ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಿ: ಡಾ.ಎಸ್.ಸೆಲ್ವಕುಮಾರ್

ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಸೂಚನೆ
Last Updated 26 ಜುಲೈ 2022, 5:38 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆ ಬೇಗ ಪೂರ್ಣಗೊಳಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಅತಿವೃಷ್ಟಿ ಹಾಗೂ ಇನ್ನಿತರ ವಿಷಯಗಳ ಕುರಿತು ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,ರೈತರಿಗೆ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

‘ಅತಿವೃಷ್ಟಿಯಿಂದ 1,092 ಹೆಕ್ಟೇರ್ ಭತ್ತ ಹಾಗೂ 281 ಹೆಕ್ಟೇರ್ ಮುಸುಕಿನ ಜೋಳ ಹಾಗೂ ಇತರೆ ಬೆಳೆ ಸೇರಿ ಒಟ್ಟು 1308 ಹೆಕ್ಟೇರ್ ಪ್ರದೇಶದ ಬೆಳೆಗಳಿಗೆ ಹಾನಿ ಆಗಿದೆ ಎಂದು ಅಂದಾಜಿಸಲಾಗಿದೆ. ಪ್ರಸ್ತುತ ಭತ್ತದ ಗದ್ದೆ ಮತ್ತು ಮೆಕ್ಕೆ ಜೋಳ ಹಾಗೂ ಇತರ ಕೃಷಿ ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿದ್ದು, ವಾರದ ಒಳಗೆ ಸಮೀಕ್ಷೆ ಪೂರ್ಣಗೊಳಿಸಿ ವರದಿ ಸಲ್ಲಿಸಲಾಗುವುದು’ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಜಿ.ಸಿ.ಪೂರ್ಣಿಮಾ ತಿಳಿಸಿದರು.

‘ಅತಿವೃಷ್ಟಿಯಿಂದಾಗಿ ಭದ್ರಾವತಿ ತಾಲ್ಲೂಕಿನಲ್ಲಿ 189 ಮನೆಗಳು ಜಲಾವೃತಗೊಂಡಿದ್ದು, ಅವುಗಳಲ್ಲಿ 82 ಮನೆಗಳಿಗೆ ₹ 8.20 ಲಕ್ಷ ಪರಿಹಾರ ಒದಗಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 711 ಮನೆಗಳು ಭಾಗಶಃ ಹಾನಿ, 192 ಮನೆಗಳು ತೀವ್ರ ಹಾನಿ ಹಾಗೂ 58 ಮನೆಗಳು ಪೂರ್ಣ ಹಾನಿಗೊಂಡಿವೆ. 62 ಕೊಟ್ಟಿಗೆ ಮನೆಗಳು ಹಾನಿಗೀಡಾಗಿವೆ. ರಾಜೀವ್ ಗಾಂಧಿ ವಸತಿ ನಿಗಮದ ಪೋರ್ಟಲ್‍ನಲ್ಲಿ ಹಾನಿ ವಿವರ ದಾಖಲಿಸುವ ಕಾರ್ಯ ಮಾಡಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು.

ಅತಿವೃಷ್ಟಿಯಿಂದಾಗಿ ನಾಶ ನಷ್ಟ ಉಂಟಾಗಬಹುದಾದ 163 ಗ್ರಾಮಗಳನ್ನು ಗುರುತಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ರಕ್ಷಣಾ ತಂಡಗಳು ಜಿಲ್ಲೆಯಲ್ಲಿ ಸನ್ನದ್ಧ ಸ್ಥಿತಿಯಲ್ಲಿದ್ದು, ಅಧಿಕಾರಿಗಳು ಕೇಂದ್ರ ಸ್ಥಾನ ಬಿಟ್ಟು ತೆರಳದಂತೆ ಆದೇಶ ನೀಡಲಾಗಿದೆ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಸ್ಮಾರ್ಟ್‌ಸಿಟಿ ಕಾಮಗಾರಿ ಪರಿಶೀಲನೆ

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್‌ ಸೋಮವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ಹಾಗೂ ಪಾಲಿಕೆ ಆಯುಕ್ತ ಮಾಯಣ್ಣಗೌಡ ಮತ್ತು ಇತರೆ ಇಲಾಖೆ ಅಧಿಕಾರಿಗಳೊಂದಿಗೆ ಸ್ಮಾರ್ಟ್‌ಸಿಟಿಯ ಕಾಮಗಾರಿ ಪರಿಶೀಲಿಸಿದರು.

ನಗರದ ಸ್ಮಾರ್ಟ್‌ಸಿಟಿ ಕಾಮಗಾರಿಗಳು ನಡೆಯುತ್ತಿರುವ ಸ್ಥಳಗಳಾದ ಕುವೆಂಪು ರಸ್ತೆ, ಜೈಲ್ ಸರ್ಕಲ್, ಸವಳಂಗ ರಸ್ತೆ, ಗೋಪಿ ಸರ್ಕಲ್, ಶಿವಪ್ಪ ನಾಯಕ ಅರಮನೆ, ರಿವರ್ ಫ್ರಂಟ್ ಪ್ರಾಜೆಕ್ಟ್ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿದರು.

ಬಿ.ಎಚ್. ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಭೇಟಿ ನೀಡಿ ಸ್ಮಾರ್ಟ್ ಕ್ಲಾಸ್ ಸೇರಿ ಶಾಲೆಯ ಚಟುವಟಿಕೆಗಳನ್ನು ವೀಕ್ಷಿಸಿದರು. ನಂತರ ಸ್ಮಾರ್ಟ್‌ಸಿಟಿ ಕಚೇರಿಯಲ್ಲಿ ಯೋಜನೆಗಳ ಕುರಿತು ಸಭೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT