ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು | 194 ಎಕರೆ ಜಮೀನಿನಲ್ಲಿ ನಿವೇಶನ ಹಂಚಿಕೆಗೆ ಕ್ರಮ

ಜಿಲ್ಲಾ ಪಂಚಾಯಿತಿ ಸಿಇಒ ಪ್ರಭು ಜಿ. ಮಾಹಿತಿ
Published 14 ಆಗಸ್ಟ್ 2024, 14:33 IST
Last Updated 14 ಆಗಸ್ಟ್ 2024, 14:33 IST
ಅಕ್ಷರ ಗಾತ್ರ

ಗುಬ್ಬಿ: ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಒ ಹಾಗೂ ಸಿಬ್ಬಂದಿಗಳಲ್ಲಿ ಗ್ರಾಮ ಪಂಚಾಯಿತಿ ಯೋಜನೆ ಹಾಗೂ ಅನುದಾನದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬುಧವಾರ ಕಾರ್ಯಾಗಾರ ನಡೆಯಿತು.

ಜಿಲ್ಲಾ ಪಂಚಾಯಿತಿ ಸಿಇಒ ಪ್ರಭು ಜಿ. ಮಾತನಾಡಿ, ಕಳೆದ ಆರ್ಥಿಕ ವರ್ಷದಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗಿಂತ ಗುಬ್ಬಿ ತಾಲ್ಲೂಕಿನಲ್ಲಿ ಕಡಿಮೆ ಅನುದಾನ ಬಳಸಿಕೊಂಡಿರುವುದು ವಿಪರ್ಯಾಸ ಎಂದರು.

ಸಮುದಾಯ ಆಧಾರಿತ ಕೆಲಸಗಳಿಗೆ ಆದ್ಯತೆ ನೀಡುವ ಉದ್ದೇಶದಿಂದ ಇದುವರೆಗೂ ತಾಲ್ಲೂಕಿನಲ್ಲಿ ದನದ ಕೊಟ್ಟಿಗೆ ನಿರ್ಮಾಣಕ್ಕೆ ಹೆಚ್ಚಿನ ಗಮನ ನೀಡಿರಲಿಲ್ಲ. ತಾಲ್ಲೂಕಿನಲ್ಲಿ ದನದ ಕೊಟ್ಟಿಗೆಗಳಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ ಇನ್ನುಮುಂದೆ ಆದ್ಯತೆಗೆ ಅನುಗುಣವಾಗಿ ಅನುಮೋದನೆ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ನರೇಗಾ ಯೋಜನೆಯಲ್ಲಿ ಸದಸ್ಯರು ಸಮುದಾಯ ಆಧಾರಿತ ಕೆಲಸಗಳಿಗೆ ಆದ್ಯತೆ ನೀಡಿದಲ್ಲಿ ಅಭಿವೃದ್ಧಿ ಸಾಧ್ಯ. ಗ್ರಾಮ ಪಂಚಾಯಿತಿಗಳಿಗೆ ಅನುದಾನದ ಅಗತ್ಯವಿದ್ದಲ್ಲಿ ಹೆಚ್ಚುವರಿ ಕ್ರಿಯಾ ಯೋಜನೆ ಕಳಿಸಿಕೊಟ್ಟಲ್ಲಿ ಶೀಘ್ರ ಅನುಮೋದನೆ ನೀಡಲಾಗುವುದು ಎಂದು ಹೇಳಿದರು.

ತಾಲ್ಲೂಕಿನಲ್ಲಿ 194 ಎಕರೆ ಜಮೀನನ್ನು ಗುರುತಿಸಿ ಅರ್ಹ ವಸತಿ ರಹಿತರಿಗೆ ನಿವೇಶನ ಹಂಚಲು ಕ್ರಮ ಕೈಗೊಳ್ಳಲಾಗುತ್ತಿದೆ. ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಾತಿ ವ್ಯವಸ್ಥಿತವಾಗಿಲ್ಲದ ಕಾರಣ ಕಂದಾಯ ವಸೂಲಾತಿ ಆಗುತ್ತಿಲ್ಲ. ಶೀಘ್ರ ತಾಲ್ಲೂಕಿನಲ್ಲಿ ಇ- ಸ್ವತ್ತು ಅಭಿಯಾನ ಪ್ರಾರಂಭಿಸಿ, ಕಂದಾಯ ವಸೂಲಾತಿ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಅಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್ ಮಾತನಾಡಿ, ನಿಯಮಾನುಸಾರ ಗ್ರಾಮ ಪಂಚಾಯಿತಿಗಳಿಗೆ ಬೇಕು-ಬೇಡಗಳನ್ನು ತೀರ್ಮಾನಿಸುವ ಅಧಿಕಾರವಿದೆ. ಎಲ್ಲಾ ವಿಚಾರಗಳಿಗೂ ಮೇಲಧಿಕಾರಿಗಳು ಮೂಗು ತೂರಿಸುವ ಮೂಲಕ ಜನಪ್ರತಿನಿಧಿಗಳ ಹಕ್ಕನ್ನು ಮೊಟಕುಗೊಳಿಸಲು ಪ್ರಯತ್ನಿಸುತ್ತಿರುವುದು ಖಂಡನೀಯ. ಸದಸ್ಯರೆಲ್ಲರೂ ಒಗ್ಗಟ್ಟಿನಿಂದ ಇದ್ದಲ್ಲಿ ಕಾಮಗಾರಿಗೆ ಅಗತ್ಯ ಅನುದಾನವನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ತಾಲ್ಲೂಕಿನ 34 ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಒ ಹಾಗೂ ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT