ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೌಟುಂಬಿಕ ದೌರ್ಜನ್ಯ ಪ್ರಕರಣ ಹೆಚ್ಚಳ ಆತಂಕಕಾರಿ

ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿ.ಪಂ ಸಿಇಒ ವೈಶಾಲಿ
Last Updated 3 ಫೆಬ್ರುವರಿ 2021, 3:03 IST
ಅಕ್ಷರ ಗಾತ್ರ

ಶಿವಮೊಗ್ಗ: ‘ಕಳೆದ ವರ್ಷಕ್ಕೆ ಹೋಲಿಸಿದರೆ ಲಾಕ್‌ಡೌನ್ ಅವಧಿಯಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿರುವುದು ಆತಂಕಕಾರಿ ಬೆಳವಣಿಗೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ ಹೇಳಿದರು.

ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅನುಷ್ಠಾನ
ಗೊಳ್ಳುತ್ತಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಲಾಕ್ ಡೌನ್ ಅವಧಿಯಲ್ಲಿ ಎಲ್ಲರೂ ಮನೆಯಲ್ಲಿಯೇ ಕಾಲ ಕಳೆಯುವಂತಾಗಿತ್ತು. ಈ ಸಂದರ್ಭದಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿವೆ. ಅರ್ಥಿಕ ಸಂಕಷ್ಟ ಹಾಗೂ ಮದ್ಯವ್ಯಸನ ಮುಂತಾದ ಸಮಸ್ಯೆಗಳು ಕೌಟುಂಬಿಕ ದೌರ್ಜನ್ಯಕ್ಕೆ ಪ್ರಮುಖ ಕಾರಣವಾಗಿವೆ. ಸಾಂತ್ವನ ಕೇಂದ್ರಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಮೂಲಕ ಇಂತಹ ದೌರ್ಜನ್ಯಗಳಿಗೆ ಕಡಿವಾಣ ಹಾಕಬೇಕಿದೆ’ ಎಂದರು.

‘ಸಾಂತ್ವನ ಕೇಂದ್ರಗಳಿಗೆ ಬರುವ ಪ್ರಕರಣಗಳಲ್ಲಿ ಬಹುತೇಕವು ‌ವರದಕ್ಷಿಣೆ ಕಿರುಕುಳ, ಅತ್ಯಾಚಾರ, ಲೈಂಗಿಕ ಕಿರುಕುಳ, ದೌರ್ಜನ್ಯಕ್ಕೆ ಸಂಬಂಧಿಸಿದ್ದಾಗಿವೆ. ಪತಿ ಹಾಗೂ ಅವರ ಮನೆಯವರಿಂದ ನೀಡಲಾಗುವ ಹಿಂಸೆಯನ್ನು ವಿರೋಧಿಸಿ ಮಹಿಳೆಯರು ದೂರು ದಾಖಲಿಸತೊಡಗಿದ್ದಾರೆ’ ಎಂದರು.

‘ದೈಹಿಕವಾಗಿ ಹಾಗೂ ಮಾನಸಿಕವಾಗಿ ಹಿಂಸೆಯನ್ನು ಅನುಭವಿಸುತ್ತಿರುವ ಮಹಿಳೆಯರಿಗೆ ಕಾನೂನು ಸಲಹೆ, ಆರ್ಥಿಕ ಪರಿಹಾರ, ತಾತ್ಕಾಲಿಕ ಆಶ್ರಯ, ರಕ್ಷಣೆ ನೀಡುವುದರ ಜೊತೆಗೆ ಸ್ವಾವಲಂಬನೆ ಸಾಧಿಸಲು ಅನುಕೂಲವಾಗುವಂತೆ ತರಬೇತಿ ನೀಡುವುದರೊಂದಿಗೆ ಸಮಾಜದಲ್ಲಿ ಧೈರ್ಯವಾಗಿ ಬದುಕುವಂತೆ ಸಶಕ್ತರನ್ನಾಗಿ ಮಾಡುವ ಅಗತ್ಯವಿದೆ’ ಎಂದು ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್. ಸರಸ್ವತಿ ಮಾತನಾಡಿ, ‘ಜಿಲ್ಲೆಯ ನ್ಯಾಯಾಲಯದಲ್ಲಿ ಪೋಕ್ಸೊ ಕಾಯ್ದೆಯ ಅಡಿ 300ಕ್ಕೂ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. ಸಂತ್ರಸ್ತ ಮಹಿಳೆಗೆ ಸಕಾಲದಲ್ಲಿ ಕಾನೂನು ಮತ್ತು ಸಾಮಾಜಿಕ ರಕ್ಷಣೆ ಒದಗಿಸಿ, ಕ್ರೌರ್ಯಕ್ಕೆ ಕಾರಣರಾದ ವ್ಯಕ್ತಿಗಳನ್ನು ನಿಯಮಾನುಸಾರ ಕಾನೂನು ಕ್ರಮಕ್ಕೆ ಒಳಪಡಿಸುವಲ್ಲಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಕ್ರಮ ವಹಿಸಬೇಕಾದ ತುರ್ತು ಅಗತ್ಯವಿದೆ’ ಎಂದು ತಿಳಿಸಿದರು.

‘ಸಂತ್ರಸ್ತೆಯ ಮಾನಸಿಕ ಸ್ಥೈರ್ಯ ಕುಗ್ಗದಂತೆ ನೋಡಿಕೊಳ್ಳುವ ಹಾಗೂ ಸಾಮಾಜಿಕವಾಗಿ ಅವರನ್ನು ಪರಿಚಯಿಸದಂತೆ ಗೋಪ್ಯತೆ ಕಾಪಾಡಿಕೊಳ್ಳುವ ಅಗತ್ಯವಿದೆ. ಪೋಕ್ಸೋ ಕಾಯ್ದೆಯ ಅಡಿ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳ ತನಿಖೆ ಮಂದಗತಿಯಲ್ಲಿದ್ದು, ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಅಗತ್ಯ ಕ್ರಮ ವಹಿಸಬೇಕು’ ಎಂದು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ವೀರಭದ್ರಪ್ಪ ಪೂಜಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಉಪನಿರ್ದೇಶಕ ಸಿ. ಸುರೇಶ್, ಸಂರಕ್ಷಣಾಧಿಕಾರಿ ಗಂಗೀಬಾಯಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT