ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಸಿವುಮುಕ್ತ ರಾಷ್ಟ್ರ ನಿರ್ಮಾಣದ ಸವಾಲು

ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿ.ವಿ. 6ನೇ ಘಟಿಕೋತ್ಸವದಲ್ಲಿ ಡಾ.ಆರ್.ಸಿ. ಅಗರ್‌ವಾಲ್‌
Last Updated 26 ನವೆಂಬರ್ 2021, 2:23 IST
ಅಕ್ಷರ ಗಾತ್ರ

ಶಿವಮೊಗ್ಗ: ಪೌಷ್ಟಿಕಾಂಶಯುಕ್ತ ಹಾಗೂ ಹಸಿವುಮುಕ್ತ ರಾಷ್ಟ್ರನಿರ್ಮಾಣ ಪ್ರಸಕ್ತದ ತುರ್ತು. ಈ ವಿಷಯವನ್ನು ಎಲ್ಲರೂ ಸವಾಲಾಗಿ ಸ್ವೀಕರಿಸಬೇಕು ಎಂದು ನವದೆಹಲಿ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಉಪ ಮಹಾನಿರ್ದೇಶಕ ಡಾ.ಆರ್.ಸಿ. ಅಗರ್‌ವಾಲ್‌ ಕಿವಿಮಾತು ಹೇಳಿದರು.

ನವುಲೆಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ 6ನೇ ಘಟಿಕೋತ್ಸವ ಸುಗ್ಗಿ ಸಂಭ್ರಮದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಪ್ರತಿಯೊಬ್ಬರಿಗೂ ಗುಣಮಟ್ಟದ ಪೌಷ್ಟಿಕಾಂಶಯುಕ್ತ ಆಹಾರ ಲಭಿಸಬೇಕು. ದೇಶದಲ್ಲಿನ ಪೌಷ್ಟಿಕಾಂಶದ ಕೊರತೆ ನೀಗಿಸುವಲ್ಲಿ ಯೋಜನೆಗಳನ್ನು ರೂಪಿಸಿ ಅನುಷ್ಠಾನ
ಗೊಳಿಸುವ ಮೂಲಕ ಜಾಗತಿಕವಾಗಿ ಗುರುತಿಸಿಕೊಳ್ಳಬೇಕು. ಅಂತಹ ಜವಾಬ್ದಾರಿ ಕೃಷಿ ವಿದ್ಯಾರ್ಥಿಗಳು ಹಾಗೂ ದೇಶದ ರೈತರ ಮೇಲಿದೆ ಎಂದರು.

ದೇಶದಲ್ಲಿ ಲಭಿಸುತ್ತಿರುವ ನೀರಿನಲ್ಲಿ ಶೇ 25ರಷ್ಟು ನೀರನ್ನು ಬಳಸಲಾಗುತ್ತಿದೆ. ಶೇ 75ರಷ್ಟು ನೀರು ವ್ಯರ್ಥವಾಗಿ ಸಮುದ್ರಗಳಿಗೆ ಸೇರುತ್ತಿದೆ. ಈ ನೀರು ಸದ್ವಿನಿಯೋಗ ಮಾಡಿಕೊಳ್ಳಬೇಕು. ಕಡಿಮೆ ನೀರಿನಲ್ಲಿ ಉತ್ತಮ ಬೆಳೆ ಹಾಗೂ ಇಳುವರಿ ಪಡೆದು, ಆಹಾರೋತ್ಪಾದನೆಯಲ್ಲಿ ಹಾಗೂ ಆಹಾರ ಸಂಸ್ಕರಣೆಯಲ್ಲಿ ಭಾರತ ಸ್ವಾವಲಂಬನೆ ಸಾಧಿಸಬೇಕು ಎಂದು ಕರೆ ನೀಡಿದರು.

ಬಹುಸಂಖ್ಯೆಯ ಜನರು ಕೃಷಿ ಕ್ಷೇತ್ರದಿಂದ ವಿಮುಖರಾಗುತ್ತಿದ್ದಾರೆ. ಕೃಷಿ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿವೆ. ವಿಮುಖರಾಗಿರುವ ಯುವಕರು ಕೃಷಿ ಕ್ಷೇತ್ರದಲ್ಲಿನ ಸಮಸ್ಯೆ ಸವಾಲುಗಳನ್ನು ಎದುರಿಸಿ, ಕೃಷಿಯನ್ನು ಲಾಭದಾಯಕ ಉದ್ಯಮವಾಗಿ ಪರಿವರ್ತಿಸಬೇಕು. ತಂತ್ರಜ್ಞಾನ ಅಳವಡಿಕೆಯಿಲ್ಲದೇ ಕೃಷಿಯಲ್ಲಿ ನಿರೀಕ್ಷಿತ ಪ್ರಗತಿ ಕಷ್ಟಸಾಧ್ಯ. ಇತ್ತೀಚಿನ ದಿನಗಳಲ್ಲಿ ಆವಿಷ್ಕಾರಗೊಂಡಿರುವ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಮುಂದುವರಿಯಬೇಕು ಎಂದು ಸಲಹೆ ನೀಡಿದರು.

ದೇಶದ ಶಿಕ್ಷಣ ವ್ಯವಸ್ಥೆಯ ದಿಕ್ಕು ಬದಲಿಸುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬೈಬಲ್‍ನಂತೆ ಕಾಪಾಡಿಕೊಂಡು ಅಧ್ಯಯನ ಮಾಡಿಬೇಕಿದೆ. ನೂತನ ಶಿಕ್ಷಣ ನೀತಿಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ಯುವಸಮೂಹಕ್ಕೆ ಹೆಚ್ಚಿನ ಉದ್ಯೋಗಾವಕಾಶಗಳು ಲಭ್ಯವಾಗಲಿವೆ. ಸ್ಪರ್ಧಾತ್ಮಕ ಯುಗಕ್ಕೆ ತಕ್ಕಂತೆ ವಿದ್ಯಾರ್ಥಿಗಳನ್ನು ರೂಪಿಸುವ ಅಗತ್ಯವಿದೆ. ಬದಲಾದ ವ್ಯವಸ್ಥೆಯಲ್ಲಿ ಮುಂದುವರಿದ ರಾಷ್ಟ್ರಗಳಿಗೆ ಸ್ಪರ್ಧೆಯೊಡ್ಡಬೇಕೆಂದರೆ ಶಿಕ್ಷಣದಲ್ಲೂ ಬದಲಾಗಬೇಕು. ನೂತನ ಶಿಕ್ಷಣ ನೀತಿಯನ್ನು ದೇಶದ ಎಲ್ಲಾ ರಾಜ್ಯಗಳೂ ಅಳವಡಿಸಿಕೊಳ್ಳಬೇಕು ಎಂದರು.

ರಾಜ್ಯಪಾಲ ಥಾವರಚಂದ್‌ ಗೆಹಲೋತ್ ಅವರು 6ನೇ ಘಟಿಕೋತ್ಸವಕ್ಕೆ ಚಾಲನೆ ನೀಡಿದರು. ನಂತರ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಸಂಶೋಧನಾರ್ಥಿಗಳಿಗೆ ಡಾಕ್ಟರೇಟ್ ಹಾಗೂ ವಿವಿಧ ನಿಕಾಯಗಳ ಪದವೀಧರ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಹೈದರಾಬಾದ್‍ನ ಭಾರತ್ ಬಯೋಟೆಕ್ ಸಂಸ್ಥೆಯ ಸಂಸ್ಥಾಪಕ ಡಾ.ಕೃಷ್ಣಮೂರ್ತಿ ಎಲ್ಲಾ ಅವರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾಯಿತು.

ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಕೆ. ನಾಯ್ಕ್ ಅವರು ಗಣ್ಯರನ್ನು ಸ್ವಾಗತಿಸಿದರು. ಕುಲಸಚಿವ ಡಾ.ಆರ್. ಲೋಕೇಶ್ ಸೇರಿ ವ್ಯವಸ್ಥಾಪನಾ ಮಂಡಳಿಯ ಸದಸ್ಯರು, ವಿಶ್ವವಿದ್ಯಾಲಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಪೋಷಕರು ಇದ್ದರು.

238 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಶಿವಮೊಗ್ಗದ ನವುಲೆಯಲ್ಲಿರುವ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಗುರುವಾರ ನವುಲೆಯ ವಿವಿ ಕ್ಯಾಂಪಸ್‌ನಲ್ಲಿ ಆಯೋಜಿಸಿದ್ದ 6ನೇ ಘಟಿಕೋತ್ಸವದಲ್ಲಿ ಬಿಎಸ್ಸಿ ಕೃಷಿ, ತೋಟಗಾರಿಕೆ ಮತ್ತು ಅರಣ್ಯ ವಿಭಾಗದ ಸ್ನಾತಕ ಪದವಿಯಲ್ಲಿನ 238 ವಿದ್ಯಾರ್ಥಿಗಳಿಗೆ ಪದವಿ ಹಾಗೂ ಕೃಷಿ, ತೋಟಗಾರಿಕೆ ಮತ್ತು ಅರಣ್ಯ ವಿಷಯಗಳಲ್ಲಿ 105 ಎಂಎಸ್ಸಿ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಹಾಗೂ 15 ವಿದ್ಯಾರ್ಥಿಗಳಿಗೆ ಪಿಎಚ್‌.ಡಿ ಪದವಿಯನ್ನು ರಾಜ್ಯಪಾಲ ಹಾಗೂ ವಿವಿಯ ಕುಲಾಧಿಪತಿ ಥಾವರಚಂದ್ ಗೆಹಲೋತ್‌ ಪ್ರದಾನ ಮಾಡಿದರು.

ಇದರಲ್ಲಿ 9 ಬಿಎಸ್ಸಿ ವಿದ್ಯಾರ್ಥಿಗಳಿಗೆ 15 ಚಿನ್ನದ ಪದಕ, 14 ಎಂಎಸ್ಸಿ ವಿದ್ಯಾರ್ಥಿಗಳಿಗೆ 15 ಚಿನ್ನದ ಪದಕ ಮತ್ತು 5 ಪಿಎಚ್‌.ಡಿ ವಿದ್ಯಾರ್ಥಿಗಳಿಗೆ 5 ಚಿನ್ನದ ಪದಕ ಸೇರಿ ಒಟ್ಟು 35 ಚಿನ್ನದ ಪದಕಗಳನ್ನು 28 ವಿದ್ಯಾರ್ಥಿಗಳಿಗೆ ಪ್ರದಾನ ಮಾಡಲಾಯಿತು.

ಗೌರವ ಡಾಕ್ಟರೇಟ್ ಪದವಿ ಪ್ರದಾನ

ವಿಶ್ವವಿದ್ಯಾಲಯದ ವತಿಯಿಂದ ಚೊಚ್ಚಲ ಗೌರವ ಡಾಕ್ಟರೇಟ್ ಪದವಿಯನ್ನು ಹೈದರಾಬಾದ್‌ನ ಭಾರತ್ ಬಯೋಟೆಕ್ ಇಂಟರ್‌ನ್ಯಾಷನಲ್ ಲಿಮಿಟೆಡ್‌ನ ಸಂಸ್ಥಾಪಕ ಹಾಗೂ ಅಧ್ಯಕ್ಷ ಡಾ.ಕೃಷ್ಣಮೂರ್ತಿ ಎಲ್ಲಾ ಅವರಿಗೆ ಪ್ರದಾನ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT