ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಯುವ ಕಾಂಗ್ರೆಸ್‌ನಿಂದ ನಿರುದ್ಯೋಗ ದಿವಸ್ ಆಚರಣೆ

Last Updated 17 ಸೆಪ್ಟೆಂಬರ್ 2021, 11:01 IST
ಅಕ್ಷರ ಗಾತ್ರ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು ರಸ್ತೆಯಲ್ಲೇ ಪಕೋಡ, ಹಣ್ಣು, ಹೂವು ಮಾರುವ ಮೂಲಕ ಶುಕ್ರವಾರ ರಾಷ್ಟ್ರೀಯ ನಿರುದ್ಯೋಗ ದಿವಸ್ ಆಚರಿಸಿದರು.

ನರೇಂದ್ರ ಮೋದಿಯವರು ಪ್ರಧಾನಿಯಾಗಿ 7 ವರ್ಷಗಳು ಕಳೆದಿದ್ದರೂ ಯುವಜನತೆಗೆ ಉದ್ಯೋಗ ನೀಡುವಲ್ಲಿ ವಿಫಲರಾಗಿದ್ದಾರೆ. ಅವರ ಜನ್ಮದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿವಸ್ ಆಗಿ ಆಚರಿಸಲಾಗುವುದು ಎಂದು ಘೋಷಿಸಿದರು.

ನರೇಂದ್ರಮೋದಿ ಅವರು 2014ರಲ್ಲಿ ಅಧಿಕಾರ ಸ್ವೀಕರಿಸಿದಾಗ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದರು. 2 ಕೋಟಿ ಉದ್ಯೋಗ ಸೃಷ್ಟಿಸುವ ಬದಲು ಕೋಟ್ಯಂತರ ನಿರುದ್ಯೋಗಿಗಳನ್ನು ಸೃಷ್ಟಿಸಿದ್ದಾರೆ. ನಿರುದ್ಯೋಗ ಸಮಸ್ಯೆ ನಿವಾರಿಸುವಂತೆ ಯುವ ಜನತೆ ಆಗ್ರಹಿಸಿದರೆ, ‘ಬೋಂಡಾ ಮಾರಿ’ ಎಂದು ಹೇಳುವ ಮೂಲಕ ಸ್ವಾಭಿಮಾನ ಕೆಣಕಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳನ್ನು ಮುಚ್ಚುವ ಮೂಲಕ ನಿರುದ್ಯೋಗಿಗಳನ್ನಾಗಿ ಮಾಡಲಾಗುತ್ತಿದೆ. ಕೋಟ್ಯಂತರ ಪದವೀಧರರು, ಸ್ನಾತಕೋತ್ತರ ಪದವೀಧರರು, ತಾಂತ್ರಿಕ ಪದವಿ ಪಡೆದವರು ಉದ್ಯೋಗಕ್ಕಾಗಿ ಅಲೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ, ಯುವ ಕಾಂಗ್ರೆಸ್ ‘ಮೋದಿ ಹಠಾವೋ ಉದ್ಯೋಗ್ ಬಚಾವೋ’ ಎಂಬ ಘೋಷಣೆಯೊಂದಿಗೆ ರಾಷ್ಟ್ರೀಯ ನಿರುದ್ಯೋಗ ದಿವಸ್ ಆಚರಣೆ ಮಾಡುತ್ತಿದ್ದೇವೆ ಎಂದರು.

ಕೇಂದ್ರ ಸರ್ಕಾರ ನಿರುದ್ಯೋಗ ಸಮಸ್ಯೆಗೆ ಪರಿಹಾರ ದೊರಕಿಸಬೇಕು. ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳನ್ನು ಉಳಿಸಿಕೊಂಡು ಪುನಃಶ್ಚೇತನಗೊಳಿಸಬೇಕು. ಮೇಕ್ ಇನ್ ಇಂಡಿಯಾ ಘೋಷಣೆ ಕಾರ್ಯರೂಪಕ್ಕೆ ತರಬೇಕು. ಎಲ್ಲ ವಲಯದಲ್ಲೂ ವಿಫುಲ ಉದ್ಯೋಗಾವಕಾಶ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ‘ಸೂಡಾ’ ಮಾಜಿ ಅಧ್ಯಕ್ಷ ಎನ್.ರಮೇಶ್, ಪಾಲಿಕೆ ಸದಸ್ಯರಾದ ರಮೇಶ್ ಹೆಗ್ಡೆ, ಎಚ್‌.ಸಿ.ಯೋಗೀಶ್. ಯಮುನಾ ರಂಗೇಗೌಡ, ರೇಖಾ ರಂಗನಾಥ್‌, ಕೆ.ರಂಗನಾಥ್, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಮೊಹಮದ್‌ ನಿಯಾಲ್, ಮುಜೀಬ್, ಫೈರೋಜ್, ಅಕ್ಬರ್, ಕಾಂಗ್ರೆಸ್ ಮುಖಂಡರಾದ ಚಿರಂಜೀವಿ ಬಾಬು, ಶಿವಾನಂದ್, ಗಿರೀಶ್, ಮಧುಸೂದನ್, ವಿನಯ್, ಗಿರೀಶ್, ಸುರೇಶ್, ಪುರಲೆ ಮಂಜು, ಬಾಲಾಜಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT