ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

JDS ಮುಖಂಡರ ಮೇಲೆ ಹಲ್ಲೆ ಆರೋಪ: ಕಾಂಗ್ರೆಸ್‌ ಮುಖಂಡರ ವಿರುದ್ಧ ಪ್ರಕರಣ ದಾಖಲು

Published 12 ಏಪ್ರಿಲ್ 2024, 5:16 IST
Last Updated 12 ಏಪ್ರಿಲ್ 2024, 5:16 IST
ಅಕ್ಷರ ಗಾತ್ರ

ಕುಣಿಗಲ್: ತಾಲ್ಲೂಕಿನ ಜೆಡಿಎಸ್ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಮುಖಂಡರು ಹಲ್ಲೆ ನಡೆಸಿದ ಆರೋಪದ ಮೇಲೆ ‍ಪಟ್ಟಣದ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಪರ ಬುಧವಾರ ಪ್ರಚಾರ ಮಾಡುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್ ಮುಂಖಡ ಕೆಂಪನಹಳ್ಳಿ ಬೋರೆಗೌಡ, ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ತಪ್ಪಿಸಿಕೊಂಡ ಕಾರಣ ಚಾಕು ಹಣೆಗೆ ಹೊಕ್ಕಿ ತೀವ್ರಗಾಯವಾಗಿದೆ. ಎನ್‌ಡಿಎ ಪರ ಪ್ರಚಾರ ಮಾಡಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು ಎಂದು ಆರೋಪಿಸಿ ಅಂಚೇಪಾಳ್ಯ ಬಳಿ ಕೆಂಪನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್ ದೂರು ನೀಡಿದ್ದಾರೆ.

ತಾಲ್ಲೂಕಿನ ಕೊತ್ತಗೆರೆಯಲ್ಲಿ ಗುರುವಾರ ಕಾಂಗ್ರೆಸ್ ಮುಖಂಡರಾದ ಅನಿಲ್, ನಾರಾಯಣ, ಗುಂಡ ಅವರು ಸೇರಿ ಹಲ್ಲೆ ನಡೆಸಿದ್ದಾರೆ ಎಂದು  ಕೊತ್ತಗೆರೆ ಪಾಳ್ಯದ ಚಂದ್ರಯ್ಯ ಆರೋಪಿಸಿದ್ದಾರೆ.

ಜೆಡಿಎಸ್ ಮುಖಂಡರನ್ನು ಬಲವಂತವಾಗಿ ಕಾಂಗ್ರೆಸ್‌ಗೆ ಸೇರ್ಪಡೆ ಮಾಡುತ್ತಿರುವ ಬಗ್ಗೆ ಶೇವಿಂಗ್ ಷಾಪ್ ಬಳಿ ಚರ್ಚಿಸುತ್ತಿದ್ದಾಗ ವಾಗ್ವಾದ ನಡೆದು ಹಲ್ಲೆ ನಡೆಸಿದ್ದಾರೆ ಎಂದು ಚಂದ್ರಯ್ಯ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತರ ವರ್ತನೆಯನ್ನು ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಬಿ.ಎನ್.ಜಗದೀಶ್ ಖಂಡಿಸಿದ್ದಾರೆ.

‘ಶಾಸಕರು ಪ್ರಾಮಾಣಿಕವಾಗಿ ಪ್ರಚಾರ ಮಾಡಲಿ, ಅದರೆ ಕಾರ್ಯಕರ್ತರನ್ನು ಅಡ್ಡದಾರಿಗೆಳೆದು ಪ್ರಚಾರ ಮಾಡುತ್ತಿದ್ದಾರೆ. ತಾಲ್ಲೂಕಿನಲ್ಲಿ ಜೆಡಿಎಸ್ ಮುಖಂಡರ ಮೇಲೆ ಕಾಂಗ್ರೆಸ್ ಮುಖಂಡರಿಂದ ಹಲ್ಲೆಯಾಗುತ್ತಿದೆ. ಪೊಲೀಸ ಅಧಿಕಾರಿಗಳು ಕಾನೂನು ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಈ ಬಗ್ಗೆ ಚುನಾವಣಾಧಿಕಾರಿ ಗಮನಕ್ಕೆ ತರಲಾಗಿದೆ. ಕಾನೂನು ಕ್ರಮ ತೆಗೆದುಕೊಳ್ಳದಿದ್ದರೆ ಪ್ರತಿಭಟನೆ ಅನಿವಾರ್ಯವಾಗುತ್ತದೆ’ ಎಂದು ಎಚ್ಚರಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT