ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ವರ್ಷಗಳ ನಂತರ ಮರಳಿ ಮನೆಗೆ ಬಂದ ಮಗನನ್ನು ಕ್ವಾರಂಟೈನ್‌ಗೆ ಕಳುಹಿಸಿದರು

Last Updated 31 ಮೇ 2020, 10:42 IST
ಅಕ್ಷರ ಗಾತ್ರ

ಕುಣಿಗಲ್: ತಾಲ್ಲೂಕಿನ ಗುನ್ನಾಗರೆ ಗ್ರಾಮದ ಕೃಷ್ಣಪ್ಪ ದಂಪತಿಗೆ ಕೊರೊನಾ ವರವಾಗಿ ಪರಿಣಮಿಸಿದೆ. ಹತ್ತು ವರ್ಷಗಳ ಹಿಂದೆ ಮನೆ ತೊರೆದು ಹೋಗಿದ್ದ ಮಗ ಕೊರೊನಾ ಭೀತಿಯಿಂದ ಹಿಂತಿರುಗಿ ಬಂದಿದ್ದಾರೆ.

ತಾಲ್ಲೂಕಿನ ಕೊತ್ತಗೆರೆ ಹೋಬಳಿಯ ಗುನ್ನಾಗರೆ ಗ್ರಾಮದ ಕೃಷ್ಣಪ್ಪಅವರ ಮಗ ರಂಗಸ್ವಾಮಿ 2011ರಲ್ಲಿ ಶಾಲೆಗೆಂದು ಹೋದವರು ಕಾಣೆಯಾಗಿದ್ದರು. ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಮಗ ಕಾಣೆಯಾದ ಹಿನ್ನೆಲೆಯಲ್ಲಿ ಹೆತ್ತವರು ಕಣ್ಣೀರಿನಲ್ಲಿಯೇ ದಿನಗಳನ್ನು ನೂಕುತ್ತಿದ್ದರು.

ಶುಕ್ರವಾರ ರಾತ್ರಿ ರಂಗಸ್ವಾಮಿ ತನ್ನ ಅಜ್ಜಿಯ ಮನೆ( ಶೆಟ್ಟಿಗೆರೆಗೆ) ಬಂದು ತನ್ನ ಪರಿಚಯವನ್ನು ಹೇಳಿಕೊಂಡಾಗ ಆಶ್ಚರ್ಯವಾಗಿ, ತಂದೆ ತಾಯಿಯ ಗಮನಕ್ಕೆ ತಂದಿದ್ದಾರೆ. ಮಗ ಬಂದಿರುವ ಸುದ್ದಿ ತಿಳಿದು ಶೆಟ್ಟಿಗೆರೆಗೆ ಬಂದ ಕೃಷ್ಣಪ್ಪ ದಂಪತಿ ಮಗನನ್ನು ನೋಡಿ ಆನಂದಬಾಷ್ಪ ಸುರಿಸಿದ್ದಾರೆ.

ರಂಗಸ್ವಾಮಿ ಕಳೆದ ಹತ್ತುವರ್ಷಗಳಿಂದ ಬೀದರ್ ಜಿಲ್ಲೆ ಭಾಲ್ಕಿಯಲ್ಲಿ ಕೆಲಸ ಮಾಡುತ್ತಿದ್ದು, ಕೊರೊನಾ ಹಿನ್ನೆಲೆಯಲ್ಲಿ ಕೆಲಸವಿಲ್ಲದ ಕಾರಣ ಬೇಸತ್ತು ತವರಿಗೆ ಬರುವ ಮನಸ್ಸು ಮಾಡಿದ್ದಾರೆ ಎಂದು ಚಿಕ್ಕಪ್ಪ ಕುಮಾರ್ ತಿಳಿಸಿದ್ದಾರೆ.

ಮಹಾರಾಷ್ಟ್ರ ಗಡಿ ಭಾಗದಿಂದ ಬಂದಿರುವ ಕಾರಣ ಪೋಷಕರೆ ಎಚ್ಚೆತ್ತು, ಹತ್ತು ವರ್ಷದ ನಂತರ ಬಂದ ಮಗನನ್ನು ಮನೆಗೆ ಸೇರಿಸದೆ,
ಆರೋಗ್ಯ ತಪಾಸಣೆಗೆಂದು ಸಂಬಂಧಪಟ್ಟವರಿಗೆ ಮಾಹಿತಿ ನೀಡಿದ್ದರು. ಅವರನ್ನು ಹುಲಿಯೂರು ದುರ್ಗದ ಹೇಮಗಿರಿಬೆಟ್ಟದ ಬಳಿಯ ವಸತಿ ಶಾಲೆಗೆ ಕ್ವಾರಂಟೈನ್ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT