ತುಮಕೂರು: ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನದ ಭಾಗವಾಗಿ ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಒಬಿಸಿ ಮೋರ್ಚಾ ವತಿಯಿಂದ ಸದಸ್ಯತ್ವ ನೋಂದಣಿ ಕಾರ್ಯಾಗಾರ ಏರ್ಪಡಿಸಲಾಗಿತ್ತು.
ಒಬಿಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಕೆ.ವೇದಮೂರ್ತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿ, ‘ಜಿಲ್ಲೆಯಲ್ಲಿ ಬಿಜೆಪಿಯ ಒಬಿಸಿ ಘಟಕ ಪ್ರಬಲವಾಗಿದೆ. 11 ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 1 ಲಕ್ಷ ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಿದೆ. ಒಬಿಸಿ ಘಟಕದ ಕಾರ್ಯಕರ್ತರು, ಮುಖಂಡರು ತಮ್ಮ ಬೂತ್ ಮಟ್ಟದಲ್ಲಿ ಕನಿಷ್ಠ 100 ಸದಸ್ಯರನ್ನು ಸೇರಿಸಬೇಕು’ ಎಂದು ಮನವಿ ಮಾಡಿದರು.
ಪಕ್ಷವನ್ನು ಬಲವಾಗಿ ಕಟ್ಟಲು ಮುನ್ನುಡಿ ಬರೆಯಬೇಕು. ಜಿಲ್ಲೆಯಲ್ಲಿ ಕಳೆದ ಲೋಕಸಭಾ, ವಿಧಾನಸಭಾ ಚುನಾವಣೆಗಳಲ್ಲಿ ಒಬಿಸಿ ಘಟಕ ಸಕ್ರಿಯವಾಗಿ ಕೆಲಸ ಮಾಡಿದೆ. ಹಿಂದುಳಿದ ವರ್ಗಗಳ ಮತಗಳು ಬಿಜೆಪಿ ಅಭ್ಯರ್ಥಿಗೆ ಬರುವಂತೆ ಮಾಡಿದೆ. ಮುಂದಿನ ಚುನಾವಣೆಗಳಲ್ಲಿ ಮತ್ತಷ್ಟು ಚುರುಕಾಗಿ ಕೆಲಸ ಮಾಡಬೇಕು ಎಂದರು.
ಒಬಿಸಿ ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯೆ ಪ್ರೇಮಾ ನಾಗಯ್ಯ, ರಾಜ್ಯ ಕಾರ್ಯಕಾರಿಣಿ ಸದಸ್ಯ ಬನಶಂಕರಿ ಬಾಬು, ಪದಾಧಿಕಾರಿಗಳಾದ ರಾಘವೇಂದ್ರ, ಹನುಮಂತರಾಜು, ಜಯಣ್ಣ, ಮಲ್ಲಿಕಾರ್ಜುನಯ್ಯ, ಪುಟ್ಟರಾಜು ಇತರರು ಉಪಸ್ಥಿತರಿದ್ದರು.