ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ ಕೃಷಿ ವಿವಿಗೆ ‘ಶಿವಪ್ಪ ನಾಯಕ ಕೃಷಿ ವಿವಿ’ ಎಂದು ನಾಮಕರಣ: ಬಿಎಸ್‌ವೈ

₹ 1,074 ಕೋಟಿ ವೆಚ್ಚದ ಕಾಮಗಾರಿ, ₹ 560 ಕೋಟಿ ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ
Last Updated 24 ಜುಲೈ 2021, 10:35 IST
ಅಕ್ಷರ ಗಾತ್ರ

ಬೆಂಗಳೂರು: ‘ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಇರುವಕ್ಕಿಯಲ್ಲಿ ಲೋಕಾರ್ಪಣೆ ಮಾಡಲಾದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ ₹ 1,074 ಕೋಟಿ ವೆಚ್ಚದ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಉದ್ಘಾಟಿಸಿ ಮತ್ತು ₹ 560 ಕೋಟಿ ವೆಚ್ಚದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆಯನ್ನು ವರ್ಚುವಲ್ ವೇದಿಕೆ ಮೂಲಕ ಶನಿವಾರ ನೆರವೇರಿಸಿ ಅವರು ಮಾತನಾಡಿದರು.

‘ಮಲೆನಾಡು, ಕರಾವಳಿ, ಬಯಲುಸೀಮೆಯ ಏಳು ಜಿಲ್ಲೆಗಳ ವ್ಯಾಪ್ತಿಗೆ ಸೀಮಿತಗೊಂಡು ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಕೆಲಸ ಮಾಡುತ್ತಿದ್ದು ಇದು ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ವಿಜ್ಞಾನ ಹೊಂದಿರುವ ರಾಜ್ಯದ ಏಕೈಕ ಸಮಗ್ರ ಹಾಗೂ ವಿಶಿಷ್ಟ ವಿಶ್ವವಿದ್ಯಾಲ. ₹ 155 ಕೋಟಿ ವೆಚ್ಚದಲ್ಲಿ ನೂತನ ಕ್ಯಾಂಪಸ್ ನಿರ್ಮಾಣ ಮಾಡಲಾಗಿದೆ. ವಿಶ್ವವಿದ್ಯಾಲಯಕ್ಕೆ 787 ಎಕರೆ ವಿಶಾಲವಾದ ಜಮೀನು ಮಂಜೂರು ಮಾಡಲಾಗಿದೆ’ ಎಂದು ಅವರು ಹೇಳಿದರು.

ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಗರಿಷ್ಟ ಪ್ರಯತ್ನ: ‘ಎರಡು ವರ್ಷಗಳ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಗರಿಷ್ಟ ಪ್ರಯತ್ನ ಮಾಡಿದ ತೃಪ್ತಿ ನನಗಿದೆ. ನನಗೆ ರಾಜಕೀಯ ಜನ್ಮ ನೀಡಿದ ಶಿವಮೊಗ್ಗ ಜಿಲ್ಲೆಯ ಅದರಲ್ಲೂ ಶಿಕಾರಿಪುರ ತಾಲ್ಲೂಕಿನ ಜನತೆಯ ಋಣ ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ’ ಎಂದರು.

‘ಜಿಲ್ಲೆಯಲ್ಲಿ ರೈತರ ಹೊಲಗಳಿಗೆ ನೀರುಣಿಸುವ ನೀರಾವರಿ ಯೋಜನೆಗಳನ್ನು ಕಳೆದ ಎರಡು ವರ್ಷಗಳ ಅವಧಿಯಲ್ಲಿ ಯುದ್ದೋಪಾಧಿಯಲ್ಲಿ ಅನುಷ್ಟಾನಗೊಳಿಸಲಾಗಿದೆ. ಕೆರೆಗಳನ್ನು ತುಂಬಿಸುವ ಏತ ನೀರಾವರಿ ಯೋಜನೆಗಳಿಗೆ ದಾಖಲೆ ಪ್ರಮಾಣದ ಅನುದಾನ ಒದಗಿಸಲಾಗಿದೆ. ಈ ನೀರಾವರಿ ಯೋಜನೆಗಳು ಭವಿಷ್ಯದಲ್ಲಿ ಜಿಲ್ಲೆಯ ರೈತರ ಆರ್ಥಿಕ ಚಿತ್ರಣವನ್ನೇ ಬದಲಾಯಿಸುವ ವಿಶ್ವಾಸವಿದೆ’ ಎಂದರು.

‘ಶಿವಮೊಗ್ಗ ತಾಲ್ಲೂಕಿನ ಸೋಗಾನೆಯಲ್ಲಿ ಏರ್‌ ಬಸ್‌ ಮಾದರಿಯ ವಿಮಾನಗಳು ಇಳಿಯಲು ಸಾಧ್ಯವಾಗುವಂಥ ವಿಮಾನ ನಿಲ್ದಾಣ ಕಾಮಗಾರಿ ಭರದಿಂದ ಸಾಗಿದೆ. ಮುಂದಿನ ಎಪ್ರಿಲ್ ವೇಳೆಗೆ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲಿದೆ. ವಿಮಾನ ನಿಲ್ದಾಣ ಆರಂಭದಿಂದ ಶಿವಮೊಗ್ಗ ಮಾತ್ರವಲ್ಲ ಸುತ್ತಲಿನ ಜಿಲ್ಲೆಗಳ ಆರ್ಥಿಕ ಪರಿಸ್ಥಿತಿಗೆ ಅನುಕೂಲವಾಗುವ ನಿರೀಕ್ಷೆಯಿದೆ’

‘ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಇರುವ ಅವಕಾಶಗಳ ಸದುಪಯೋಗಕ್ಕೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗಿದೆ. ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಯನ್ನು ಸ್ಮರಣೀಯವಾಗಿಸಲು ₹ 185 ಕೋಟಿ ವೆಚ್ಚದಲ್ಲಿ ಮೂಲಸೌಲಭ್ಯ ಅಭಿವೃದ್ಧಿಪಡಿಸಲಾಗುತ್ತಿದೆ. ಪ್ರವಾಸಿಗರನ್ನು ವರ್ಷವಿಡೀ ಆಕರ್ಷಿಸಲು ಕೆಪಿಟಿಸಿಎಲ್‌ ಸಹಕಾರದೊಂದಿಗೆ ಶನಿವಾರ ಹಾಗೂ ಭಾನುವಾರ ಧುಮ್ಮಿಕ್ಕುವ ಸರ್ವ ಋತು ಜೋಗ ರೂಪಿಸಲಾಗುತ್ತಿದೆ’ ಎಂದರು.

‘ಮತ್ತೆ ರಾಜ್ಯದ ಕೆಲವೆಡೆ ಪ್ರವಾಹದ ಪರಿಸ್ಥಿತಿ ಎದುರಾಗಿದೆ. ಶಿವಮೊಗ್ಗ ಸೇರಿ ಎಂಟು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಶುಕ್ರವಾರ ವಿಡಿಯೊ ಸಂವಾದ ನಡೆಸಿ, ಜನರ ರಕ್ಷಣೆ, ಪರಿಹಾರ ಕ್ರಮಗಳ ಬಗ್ಗೆ ಸೂಚನೆ ನೀಡಿದ್ದೇನೆ. ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಭಾನುವಾರ (ಜುಲೈ 25) ಬೆಳಗಾವಿಗೆ ತೆರಳಲಿದ್ದೇನೆ’ ಎಂದು ಅವರು ಹೇಳಿದರು.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ಬಿ.ಸಿ. ಪಾಟೀಲ, ಭೈರತಿ ಬಸವರಾಜ್, ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT