ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪೂರ್ವಭಾವಿ ಸಿದ್ಧತಾ ಸಭೆ; ನಕಲುಮುಕ್ತ ಪರೀಕ್ಷೆಗೆ ಸೂಚನೆ

ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿಕೆ
Last Updated 20 ಮಾರ್ಚ್ 2020, 15:30 IST
ಅಕ್ಷರ ಗಾತ್ರ

ವಿಜಯಪುರ: ‘ಜಿಲ್ಲೆಯಲ್ಲಿ ನಡೆಯಲಿ ರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಪಾರದರ್ಶಕ, ನಕಲುಮುಕ್ತ ಹಾಗೂ ನ್ಯಾಯಸಮ್ಮತ ರೀತಿಯಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಭಾವಿ ಸಿದ್ಧತೆ ಮತ್ತು ಪರೀಕ್ಷೆ ಸಂದರ್ಭದಲ್ಲಿ ಕೊರೊನಾ ವೈರಸ್‌ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಶುಕ್ರವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

‘ಎಲ್ಲಾ ಪರೀಕ್ಷಾ ಕೇಂದ್ರಗಳ ಮೇಲೆ ತೀವ್ರ ನಿಗಾ ವಹಿಸಬೇಕು. ಯಾವುದೇ ರೀತಿಯಿಂದ ಲೋಪದೋಷ ಆಗದಂತೆ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ವ್ಯಾಪ್ತಿಯ 106 ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗುವುದು’ ಎಂದು ಹೇಳಿದರು.

‘ಪರೀಕ್ಷಾ ಕೇಂದ್ರದ 200 ಮೀ. ಸುತ್ತ ಸಾರ್ವಜನಿಕರು ಮತ್ತು ಪಾಲಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಪರೀಕ್ಷೆ ಆರಂಭಕ್ಕೂ ಒಂದು ಗಂಟೆ ಮುಂಚೆ ಪಾಲಕರು ಪರೀಕ್ಷಾ ಕೇಂದ್ರದ ನಿರ್ಬಂಧಿತ ಪ್ರದೇಶದಲ್ಲಿ ಇರುವಂತಿಲ್ಲ. ವಾಹನಗಳನ್ನು ಸಹ ನಿರ್ಬಂಧಿಸಲಾಗಿದೆ. ಯಾವುದೇ ಜೆರಾಕ್ಸ್‌ ಅಂಗಡಿಗಳನ್ನು ಕೂಡ ತೆರೆಯುವಂತಿಲ್ಲ’ ಎಂದರು.

‘ಪರೀಕ್ಷಾ ಕೇಂದ್ರಕ್ಕೆ ನಿಯೋಜಿತ ಅಧಿಕಾರಿಗಳು, ಸಿಬ್ಬಂದಿ ಮತ್ತು ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಇತರ ಯಾರೂ ಪ್ರವೇಶ ಮಾಡಕೂಡದು. ನಕಲು, ಅಕ್ರಮ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಕ್ರಮಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಪರೀಕ್ಷಾ ಅವಧಿಯಲ್ಲಿ ಮುಖ್ಯ ಮೇಲ್ವಿಚಾರಕರು ಕೀಪ್ಯಾಡ್ ಮೊಬೈಲ್ ಬಳಸಬೇಕು. ಅವರನ್ನು ಹೊರತುಪಡಿಸಿ ಯಾರೂ ಮೊಬೈಲ್ ಬಳಸುವಂತಿಲ್ಲ. ಪರೀಕ್ಷೆ ಬರೆಯಲಿರುವ 36 ಸಾವಿರ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಸಂಬಂಧಪಟ್ಟ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಮೇಲ್ವಿಚಾರಣೆ ಮಾಡಬೇಕು’ ಎಂದು ಹೇಳಿದರು.

ಮುನ್ನೆಚ್ಚರಿಕೆಗೆ ಸೂಚನೆ: ‘ಪರೀಕ್ಷೆ ಅಂಗವಾಗಿ ಎಲ್ಲ ಪರೀಕ್ಷಾ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸುವ ಜೊತೆಗೆ ಕೊರೊನಾ ಬಗ್ಗೆ ಮಕ್ಕಳಿಗೂ ತಿಳಿಹೇಳಬೇಕು. ಕೊರೊನಾ ಅಪಾಯಕಾರಿಯಾಗಿ ವಿಸ್ತಾರ ಹೊಂದುತ್ತಿರುವುದರಿಂದ ಅನವಶ್ಯಕ ವಾಗಿ ಹೊರಗೆ ಓಡಾಡದೇ, ಸೂಕ್ತ ಜಾಗೃತಿ ವಹಿಸಬೇಕು. ಭಾನುವಾರ ಜನತಾ ಕಫ್ರ್ಯೂ ಅಂಗವಾಗಿ ಪ್ರಧಾನಿ ನೀಡಿರುವ ಸಲಹೆಗಳನ್ನು ಪಾಲಿಸಬೇಕು’ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಧಿಕಾರಿ ಗೋವಿಂದ ರೆಡ್ಡಿ ಮಾತನಾಡಿ, ‘ಪರೀಕ್ಷೆ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿನ ಕಚೇರಿ ಕಾರ್ಯಗಳನ್ನು ಮಾಡುವಂತಿಲ್ಲ. ಪರೀಕ್ಷಾ ಕಾರ್ಯಗಳಿಗೆ ನೇಮಿಸಲಾದ ಸಿಬ್ಬಂದಿ ಹೊರತುಪಡಿಸಿ ಅನ್ಯ ವ್ಯಕ್ತಿಗಳು ಪ್ರವೇಶಿಸುವಂತಿಲ್ಲ. ಮೇಲ್ವಿಚಾರಕರು ಹಾಗೂ ಸಿಬ್ಬಂದಿ ಮೊಬೈಲ್ ಬಳಸುವಂತಿಲ್ಲ. ಪರೀಕ್ಷಾ ಸಮಯದಲ್ಲಿ ಎಲ್ಲಾ ಸಿಬ್ಬಂದಿ ಕಡ್ಡಾಯವಾಗಿ ಐಡಿ ಕಾರ್ಡ್ ಬಳಸತಕ್ಕದ್ದು’ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಪ್ರಸನ್ನಕುಮಾರ್‌, ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ರಾಜೀವ ನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT