ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಮೂರನೆ ಅಲೆ ತಡೆಗೆ ಸಕಲ ಸಿದ್ಧತೆ: ಸಿಎಂ ಯಡಿಯೂರಪ್ಪ ಅಭಯ

ರಾಜ್ಯದ ಜನರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಯ
Last Updated 12 ಜೂನ್ 2021, 14:17 IST
ಅಕ್ಷರ ಗಾತ್ರ

ಶಿವಮೊಗ್ಗ: ಕೋವಿಡ್ ಮೂರನೇ ಅಲೆ ಎದುರಿಸಲು ಸರ್ಕಾರ ಮುಜಾಗ್ರತಾ ಕ್ರಮ ಕೈಗೊಳ್ಳುತ್ತಿದೆ. ಜನರು ಭೀತಿಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲೆಯ ಕೋವಿಡ್ ನಿರ್ವಹಣೆ ಹಾಗೂ ವಿವಿಧ ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನಾ ಸಭೆಯ ನಂತರ ಅವರು ಸುದ್ದಿಗಾರ ಜತೆ ಮಾತನಾಡಿದರು.

ಮೂರನೇ ಅಲೆ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರ ಡಾ.ದೇವಿಪ್ರಸಾದ್ ಶೆಟ್ಟಿ ಅವರ ನೇತೃತ್ವದ ತಜ್ಞರ ಸಮಿತಿ ರಚಿಸಿದೆ. ಈ ಸಮಿತಿಯ ವರದಿ ಆಧಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಎಲ್ಲಾ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುವುದು. ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 75 ಮಕ್ಕಳ ಐಸಿಯು ಹಾಸಿಗೆ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ 5ಕ್ಕಿಂತ ಕೆಳಗೆ ಇಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ವೈದ್ಯಕೀಯ ಸೇವೆ ಉತ್ತಮಪಡಿಸಲು ಸರ್ಕಾರ ಹಲವು ದಿಟ್ಟ ಹೆಜ್ಜೆ ಇರಿಸಿದೆ. ಇದೇ ಮೊದಲ ಬಾರಿಗೆ 1,780 ವೈದ್ಯರನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲೆಗೆ 83 ವೈದ್ಯರ ನೇಮಕ ಮಾಡಲಾಗಿದೆ. ಇದರಲ್ಲಿ 29 ತಜ್ಞ ವೈದ್ಯರಿದ್ದಾರೆ. ಜಿಲ್ಲೆಯ ವೈದ್ಯಕೀಯ ಕ್ಷೇತ್ರದ ಸುಧಾರಣೆ ಕುರಿತು ಪರಿಶೀಲನೆ ನಡೆಸಲು ಜಿಲ್ಲೆಗೆ ಮತ್ತೊಮ್ಮೆ ಭೇಟಿ ನೀಡಲು ಆರೋಗ್ಯ ಸಚಿವರಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ತಜ್ಞರ ಸಮಿತಿಯಿಂದ ಪರಿಶೀಲನೆ: ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸಾವುಗಳ ಕುರಿತು ಜಿಲ್ಲಾ ಮಟ್ಟದಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಮರಣ ಪ್ರಮಾಣ ಹೆಚ್ಚಾಗಿರಲು ಕಾರಣ ಕಂಡುಕೊಳ್ಳಲು ಬೆಂಗಳೂರಿನಿಂದ ತಜ್ಞರ ಸಮಿತಿ ಕಳುಹಿಸಲಾಗುವುದು. ಜಿಲ್ಲೆಯ ಆಸ್ಪತ್ರೆಗೆ ದಾಖಲಾದ 72 ಗಂಟೆಯ ಒಳಗೆ ಮೃತಪಟ್ಟವರ ಪ್ರಮಾಣ ಹೆಚ್ಚಾಗಿದೆ. ಈ ಕುರಿತು ಸಮಿತಿ ಪರಿಶೀಲನೆ ನಡೆಸಿ ವರದಿ ನೀಡಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ವಿವರ ನೀಡಿದರು.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿರುವವರ ಕೋವಿಡ್ ಪರೀಕ್ಷೆ ಪ್ರಮಾಣ ಹೆಚ್ಚಿಸಬೇಕು. ಹೋಂ ಐಸೋಲೇಷನ್‍ಗೆ ಅವಕಾಶ ನೀಡಬಾರದು. ಕೋವಿಡ್ ಆರೈಕೆ ಕೇಂದ್ರಗಳಲ್ಲೇ ಚಿಕಿತ್ಸೆ ಒದಗಿಸಬೇಕು. ಶಿವಮೊಗ್ಗ ವೈದ್ಯಕೀಯ ಕಾಲೇಜುಗಳಲ್ಲಿ ಹಾಸಿಗೆಗಳ ಸಂಖ್ಯೆ ಹೆಚ್ಚಿಸಲಾಗಿದೆ. ವೈದ್ಯರು ಸೇರಿದಂತೆ ಮೂಲಸೌಲಭ್ಯಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯರು, ನರ್ಸ್‍ಗಳು ಹಾಗೂ ‘ಡಿ’ ಗ್ರೂಪ್ ಸಿಬ್ಬಂದಿ ಸಂಖ್ಯೆ ಹೆಚ್ಚಿಸುವ ಅನಿವಾರ್ಯತೆ ಇದೆ. ಈ ಕುರಿತು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಜಿಲ್ಲೆಯ ಕೋವಿಡ್ ನಿರ್ವಹಣೆ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಪ್ರಗತಿ ಕುರಿತು ಮಾಹಿತಿ ನೀಡಿದರು.

ನಗರಾಭಿವೃದ್ಧಿ ಸಚಿವ ಬಿ.ಬಸವರಾಜು, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್‌ ಉಪಸ್ಥಿತರಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT