ಗುರುವಾರ , ಮೇ 13, 2021
39 °C

ಸಂಚಾರ ನಿಯಮ ಉಲ್ಲಂಘನೆ ₹1.27 ಕೋಟಿ ದಂಡ ವಸೂಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ತುಮಕೂರು ಉಪ ವಿಭಾಗದ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ₹1.27 ಕೋಟಿ ದಂಡವನ್ನು ಪೊಲೀಸರು ವಸೂಲಿ ಮಾಡಿದ್ದಾರೆ.

ಕಳೆದ ಜನವರಿ 1ರಿಂದ ಈವರೆಗೆ 24,869 ಪ್ರಕರಣಗಳನ್ನು ದಾಖಲಿಸಿ ದಂಡ ಸಂಗ್ರಹಿಸಿದ್ದಾರೆ. ಜತೆಗೆ ಇಸ್ಪೀಟ್‌, ಮಟ್ಕಾ ಸೇರಿದಂತೆ ವಿವಿಧ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದವರು, ದಂಧೆ ನಡೆಸುವವರ ಮೇಲೆ ದಾಳಿ ನಡೆಸಿ ₹4.69 ಲಕ್ಷ ವಶಪಡಿಸಿಕೊಂಡಿದ್ದಾರೆ.

ತುಮಕೂರು ಉಪವಿಭಾಗ ವ್ಯಾಪ್ತಿಯಲ್ಲಿ ಜೂಜಾಟ ಆಡುತ್ತಿರುವವರ ವಿರುದ್ಧ ದಾಳಿ ಮಾಡಿ ಪ್ರಕರಣಗಳನ್ನು ದಾಖಲಿಸಿ 82 ಮಂದಿ ಆರೋಪಿಗಳನ್ನು ಬಂಧಿಸಿ, ₹4.55 ಲಕ್ಷ ವಶಕ್ಕೆ ಪಡೆದಿದ್ದಾರೆ. 12 ಬೈಕ್‌ಗಳು, 1 ಕಾರು ವಶಪಡಿಸಿಕೊಂಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 4, ಬೆಳ್ಳಾವಿ ಠಾಣಾ ವ್ಯಾಪ್ತಿಯಲ್ಲಿ 4, ಕ್ಯಾತ್ಸಂದ್ರ ಠಾಣಾ ವ್ಯಾಪ್ತಿಯಲ್ಲಿ 2, ಹೆಬ್ಬೂರು ಮತ್ತು ಹೊಸ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ತಲಾ 1 ಪ್ರಕರಣ ದಾಖಲಾಗಿದೆ.

ತುಮಕೂರು ನಗರದಲ್ಲಿ ಮಟ್ಕಾ ಬರೆಯುತ್ತಿದ್ದ 10 ಆರೋಪಿಗಳನ್ನು ಬಂಧಿಸಿ, 10 ಪ್ರಕರಣಗಳನ್ನು ದಾಖಲಿಸಲಾಗಿದೆ. ₹14,195 ನಗದು, 2 ಮೊಬೈಲ್‍ ವಶಪಡಿಸಿಕೊಳ್ಳಲಾಗಿದೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2, ತಿಲಕ್‍ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 8 ಪ್ರಕರಣಗಳು ದಾಖಲಾಗಿವೆ.

ಸವಾರರು ಕಡ್ಡಾಯವಾಗಿ ಸಂಚಾರ ನಿಯಮ ಪಾಲಿಸಬೇಕು. ಇಲ್ಲವಾದರೆ ದಂಡ ಕಟ್ಟಿಟ್ಟಬುತ್ತಿ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು