ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

257 ಚಾಲನಾ ಪರವಾನಗಿ ಅಮಾನತು

ರಸ್ತೆ ಸುರಕ್ಷಾ ನಿಯಮ ಉಲ್ಲಂಘನೆ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ಹೇಳಿಕೆ
Last Updated 12 ಸೆಪ್ಟೆಂಬರ್ 2019, 10:00 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿರುವ 257 ವಾಹನ ಸವಾರರ ಚಾಲನಾ ಪರವಾನಗಿ (ಡಿ.ಎಲ್‌) ಹಾಗೂ 45 ವಾಹನ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ಹೇಳಿದರು.

ಬುಧವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅತೀ ಹೆಚ್ಚು ಸಂಖ್ಯೆಯ ಅಪಘಾತಗಳು ಹಾಗೂ ಮರಣ ಸಂಭವಿಸುತ್ತಿವೆ. ಅಪಘಾತಗಳನ್ನು ತಡೆಗಟ್ಟಲು ಆರ್.ಟಿ.ಒ ಹಾಗೂ ಹೆದ್ದಾರಿ ಪ್ರಾಧಿಕಾರ, ಪೊಲೀಸ್, ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಅಪಘಾತ ತಡೆಗಟ್ಟಲು ಜಿಲ್ಲಾ ಪೊಲೀಸ್ ಇಲಾಖೆಯಿಂದ ನಿರ್ಮಾಣಗೊಂಡಿರುವ ಕಿರುಚಿತ್ರವನ್ನು ಎಲ್ಲಾ ಶಾಲಾ- ಕಾಲೇಜು, ಸಂಸ್ಥೆಗಳಲ್ಲಿ ಅರಿವು ಮೂಡಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ, ಇಲಾಖೆಗಳ ವೆಬ್‌ಪೇಜ್‌ಗಳಲ್ಲಿ ಪ್ರಚಾರ ಮಾಡಿಸಿ ಎಲ್ಲರಿಗೂ ಶೇರ್ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ವ್ಯಾಪ್ತಿಯಲ್ಲಿ ಹೆಚ್ಚಾಗಿ ಕೆಎಸ್ಆರ್‌ಟಿಸಿ ಬಸ್‌ಗಳಿಂದ ಅಪಘಾತಗಳು ಹೆಚ್ಚಾಗುತ್ತಿವೆ. ಇದಕ್ಕೆ ಏನು ಕ್ರಮ ಕೈಗೊಂಡಿದ್ದೀರಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಕೆಎಸ್ಆರ್‌ಟಿಸಿ ಅಧಿಕಾರಿಗಳು, ‘ಬೇರೆ ವಿಭಾಗದಿಂದ ಬರುವ ಬಸ್‌ಗಳಿಂದ ಜಿಲ್ಲೆಯಲ್ಲಿ ಹೆಚ್ಚು ಅಪಘಾತವಾಗುತ್ತಿವೆ. ಕಳೆದ 2– 3 ತಿಂಗಳಿಂದ ತುಮಕೂರು ವಿಭಾಗದ ಯಾವುದೇ ಬಸ್‌ಗಳಿಂದ ಅಪಘಾತ ಸಂಭವಿಸಿಲ್ಲ. ಜಿಲ್ಲೆಯ ಕೆಎಸ್ಆರ್‌ಟಿಸಿ ಬಸ್ ಚಾಲಕರಿಗೆ ಆರೋಗ್ಯ ಹಾಗೂ ಕಣ್ಣು ತಪಾಸಣೆ ಮಾಡಲಾಗುತ್ತಿದೆ. ಅಲ್ಲದೇ, ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಲಾಗುತ್ತದೆ’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ‘ಜಿಲ್ಲಾ ಪೊಲೀಸ್ ಇಲಾಖೆಯಿಂದ 414 ಚಾಲನಾ ಪರವಾನಗಿಗಳ ಅಮಾನತಿಗೆ ಸಾರಿಗೆ ಇಲಾಖೆಗೆ ಶಿಫಾರಸು ಮಾಡಲಾಗಿದೆ. ಈ ಪೈಕಿ 257 ಚಾಲನಾ ಪರವಾನಗಿ ಅಮಾನತು ಮಾಡಲಾಗಿದೆ ಎಂದರು.

ಸ್ಮಾರ್ಟ್‌ಸಿಟಿ ಲಿಮಿಟೆಡ್, ಆರ್.ಟಿ.ಒ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT