ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಹುಲ್ ಹೇಳಿಕೆ: ಬಿಜೆಪಿ ಪ್ರತಿಭಟನೆ

Published : 18 ಸೆಪ್ಟೆಂಬರ್ 2024, 14:19 IST
Last Updated : 18 ಸೆಪ್ಟೆಂಬರ್ 2024, 14:19 IST
ಫಾಲೋ ಮಾಡಿ
Comments

ತುಮಕೂರು: ಪರಿಶಿಷ್ಟರಿಗೆ ನೀಡುತ್ತಿರುವ ಮೀಸಲಾತಿ ನಿಲ್ಲಿಸುವ ವಿಚಾರವಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಬಿಜೆಪಿ ಎಸ್‌ಸಿ, ಎಸ್‌ಟಿ ಮೋರ್ಚಾ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್, ರಾಹುಲ್ ಗಾಂಧಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಪರಿಶಿಷ್ಟರಿಗೆ ನೀಡುತ್ತಿರುವ ಮೀಸಲಾತಿ ಮುಂದುವರಿಸಬೇಕು ಎಂದು ಆಗ್ರಹಿಸಿದರು. ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ನಿಜಬಣ್ಣ ಬಯಲಾಗಿದೆ. ಈವರೆಗೆ ಪರಿಶಿಷ್ಟರನ್ನು ಮತ ಬ್ಯಾಂಕ್ ಮಾಡಿಕೊಳ್ಳಲಾಗಿತ್ತು. ಸಮುದಾಯದ ಪ್ರಗತಿಗೆ ಕಾರ್ಯಕ್ರಮ ರೂಪಿಸಲಿಲ್ಲ. ಇಷ್ಟು ವರ್ಷಗಳ ಕಾಲ ಕಾಂಗ್ರೆಸ್ ಆಡಳಿತದಲ್ಲಿ ಪರಿಶಿಷ್ಟರ ಪರಿಸ್ಥಿತಿ ಸುಧಾರಿಸಿಲ್ಲ ಎಂದು ಪ್ರತಿಭಟನಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಎಸ್‌ಟಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಹಾಂತೇಶ ನಾಯಕ, ‘ರಾಹುಲ್ ಗಾಂಧಿ ಅಮೆರಿಕ ಪ್ರವಾಸದಲ್ಲಿದ್ದ ವೇಳೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ತೆಗೆದುಹಾಕಲಾಗುವುದು ಎಂದು ಹೇಳಿದ್ದಾರೆ. ಸಂವಿಧಾನ ಪುಸ್ತಕ ಹಿಡಿದುಕೊಂಡು ಬಾಯಿ ಮಾತಿಗೆ ನಾವು ಸಂವಿಧಾನ ರಕ್ಷಕರು ಎನ್ನುತ್ತಾರೆ. ಮತ್ತೊಂದೆಡೆ ಮೀಸಲಾತಿ ರದ್ದುಪಡಿಸುವ ಮಾತುಗಳನ್ನಾಡುತ್ತಾರೆ’ ಎಂದು ಆರೋಪಿಸಿದರು.

ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವೈ.ಎಚ್.ಹುಚ್ಚಯ್ಯ, ‘ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಾದ ಕೋಟ್ಯಂತರ ರೂಪಾಯಿ ಹಣವನ್ನು ಲೂಟಿ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದ್ದಾರೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ನಡೆಸಿ ಅದೇ ಹಣವನ್ನು ಚುನಾವಣೆಗೆ ಬಳಸಿಕೊಂಡು ಸಮುದಾಯಕ್ಕೆ ದ್ರೋಹ ಮಾಡಿದ್ದಾರೆ’ ಎಂದು ಟೀಕಿಸಿದರು.

ಕಾಂಗ್ರೆಸ್ ಸರ್ಕಾರ ಪರಿಶಿಷ್ಟರ ಅಭಿವೃದ್ಧಿಗಾಗಿ ಸಮರ್ಪಕವಾದ ಯೋಜನೆ ಜಾರಿಗೆ ತಂದಿಲ್ಲ. ಕೇವಲ ಮತ ಬ್ಯಾಂಕ್ ರಾಜಕಾರಣಕ್ಕೆ ಬಳಸಿಕೊಂಡಿದ್ದಾರೆ ಎಂದು ದೂರಿದರು.

ಎಸ್‌ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಆಂಜನಪ್ಪ, ಎಸ್‌ಟಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ್, ಯುವ ಮೋರ್ಚಾ ಅಧ್ಯಕ್ಷ ನವಚೇತನ್, ಮುಖಂಡರಾದ ಎಸ್.ಶಿವಪ್ರಸಾದ್, ಬಂಬೂ ಮೋಹನ್, ಹನುಮಂತರಾಯಪ್ಪ, ರಾಕೇಶ್, ಧನುಷ್ ನಾಯಕ್, ಸತ್ಯಮಂಗಲ ಜಗದೀಶ್, ಬೆಳಗುಂಬ ವೆಂಕಟೇಶ್, ಕೆ.ಎಸ್.ಕುಮಾರ್, ಜಿ.ಗಂಗಾಧರ್, ವೀರಣ್ಣ, ವೆಂಕಟೇಶಾಚಾರ್, ಸಣ್ಣರಂಗಯ್ಯ, ದಿಲೀಪ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT