ಸಾಗರ: ಇಲ್ಲಿನ ಹಿಂದೂ ಜನಜಾಗೃತಿ ಸಮಿತಿಯ ಪ್ರಮುಖರು ವಕ್ಫ್ ಬೋರ್ಡ್ ಕಾಯ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಈಚೆಗೆ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಕಾನೂನನ್ನು ದುರುಪಯೋಗ ಪಡಿಸಿಕೊಳ್ಳುವ ಮೂಲಕ ವಕ್ಫ್ ಬೋರ್ಡ್ ಕಾಯ್ದೆ ಹೆಸರಿನಲ್ಲಿ ವಕ್ಫ್ ಬೋರ್ಡ್ ಬೆಲೆ ಬಾಳುವ ಸರ್ಕಾರಿ ಹಾಗೂ ಖಾಸಗಿ ಭೂಮಿಯನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಿದೆ. ಈ ಮೂಲಕ ಕೆಲವರು ಅಕ್ರಮ ಲಾಭ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಪ್ರವೃತ್ತಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯುವ ಬ್ರಿಗೇಡ್ ಹಾಗೂ ಸಂಘ ಪರಿವಾರದ ಸಂಘಟನೆಗಳ ಕಾರ್ಯಕರ್ತರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. ಗೋ ಹತ್ಯೆ ಪ್ರಕರಣಗಳ ಸಂಖ್ಯೆ ಕೂಡ ಅಧಿಕಗೊಳ್ಳುತ್ತಿದೆ. ರಾಜ್ಯ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಬಿಗಿಯಾದ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಹಿಂದೂ ಜನಜಾಗೃತಿ ಸಮಿತಿಯ ರಾಮು ಚೌವ್ಹಾಣ್, ರಾಜಣ್ಣ, ಕೆ.ವಿ.ಪ್ರವೀಣ್, ಮುಕುಂದ, ರೇವತಿ, ಲಕ್ಷ್ಮಿ, ಪುಷ್ಪಾ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.