ತುಮಕೂರು: ಯಾವುದೇ ಗೊಂದಲಗಳಿಗೆ ಅವಕಾಶ ಇಲ್ಲದಂತೆ ಜಿಲ್ಲೆಯಲ್ಲಿ ದೋಷರಹಿತ ಮತದಾರರ ಪಟ್ಟಿ ಸಿದ್ದಪಡಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ತಿಳಿಸಿದರು.
ನಗರದಲ್ಲಿ ಸಾರ್ವಜನಿಕರಿಗೆ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2019 ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿದ್ದ ಸೈಕಲ್ ಜಾಥಾದಲ್ಲಿ ಭಾಗವಹಿಸಿ ಮಾತನಾಡಿದರು.
ಈ ಹಿಂದೆ ನಡೆದ ಚುನಾವಣೆಗಳಲ್ಲಿ ಮತದಾರರ ಹೆಸರು ಕೈಬಿಟ್ಟಿದ್ದು ಸೇರಿದಂತೆ ಹಲವಾರು ಲೋಪ ದೋಷಗಳಿಂದ ಜನರಲ್ಲಿ ತೀವ್ರ ಗೊಂದಲಗಳು ಸೃಷ್ಟಿಯಾಗಿದ್ದವು.ಈ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸುವ ಸಲುವಾಗಿ ದೋಷ ರಹಿತ ಮತದಾರರ ಪಟ್ಟಿ ಸಿದ್ದಪಡಿಸಲು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾತನಾಡಿ, ನ. 20ರ ವರೆಗೆ ಮತದಾರರ ಪಟ್ಟಿಯಲ್ಲಿನ ಲೋಪದೋಷ ಸರಿಪಡಿಸಲು ಅವಕಾಶ ಕಲ್ಪಿಸಲಾಗಿದ್ದು, ಮತದಾರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೋರಿದರು.
ನಗರದ ಜೂನಿಯರ್ ಕಾಲೇಜು ಮೈದಾನದಿಂದ ಆರಂಭವಾದ ಸೈಕಲ್ ಜಾಥಾಕ್ಕೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ.ದೇವರಾಜು ಹಸಿರು ನಿಶಾನೆ ತೋರಿದರು.
ಬಿ.ಎಚ್.ರಸ್ತೆ, ಟೌನ್‌ಹಾಲ್, ಅಶೋಕ ರಸ್ತೆ, ಚರ್ಚ್ ಸರ್ಕಲ್, ಹೊರಪೇಟೆ, ಕೋತಿತೋಪು, ಶಿವಕುಮಾರ ಸ್ವಾಮೀಜಿ ಸರ್ಕಲ್ ಮೂಲಕ ಜಾಥಾವು ಮಹಾತ್ಮಗಾಂಧಿ ಕ್ರೀಡಾಂಗಣ ತಲುಪಿತು.
ಸೈಕಲ್ ಜಾಥಾದಲ್ಲಿ 500ಕ್ಕೂ ಶಾಲಾ ಕಾಲೇಜು ಮಕ್ಕಳು ಪಾಲ್ಗೊಂಡಿದ್ದರು.ಜಿಲ್ಲಾ ಪರಿಶಿಷ್ಟ ಜಾತಿ, ಪಂಗಡಗಳ ಅಧಿಕಾರಿ ರಾಜಕುಮಾರ್, ನಿರ್ಮಿತಿ ಕೇಂದ್ರದ ರಾಜಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜು, ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಸ್ವಾಮಿ, ಡಿಡಿಪಿಐ ಮಂಜುನಾಥ್, ಬಿಇಓ ರಂಗದಾಸಪ್ಪ, ವಸಂತಿ ಉಪ್ಪಾರ್, ಹನುಮನಾಯಕ್, ಶ್ರೀನಿವಾಸ್ ಹಾಗೂ ಜಿ.ಪಂ. ಉಪಕಾರ್ಯದರ್ಶಿ ಪ್ರಕಾಶ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.