ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಸಕಾಲದಲ್ಲಿ ಚುನಾವಣೆ ನಡೆಸದೆ ಸರ್ಕಾರ ಸ್ಥಳೀಯ ಸಂಸ್ಥೆಗಳ ಕತ್ತು ಹಿಸುಕುತ್ತಿದೆ’

ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ತೀ.ನ.ಶ್ರೀನಿವಾಸ್ ಆರೋಪ
Published : 18 ಜನವರಿ 2024, 15:44 IST
Last Updated : 18 ಜನವರಿ 2024, 15:44 IST
ಫಾಲೋ ಮಾಡಿ
Comments

ಸಾಗರ: ಸಕಾಲದಲ್ಲಿ ಚುನಾವಣೆಗಳನ್ನು ನಡೆಸದೆ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ. ಈ ವಿಷಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಯಾವುದೆ ವ್ಯತ್ಯಾಸ ಇಲ್ಲವಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ತೀ.ನ.ಶ್ರೀನಿವಾಸ್ ಆರೋಪಿಸಿದ್ದಾರೆ.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ ಅಧಿಕಾರದ ಅವಧಿ 2021ರಲ್ಲೆ ಮುಗಿದಿದೆ. ಮೀಸಲಾತಿ ನಿಗದಿ, ಕ್ಷೇತ್ರ ಮರು ವಿಂಗಡಣೆ ನೆಪದಲ್ಲಿ ರಾಜ್ಯದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಚುನಾವಣೆ ಮುಂದಕ್ಕೆ ಹಾಕಿತ್ತು. ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದರೂ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ದೂರಿದರು.

ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ 5 ವರ್ಷಗಳ ಅಧಿಕಾರದ ಅವಧಿ ಮುಗಿದ ತಕ್ಷಣ ಚುನಾವಣೆ ನಡೆಸಬೇಕು ಎಂದು ಸಂವಿಧಾನದ 73 ಮತ್ತು 74 ನೇ ವಿಧಿಗೆ ತಿದ್ದುಪಡಿ ತರಲಾಗಿತ್ತು. ಆದರೆ ಈಗ ಕಾಂಗ್ರೆಸ್ ಪಕ್ಷವೆ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರುತ್ತಿದೆ ಎಂದು ಅವರು ಆರೋಪಿಸಿದರು.

ಚುನಾವಣಾ ಆಯೋಗ ಹಲವು ಬಾರಿ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದರೂ ಅದನ್ನು ಸರ್ಕಾರ ಪರಿಗಣಿಸುತ್ತಿಲ್ಲ. ಜೊತೆಗೆ 400ಕ್ಕೂ ಹೆಚ್ಚು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಅವಧಿ ಮುಗಿದು 9 ತಿಂಗಳು ಕಳೆದಿದ್ದರೂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಘೋಷಣೆ ಮಾಡದೆ ಇರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಅವರು ಟೀಕಿಸಿದರು.

ಪಂಚಾಯತ್ ರಾಜ್ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ ಸರ್ಕಾರದ ನಡೆಯನ್ನು ಖಂಡಿಸಿ ಶೀಘ್ರದಲ್ಲೆ ವಿವಿಧ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT