿವೃದ್ಧಿ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಪ್ರಸ್ತಾವ ಸಿದ್ಧಪಡಿಸಲಾಗಿದೆ. ಸರ್ಕಾರದ ಅನುಮತಿ ಪಡೆದು ಈ ಕಾಮಗಾರಿಗಳ ಅನುಷ್ಠಾ ಕಾರ್ಯ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತ್ ಸಿಇಒ ಎಂ.ಎಲ್.ವೈಶಾಲಿ, ನರೇಗಾ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯಿತಿಯನ್ನು ಮಾದರಿ ಗ್ರಾಮ ಪಂಚಾಯತಿಯಾಗಿ ರೂಪಿಸಬಹುದು. ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ 267 ವಿವಿಧ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ಜಿಲ್ಲೆಯಲ್ಲಿ 139 ಸ್ವಚ್ಛತಾ ಸಂಕೀರ್ಣಗಳನ್ನು ಪೂರ್ಣಗೊಳಿಸಲಾಗಿದೆ. ಮುಂದಿನ ವರ್ಷದಿಂದ ಗ್ರಾಮೀಣ ಪ್ರದೇಶದಲ್ಲಿ ನೈರ್ಮಲ್ಯ ಯೋಜನೆ ಅಡಿ ಪ್ರತಿ ಮನೆಗೆ ವ್ಯವಸ್ಥಿತ ಬಚ್ಚಲು ಗುಂಡಿಗಳನ್ನು ನಿರ್ಮಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು.

ನರೇಗಾ ದಿನಾಚರಣೆ ಅಂಗವಾಗಿ ಉದ್ಯೋಗ ಖಾತ್ರಿ ಯೋಜನೆ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಗ್ರಾಮದ ಅಂಗನವಾಡಿ ಕಟ್ಟಡಕ್ಕೆ ಹಚ್ಚಿದ್ದ ಸುಂದರವಾದ ಬಣ್ಣ ಗಮನ ಸೆಳೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT