ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳವೆ ಬಾವಿ: ಜಿಲ್ಲೆಗೆ ₹8.50 ಕೋಟಿ

ಪ್ರತಿ ತಾಲ್ಲೂಕಿಗೆ ತಲಾ ₹8.50 ಅನುದಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾಹಿತಿ
Published 18 ಏಪ್ರಿಲ್ 2024, 14:18 IST
Last Updated 18 ಏಪ್ರಿಲ್ 2024, 14:18 IST
ಅಕ್ಷರ ಗಾತ್ರ

ಶಿರಾ: ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳಲು ಅನುದಾನದ ಕೊರತೆಯಿಲ್ಲ. ಹೊಸ ಕೊಳವೆ ಬಾವಿ ಕೊರೆಯಲು ಸರ್ಕಾರದಿಂದ ಎಲ್ಲ ತಾಲ್ಲೂಕಿಗೂ ತಲಾ ₹8.50 ಲಕ್ಷದಂತೆ ₹8.50 ಕೋಟಿ ಅನುದಾನ ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಬರ, ಕುಡಿಯುವ ನೀರಿನ ಸಮಸ್ಯೆ, ಮೇವಿನ ಕೊರತೆ, ನರೇಗಾ ಪ್ರಗತಿ ಮತ್ತು ಚುನಾವಣೆ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಕುಡಿಯುವ ನೀರು ಪೂರೈಸುವುದು ಅಧಿಕಾರಿಗಳ ಕರ್ತವ್ಯ. ತಾಲ್ಲೂಕು ಪಂಚಾಯಿತಿ ಮತ್ತು ತಾಲ್ಲೂಕು ಕಚೇರಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಒಬ್ಬರ ಮೇಲೊಬ್ಬರು ನೆಪ ನೀಡಿ ಕಾರ್ಯದಿಂದ ವಿಮುಖರಾದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಲ್ಲಿ ದೂರು ಬಂದ 24 ಗಂಟೆಯೊಳಗೆ ತುರ್ತು ಕ್ರಮ ಕೈಗೊಳ್ಳುವುದಲ್ಲದೆ ಗ್ರಾಮೀಣ ಪ್ರದೇಶದ ರೈತರ ದೂರವಾಣಿ ಕರೆಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗ್ರಾಮೀಣ ಪ್ರದೇಶದಲ್ಲಿ ಕೊಳವೆ ಬಾವಿಗಳಿಗೆ ಕಡ್ಡಾಯವಾಗಿ ನಿರಂತರ ಜ್ಯೋತಿಯಡಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಬತ್ತಿ ಹೋದ ಕೊಳವೆ ಬಾವಿಗಳನ್ನು ಇನ್ನಷ್ಟು ಆಳ ಕೊರೆಯಲು ಕ್ರಮಕೈಗೊಳ್ಳಬೇಕು. ಮಳೆ ಬಾರದೆ ನೀರಿನ ಸಮಸ್ಯೆ ಹೀಗೆ ಮುಂದುವರೆದಲ್ಲಿ ಹೊಸ ಕೊಳವೆ ಬಾವಿ ಕೊರೆಯುವ ಸಂಬಂಧ ತಾಲ್ಲೂಕು ಕಾರ್ಯಪಡೆ ಸಭೆಯಲ್ಲಿ ಅನಮೋದನೆ ಪಡೆದು ಕ್ರಮವಹಿಸಬೇಕು. ಬರ, ಕುಡಿಯುವ ನೀರಿನ ಸಮಸ್ಯೆ, ಮೇವಿನ ಕೊರತೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದರೂ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಗಮನಕ್ಕೆ ತರಬೇಕು ಎಂದರು.

ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ದುಡಿಯುವ ಕೈಗಳಿಗೆ ಕೆಲಸವಿಲ್ಲ ಎಂಬ ದೂರು ಬಾರದಂತೆ ಗುರಿ ಮೀರಿ ಪ್ರಗತಿ ಸಾಧಿಸಬೇಕು. ಸದ್ಯ ಚಾಲ್ತಿಯಲ್ಲಿರುವ ಕಾಮಗಾರಿ ಮುಂದುವರೆಸಿ, ಚುನಾವಣಾ ನೀತಿ ಸಂಹಿತೆ ಮುಕ್ತಾಯವಾದ ನಂತರ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳವಂತೆ ಸೂಚಿಸಿದರು.

ತಾಲ್ಲೂಕಿನಲ್ಲಿ ಜಾನುವಾರುಗಳ ಮೇವಿನ ಕೊರತೆ ನೀಗಿಸಲು ಏಪ್ರಿಲ್‌ 23ರಿಂದ ಕುರುಬರಾಮನಹಳ್ಳಿ ಗ್ರಾಮದಲ್ಲಿ ಮೇವು ಬ್ಯಾಂಕ್ ತೆರೆಯಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಹಾಗೂ ದನ- ಕರುಗಳ ಕುಡಿಯುವ ನೀರಿಗಾಗಿ ನಿರ್ಮಿಸಿರುವ ನೀರಿನ ತೊಟ್ಟಿಗಳಿಗೆ ನೀರು ತುಂಬಿಸುವಂತೆ ಸೂಚಿಸಿದರು.

ತಾ.ಪಂ ಇಒ ಹನುಮಂತಪ್ಪ ಮಾತನಾಡಿ, ತಾಲೂಕಿನಲ್ಲಿರುವ 42 ಗ್ರಾ.ಪಂಗಳ ಪೈಕಿ 32 ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಮೂರು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. 19 ಖಾಸಗಿ ಕೊಳವೆ ಬಾವಿಗಳಿಂದ ಬಾಡಿಗೆ ಆಧಾರದ ಮೇಲೆ ನೀರು ಪಡೆಯಲಾಗಿದೆ ಎಂದರು.

ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಶೀಲ್ದಾರ್ ಡಾ.ದತ್ತಾತ್ರೇಯ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಿಡಿಒಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

30 ವರ್ಣರಂಜಿತ ಮತಗಟ್ಟೆ

ಜಿಲ್ಲೆಯಲ್ಲಿ ಕನಿಷ್ಠ 30 ಮತಗಟ್ಟೆಗಳನ್ನು ವನ್ಯಸಂಪತ್ತು ಕಲೆ ಸಂಸ್ಕೃತಿಯನ್ನು ಬಿಂಬಿಸುವಂತೆ ವರ್ಣರಂಜಿತವಾಗಿ ಸಜ್ಜುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT