ಸೋಮವಾರ, ಫೆಬ್ರವರಿ 17, 2020
30 °C
₹ 945 ಕೋಟಿ ವೆಚ್ಚದ 50 ಕಾಮಗಾರಿಗಳ ತ್ವರಿತ ಅನುಷ್ಠಾನಕ್ಕೆ ಕ್ರಮ

ಕುಂಠಿತವಾಗಿದ್ದ ಸ್ಮಾರ್ಟ್‌ಸಿಟಿ ಕಾಮಗಾರಿಗೆ ಮತ್ತೆ ವೇಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಅತಿವೃಷ್ಟಿ, ಪ್ರವಾಹದ ಪರಿಣಾಮ ಕುಂಠಿತವಾಗಿದ್ದ ಸ್ಮಾರ್ಟ್‌ಸಿಟಿ ಕಾಮಗಾರಿಗಳು ಮತ್ತೆ ವೇಗ ಪಡೆದುಕೊಂಡಿವೆ. ₨ 945 ಕೋಟಿ ವೆಚ್ಚದ 50 ಕಾಮಗಾರಿಗಳ ತ್ವರಿತ ಅನುಷ್ಠಾನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.

ಸ್ಮಾರ್ಟ್‌ಸಿಟಿ ಕಚೇರಿಯಲ್ಲಿ ಗುರುವಾರ ನಡೆದ ವಾರ್ಷಿಕ ಮಹಾಸಭೆ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಸ್ಮಾರ್ಟ್‌ಸಿಟಿ ಕಾಮಗಾರಿ ತ್ವರಿತ ಅನುಷ್ಠಾನಕ್ಕೆ ಅಗತ್ಯ ತಾಂತ್ರಿಕ ಸಿಬ್ಬಂದಿ ನೇಮಕ ಮಾಡಲಾಗಿದೆ. ಮೆಸ್ಕಾಂ, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಅರಣ್ಯ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜತೆ ಪ್ರತಿ ವಾರ ಸಭೆ ನಡೆಸಲಾಗುತ್ತಿದೆ. ಇಲಾಖೆಗಳ ಮಧ್ಯೆ ಸಮನ್ವಯ ಇಟ್ಟುಕೊಳ್ಳಲಾಗಿದೆ. ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಕಳಪೆ ಕಾಮಗಾರಿ ವರದಿಯಾದರೆ ತಕ್ಷಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಸಾರ್ವಜನಿಕ, ಖಾಸಗಿ ಸಹಭಾಗಿತ್ವದಲ್ಲಿ ₨ 234 ಕೋಟಿ ವೆಚ್ಚದಲ್ಲಿ 3 ಕಾಮಗಾರಿ ಅನುಷ್ಠಾನಗೊಳಿಸಲಾಗುತ್ತಿದೆ. ಟ್ಯಾಂಕ್ ಮೊಹಲ್ಲಾ ಉದ್ಯಾನ ಮತ್ತು ಇ-ಗ್ರಂಥಾಲಯ ಸೌಕರ್ಯ ಕಾಮಗಾರಿಗಳು ಪೂರ್ಣಗೊಂಡಿವೆ. ಅಂದಾಜು ₨ 3 ಕೋಟಿ ವೆಚ್ಚದಲ್ಲಿ 15 ಕನ್ಸರ್‌ವೆನ್ಸಿಗಳ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ₨ 7.83 ಕೋಟಿ ವೆಚ್ಚದಲ್ಲಿ ನಾಲ್ಕು ಪಾರ್ಕ್‌ಗಳು, ನೆಹರೂ ಸ್ಟೇಡಿಯಂ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ ಎಂದು ವಿವರ ನೀಡಿದರು.

ಸುಮಾರು ₨ 5 ಕೋಟಿ ವೆಚ್ಚದಲ್ಲಿ 9 ಶಾಲೆಗಳು, 2 ಕಾಲೇಜು ಮತ್ತು 4 ಗ್ರಂಥಾಲಯಗಳನ್ನು ‘ಸ್ಮಾರ್ಟ್ ಲೈಬ್ರರಿ’ಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ₨ 538 ಕೋಟಿ ವೆಚ್ಚದಲ್ಲಿ 108 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. 2.80 ಕಿ.ಮೀ ಹೆರಿಟೇಜ್ ವಾಕ್, ₨ 20 ಕೋಟಿ ವೆಚ್ಚದಲ್ಲಿ 7 ಪಾರ್ಕ್ ಅಭಿವೃದ್ಧಿ ಮಾಡಲಾಗುತ್ತಿದೆ. ₨ 130 ಕೋಟಿ ವೆಚ್ಚದಲ್ಲಿ ತುಂಗಾ ನದಿ ದಂಡೆ ಅಭಿವೃದ್ಧಿ ಮಾಡಲಾಗುತ್ತಿದೆ. ₨ 123 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ನಡೆದಿದೆ. ₨ 63 ಕೋಟಿ ಮೊತ್ತದ ಕಾಮಗಾರಿಗಳು ಡಿಪಿಆರ್ ಹಂತದಲ್ಲಿವೆ ಎಂದು ಮಾಹಿತಿ ನೀಡಿದರು.

ಗಾಂಧಿಪಾರ್ಕ್ ಅಭಿವೃದ್ಧಿ: ₨ 10 ಕೋಟಿ ವೆಚ್ಚದಲ್ಲಿ ನಗರದ ಗಾಂಧಿಪಾರ್ಕ್ ಅಭಿವೃದ್ಧಿ ಕಾರ್ಯ ಶೀಘ್ರ ಪ್ರಾರಂಭವಾಗಲಿದೆ. 2.5 ಎಕರೆಯಲ್ಲಿ ವನ್ಯಜೀವಿ ಮಾಹಿತಿ ಕೇಂದ್ರ, ಸೈನ್ಸ್ ಪಾರ್ಕ್‌ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು. 

ಪಿಆರ್‌ಒ ನೇಮಕ: ಸಾರ್ವಜನಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಲು ಸಾರ್ವಜನಿಕ ಸಂಪರ್ಕಾಧಿಕಾರಿ ನೇಮಕ ಮಾಡಲಾಗಿದೆ. ಸಾರ್ವಜನಿಕರು ಸ್ಮಾರ್ಟ್ ಸಿಟಿ ಅಹವಾಲುಗಳನ್ನು ಎಂ.ಕೆ.ರತ್ನಾಕರ ಅವರ ಮೊಬೈಲ್ 94488 24926, 78928 93334 ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದರು.

ಸ್ಮಾರ್ಟ್ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ, ಪಾಲಿಕೆ ಮೇಯರ್ ಲತಾ ಗಣೇಶ್, ಉಪ ಮೇಯರ್ ಚನ್ನಬಸಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)